ಕಲಬುರಗಿ | ಎಸ್ಐಆರ್ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ SFI ಪ್ರತಿಭಟನೆ
ಕಲಬುರಗಿ: ದೇಶಾದ್ಯಂತ ಜಾರಿಗೊಳಿಸಲಾಗುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣ ಕೈಬಿಡಬೇಕು ಹಾಗೂ ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಕಲಬುರಗಿ ಜಿಲ್ಲಾ ಸಮಿತಿ ಆಗ್ರಹಿಸಿದೆ.
ಸಮಿತಿ ಮುಖ್ಯಸ್ಥರು ನಗರದ ಸ್ಟೇಷನ್ ಬಜಾರ್ ಅಂಚೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಅಂಚೆ ಅಧೀಕ್ಷಕರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಜಿಲ್ಲಾ ಕಾರ್ಯದರ್ಶಿ ಇಮಾಮ್ ಸಾಬ್ ನದಾಫ್ ಮಾತನಾಡಿ, ಚುನಾವಣಾ ಆಯೋಗವು ಯಾವುದೇ ರಾಜಕೀಯ ಒತ್ತಡ ಹಾಗೂ ಪ್ರಭಾವಕ್ಕೆ ಒಳಗಾಗದೆ ಸ್ವತಂತ್ರವಾಗಿ, ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಇತ್ತೀಚಿನ ಆಯೋಗದ ಕಾರ್ಯವೈಖರಿ ಮತ್ತು SIR ಪ್ರಕ್ರಿಯೆ ಕುರಿತು ಸಾರ್ವಜನಿಕ ವಲಯದಲ್ಲಿ ಅನುಮಾನಗಳು ವ್ಯಕ್ತವಾಗುತ್ತಿವೆ. ಚುನಾವಣಾ ಆಯೋಗದ ಮೇಲಿನ ಜನರ ವಿಶ್ವಾಸ ಮರುಸ್ಥಾಪಿಸುವ ನೈತಿಕ ಹೊಣೆಗಾರಿಕೆ ಹೊತ್ತಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಮಂಜುನಾಥ್ ಆಜಾದಪುರ, ಪ್ರದೀಪ್ ಮ್ಯಾಗಡಿ, ಜಿಲ್ಲಾ ಸಹಕಾರ್ಯದರ್ಶಿಗಳಾದ ಬೃಂದಾ, ತಾಯಣ್ಣ ಟೋಕಪುರ್, ಮುಖಂಡರಾದ ಪೂಜಾ, ಬಾಬಾಸಾಹೇಬ, ವಿಕ್ರಾಂತ್, ಅಕ್ಷರ, ಅನಿತಾ, ಬಸವರಾಜ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.