Kalaburagi | ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯಾಗಿ ಶಿಂದೆ ಅವಿನಾಶ್ ಸಂಜೀವನ್ ನೇಮಕ
ಕಲಬುರಗಿ : ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಹುದ್ದೆಗಳ ಮರುಹಂಚಿಕೆ ಮಾಡಿ ಆದೇಶ ಹೊರಡಿಸಿದ್ದು, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಶಿಂದೆ ಅವಿನಾಶ್ ಸಂಜೀವನ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ.
ಅ. 30ರಂದು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, 2020ನೇ ಬ್ಯಾಚ್ನ ಐಎಎಸ್ ಅಧಿಕಾರಿ ಶಿಂದೆ ಅವಿನಾಶ್ ಸಂಜೀವನ್ ಅವರು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರ ಹುದ್ದೆಯ ಜತೆಗೆ ಕಲಬುರಗಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರ ಹೆಚ್ಚುವರಿ ಹೊಣೆಗಾರಿಕೆಯನ್ನೂ ನಿರ್ವಹಿಸಲಿದ್ದಾರೆ. ಈ ಹಿಂದೆ ಈ ಹೆಚ್ಚುವರಿ ಹೊಣೆಗಾರಿಕೆ ನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರನ್ನು ಜವಾಬ್ದಾರಿಯಿಂದ ಬಿಡುಗಡೆಗೊಳಿಸಲಾಗಿದೆ.
ಈ ವರ್ಗಾವಣೆ ಆದೇಶ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.