Kalaburagi | ಮೂಲಸೌಲಭ್ಯ ಕಲ್ಪಿಸುವ ಭರವಸೆ: ಸ್ಲಂ ನಿವಾಸಿಗಳ ಧರಣಿ ವಾಪಸ್
ಕಲಬುರಗಿ: ಕುಡಿಯುವ ನೀರು, ವಿದ್ಯುತ್ ಹಾಗೂ ಶೌಚಾಲಯದಂತಹ ಮೂಲಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ನಗರದ ರಾಮನಗರ ಭಾಗ-2ರ ಸ್ಲಂ ನಿವಾಸಿಗಳು ಮಹಾನಗರ ಪಾಲಿಕೆ ಎದುರು ನಡೆಸುತ್ತಿದ್ದ ನಿರಂತರ ಧರಣಿಯನ್ನು ಮಹಾಪೌರರ ಭರವಸೆಯ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.
ಸ್ಲಂ ಜನಾಂದೋಲನ ಕರ್ನಾಟಕದ ಕಲಬುರಗಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಡೆಯುತ್ತಿದ್ದ ಧರಣಿ ಸ್ಥಳಕ್ಕೆ ಮಹಾನಗರ ಪಾಲಿಕೆಯ ಮಹಾಪೌರರು ಭೇಟಿ ನೀಡಿ ಪ್ರತಿಭಟನಾಕಾರರ ಅಹವಾಲು ಆಲಿಸಿದರು. ನಿವಾಸಿಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಮಾಡುವುದಾಗಿ ಹಾಗೂ ತಾತ್ಕಾಲಿಕವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿ ಭರವಸೆ ನೀಡಿದರು.
ಮಹಾಪೌರರ ಭರವಸೆಯ ಹಿನ್ನೆಲೆಯಲ್ಲಿ ಧರಣಿ ನಿರತರು ತಮ್ಮ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆದರು. ಅದರಂತೆ ರಾಮನಗರ ಭಾಗ-2ರ ನಿವಾಸಿಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಮಾಡಲಾಗಿದೆ.
ಆದರೆ, ನಿವಾಸಿಗಳ ಪ್ರಮುಖ ಬೇಡಿಕೆಗಳಾದ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಸಂಪರ್ಕ ಹಾಗೂ ಶೌಚಾಲಯ ಸೌಲಭ್ಯ ಕಲ್ಪಿಸುವ ಕುರಿತು ಮಹಾನಗರ ಪಾಲಿಕೆ ಮುಂದಿನ ದಿನಗಳಲ್ಲಿ ಯಾವ ಕ್ರಮ ಕೈಗೊಳ್ಳಲಿದೆ ಎಂಬುದರತ್ತ ಇದೀಗ ನಿವಾಸಿಗಳ ಗಮನ ನೆಟ್ಟಿದೆ.