ಸೆಪ್ಟೆಂಬರ್‌ನಲ್ಲಿ 'ಕಲಬುರಗಿ ಸ್ಪೋರ್ಟ್ಸ್ ಹಬ್ಬ' ಆಯೋಜನೆ : ಸಚಿವ ಪ್ರಿಯಾಂಕ್ ಖರ್ಗೆ

Update: 2026-08-15 17:32 IST

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಕ್ರೀಡಾ ಸಂಸ್ಕೃತಿಯನ್ನು ಉತ್ತೇಜಿಸುವ ಮತ್ತು ಸ್ಥಳೀಯ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಸೆಪ್ಟೆಂಬರ್ 24, 25 ಮತ್ತು 26ರಂದು ಕಲಬುರಗಿ ಸ್ಪೋರ್ಟ್ಸ್ ಹಬ್ಬ-2026 ಆಯೋಜಿಸಲಾಗುವುದು ಎಂದು ಗೃಹ, ಐಟಿ-ಬಿಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ನಗರದ ಅರಿವು ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕಲಬುರಗಿ ನೆಕ್ಸ್ಟ್ ಫೌಂಡೇಷನ್ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಬುರಗಿ ಸ್ಪೋರ್ಟ್ಸ್ ಕಾರ್ನಿವಲ್-2026ರ ಲೋಗೊ ಹಾಗೂ ವಿಡಿಯೊ ಅನಾವರಣಗೊಳಿಸಿ ಅವರು ಮಾತನಾಡಿದರು.

ಕ್ರೀಡಾ ಹಬ್ಬದಲ್ಲಿ ಫುಟ್‌ಬಾಲ್, ಕ್ರಿಕೆಟ್, ವಾಲಿಬಾಲ್, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಚೆಸ್ ಹಾಗೂ ಮ್ಯಾರಥಾನ್ ಸೇರಿದಂತೆ ಒಟ್ಟು ಏಳು ಕ್ರೀಡೆಗಳು ನಡೆಯಲಿವೆ. ಬೆಂಗಳೂರಿನ ಸ್ಪ್ರೆಂಜೋ ಸಂಸ್ಥೆ ಹಾಗೂ ಸ್ಥಳೀಯ ಕ್ರೀಡಾ ಅಸೋಸಿಯೇಷನ್‌ಗಳ ಸಹಯೋಗದಲ್ಲಿ ಪಂದ್ಯಾವಳಿಗಳು ನಡೆಯಲಿದ್ದು, ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ ಕಲ್ಪಿಸಲಾಗುವುದು ಎಂದರು.

ಆಸಕ್ತ ಕ್ರೀಡಾಪಟುಗಳು ಡಿಜಿಟಲ್ ಪ್ಲಾಟ್‌ಫಾರ್ಮ್ ಮೂಲಕ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಪಂದ್ಯಗಳ ವೇಳಾಪಟ್ಟಿ, ಕ್ರೀಡಾ ನಿರ್ವಹಣೆ, ನೈಜ ಸಮಯದ ಲೈವ್ ಸ್ಕೋರ್ ಹಾಗೂ ಫಲಿತಾಂಶಗಳು ಆನ್‌ಲೈನ್‌ನಲ್ಲಿ ಲಭ್ಯವಿರಲಿವೆ. ಸಾರ್ವಜನಿಕರು ಪಂದ್ಯಾವಳಿಗಳನ್ನು ವೀಕ್ಷಿಸಲು ಫ್ಯಾನ್‌ಝೋನ್ ವ್ಯವಸ್ಥೆಯನ್ನೂ ಮಾಡಲಾಗುವುದು ಎಂದು ತಿಳಿಸಿದರು.

3.5 ಕೋಟಿ ರೂ. ದೇಣಿಗೆ ಸಂಗ್ರಹ :

ಜಿಲ್ಲೆಯ ಶೈಕ್ಷಣಿಕ, ವೈಜ್ಞಾನಿಕ ಹಾಗೂ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ಕಲಬುರಗಿ ನೆಕ್ಸ್ಟ್ ಫೌಂಡೇಷನ್‌ಗೆ ಈಗಾಗಲೇ ಸುಮಾರು 3.5 ಕೋಟಿ ರೂ. ದೇಣಿಗೆ ಸಂಗ್ರಹವಾಗಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುವ ಈ ಸಂಸ್ಥೆಯು ಯುವಶಕ್ತಿ ಹಾಗೂ ಮಾನವ ಸಂಪನ್ಮೂಲವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಹೊಸ ಆಯಾಮ ನೀಡಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

20 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿ :

ಜಿಲ್ಲೆಯಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗಾಗಿ 20 ಕೋಟಿ ರೂ. ವೆಚ್ಚದಲ್ಲಿ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಸ್ಪೋರ್ಟ್ಸ್ ಸಿಟಿ ನಿರ್ಮಾಣದ ನೀಲನಕ್ಷೆ ಸಿದ್ಧಗೊಂಡಿದ್ದು, ಮಹಿಳೆಯರಿಗಾಗಿ ನಿರ್ಮಿಸಲಾಗುತ್ತಿರುವ ಪ್ರತ್ಯೇಕ ಒಳಾಂಗಣ ಕ್ರೀಡಾಂಗಣದ ಕಾಮಗಾರಿ ಅಂತಿಮ ಹಂತದಲ್ಲಿದೆ. ಶೀಘ್ರದಲ್ಲೇ ಅದನ್ನು ಲೋಕಾರ್ಪಣೆ ಮಾಡಲಾಗುವುದು ಎಂದರು.

ಪ್ರತಿ ವರ್ಷ ರಾಜ್ಯ ಮಟ್ಟದ ಕ್ರೀಡಾ ಒಕ್ಕೂಟಗಳ ಸಹಯೋಗದಲ್ಲಿ ಜಿಲ್ಲೆಯಲ್ಲಿ ಬೃಹತ್ ಕ್ರೀಡಾಕೂಟಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ವೃತ್ತಿಪರ ಕ್ರೀಡಾ ನಿರ್ವಹಣೆ, ಡಿಜಿಟಲ್ ತಂತ್ರಜ್ಞಾನ, ಲೈವ್ ಕವರೇಜ್ ಹಾಗೂ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಒಟ್ಟುಗೂಡಿಸುವ ಮೂಲಕ ಕಲಬುರಗಿಯನ್ನು ಪ್ರಮುಖ ಕ್ರೀಡಾ ಕೇಂದ್ರವಾಗಿ ಬೆಳೆಸುವ ನಿಟ್ಟಿನಲ್ಲಿ ಸ್ಪೋರ್ಟ್ಸ್ ಕಾರ್ನಿವಲ್ ಮಹತ್ವದ ಹೆಜ್ಜೆಯಾಗಲಿದೆ ಎಂದು ಸಚಿವರು ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕರಾದ ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ವರ್ಷಾ ರಾಜೀವ ಜಾನೆ, ಜಿಲ್ಲಾಧಿಕಾರಿ ಇಕ್ರಂ ಶರೀಫ್, ನಗರ ಪೊಲೀಸ್ ಅಯುಕ್ತ ಎಸ್.ಡಿ.ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸುಲು, ಜಿಲ್ಲಾ ಪಂಚಾಯತ್ ಸಿ.ಇ.ಓ ರಾಹುಲ್ ಸಂಕನೂರ್, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಡಿ.ಡಿ.ಪಿ.ಐ ಶಂಕ್ರಮ ಢವಳಗಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ‌ ನಿರ್ದೇಶಕ ಸಂಗಮೇಶ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News