Kalaburagi | ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ತಡೆಗೆ ಕಟ್ಟುನಿಟ್ಟಿನ ಕ್ರಮ: ಡಿಸಿ ಇಕ್ರಮ್ ಶರೀಫ್

Update: 2026-08-07 20:56 IST

ಕಲಬುರಗಿ : ಜಿಲ್ಲೆಯಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಭಿಕ್ಷಾಟನೆ ಹಾಗೂ ಪೋಕ್ಸೋ ಪ್ರಕರಣಗಳನ್ನು ಸಂಪೂರ್ಣವಾಗಿ ತಡೆಗಟ್ಟಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಮಕ್ಕಳ ಮೇಲ್ವಿಚಾರಣಾ ಸಮಿತಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಮುಖ್ಯಮಂತ್ರಿ ಬಾಲಸೇವಾ ಯೋಜನೆ ಹಾಗೂ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಗಳ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರಿ ಹಾಗೂ ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುತ್ತಿರುವ ಬಾಲಮಂದಿರಗಳಿಗೆ ಸಂಬಂಧಿಸಿದ ಅಧಿಕಾರಿಗಳು ಪ್ರತಿ ತಿಂಗಳು ಕಡ್ಡಾಯವಾಗಿ ಭೇಟಿ ನೀಡಿ ನೈರ್ಮಲ್ಯ, ಭದ್ರತೆ ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಮಾತನಾಡಿ, ಪೋಕ್ಸೋ ಪ್ರಕರಣಗಳ ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ 60 ದಿನಗಳೊಳಗೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ವಿ. ಮಂಜುಳಾ ಪಾಟೀಲ್ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಇದುವರೆಗೆ 71 ಬಾಲ್ಯವಿವಾಹ, 22 ಬಾಲಕಾರ್ಮಿಕ, 16 ಪೋಕ್ಸೋ ಹಾಗೂ 14 ಮಕ್ಕಳ ಭಿಕ್ಷಾಟನೆ ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು.

ಈವರೆಗೆ 198 ಮಕ್ಕಳನ್ನು ಸುರಕ್ಷಿತವಾಗಿ ಪೋಷಕರ ವಶಕ್ಕೆ ಒಪ್ಪಿಸಲಾಗಿದ್ದು, ಮಕ್ಕಳ ಸಹಾಯವಾಣಿಗೆ ಬಂದ 293 ಕರೆಗಳ ಪೈಕಿ 285 ದೂರುಗಳನ್ನು ಇತ್ಯರ್ಥಪಡಿಸಲಾಗಿದೆ. ವಿಶೇಷ ಕಾರ್ಯಾಚರಣೆಗಳ ಮೂಲಕ 22 ಬಾಲಕಾರ್ಮಿಕರು ಹಾಗೂ 13 ಭಿಕ್ಷಾಟನೆಯಲ್ಲಿ ತೊಡಗಿದ್ದ ಮಕ್ಕಳನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಲಾಗಿದೆ. ಅಲ್ಲದೆ 80 ಬಾಲಕಿಯರು ಹಾಗೂ ಒಬ್ಬ ಬಾಲಕನ ಬಾಲ್ಯವಿವಾಹವನ್ನು ತಡೆಗಟ್ಟಲಾಗಿದೆ ಎಂದು ವಿವರಿಸಿದರು.

ಆಸ್ಪತ್ರೆಗಳಲ್ಲಿ ಅಪ್ರಾಪ್ತ ವಯಸ್ಸಿನ ಗರ್ಭಧಾರಣೆ ಪ್ರಕರಣಗಳು ಕಂಡುಬಂದಲ್ಲಿ ಕಡ್ಡಾಯವಾಗಿ ಮೆಡಿಕೋ-ಲೀಗಲ್ ಪ್ರಕರಣ ದಾಖಲಿಸಿ, ಆರ್‌ಸಿಎಚ್ ಪೋರ್ಟಲ್ ಹಾಗೂ ತಾಯಿ ಕಾರ್ಡ್ ಆಧಾರದ ಮೇಲೆ ಎಫ್‌ಐಆರ್ ದಾಖಲಿಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಪೋಕ್ಸೋ ಹಾಗೂ ಬಾಲ್ಯವಿವಾಹ ಸಂತ್ರಸ್ತ ಮಕ್ಕಳು, ಎಚ್‌ಐವಿ ಸೋಂಕಿತ ಪೋಷಕರ ಮಕ್ಕಳು ಹಾಗೂ ಸಂಕಷ್ಟದಲ್ಲಿರುವ ಮಕ್ಕಳಿಗೆ ವಿವಿಧ ಯೋಜನೆಗಳಡಿ ನೆರವು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಲಾಯಿತು.

ಪ್ರಾಯೋಜಕತ್ವ ಯೋಜನೆಯಡಿ 18 ವರ್ಷದೊಳಗಿನ ಅನಾಥ, ಕುಷ್ಠರೋಗ ಪೀಡಿತರ ಹಾಗೂ ಸಂಕಷ್ಟದಲ್ಲಿರುವ ಮಕ್ಕಳಿಗೆ ಮಾಸಿಕ 4 ಸಾವಿರ ರೂ. ಮತ್ತು ಬಾಲಗರ್ಭಿಣಿಯರಿಗೆ 6 ಸಾವಿರ ರೂ. ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ತಿಳಿಸಲಾಯಿತು.

ಬಾಲಮಂದಿರದ ಮಕ್ಕಳಿಗೆ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, 18 ವರ್ಷ ಪೂರ್ಣಗೊಂಡ ಯುವಕರಿಗೆ ‘ಉಪ್ಕಾರ’ ಯೋಜನೆಯಡಿ ಮಾಸಿಕ 3,500 ರೂ. ನೆರವು ನೀಡಲಾಗುತ್ತಿದೆ. ಅನುಪಾಲನಾ ಗೃಹಗಳ ಮೂಲಕ 19 ಬಾಲಕಿಯರಿಗೆ ಪದವಿ ಶಿಕ್ಷಣ, ನರ್ಸಿಂಗ್ ಹಾಗೂ ಟೈಲರಿಂಗ್ ತರಬೇತಿ ನೀಡಲಾಗುತ್ತಿದೆ ಎಂದು ಸಭೆಯಲ್ಲಿ ವಿವರಿಸಲಾಯಿತು.

ಬಾಲ ನ್ಯಾಯ ಮಂಡಳಿಯಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೇ, ಡಿಸಿಪಿ ಶಾಲೂ, ಪ್ರೊಬೇಷನರಿ ಐಎಎಸ್ ಅಧಿಕಾರಿ ಶ್ರೀಕರ್ ಮೋಘ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಂಕರಮ್ಮ ಡವಳಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಶರಣಪ್ಪ, ತಾಲೂಕು ಮಟ್ಟದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News