ಕಲಬುರಗಿ | ಆಸ್ತಿ ಕಳೆದುಕೊಂಡವರಿಗೆ ಪರಿಹಾರ ನೀಡಿ ರಸ್ತೆ ಅಗಲೀಕರಣ ಮಾಡಲಿ: ಸುಭಾಷ್ ಆರ್.ಗುತ್ತೇದಾರ ಆಗ್ರಹ
ಕಲಬುರಗಿ: ಆಳಂದ ಪಟ್ಟಣದ ಅಭಿವೃದ್ಧಿಯ ದೃಷ್ಟಿಯಿಂದ ಸರ್ಕಾರ ಕೈಗೊಳ್ಳುತ್ತಿರುವ ರಸ್ತೆ ಅಗಲೀಕರಣ ಕಾರ್ಯ ಸ್ವಾಗತಾರ್ಹವಾಗಿದೆ. ಆದರೆ, ಈ ಹಿಂದೆ ಶಾಸಕ ಬಿ.ಆರ್. ಪಾಟೀಲ್ ಅವರು ಹೇಳಿದಂತೆ ಆಸ್ತಿ ಕಳೆದುಕೊಂಡವರಿಗೆ ಮೊದಲು ಪರಿಹಾರ ನೀಡಿ ನಂತರವೇ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ಸುಭಾಷ್ ಆರ್.ಗುತ್ತೇದಾರ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಳಂದ ಪಟ್ಟಣದ ರಸ್ತೆ ಅಗಲೀಕರಣ ಹಾಗೂ ಸೌಂದರ್ಯೀಕರಣ ಕಾರ್ಯಕ್ಕಾಗಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಗರಾಭಿವೃದ್ಧಿ ಇಲಾಖೆಯಿಂದ 11 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿಸಿಕೊಂಡಿರುವುದಾಗಿ ತಿಳಿಸಿದರು. ಆ ಅನುದಾನದ ಸಂಪೂರ್ಣ ಸದ್ಬಳಕೆಯಾಗಬೇಕು ಎಂದು ಅವರು ಹೇಳಿದರು.
ದಿನೇ ದಿನೇ ಪಟ್ಟಣ ವಿಸ್ತಾರವಾಗುತ್ತಿದ್ದು, ಜನಸಂಖ್ಯೆಯೂ ಹೆಚ್ಚಾಗುತ್ತಿದೆ. ಆದರೆ, ರಸ್ತೆ ಅಗಲೀಕರಣದಿಂದ ಆಸ್ತಿ ಕಳೆದುಕೊಳ್ಳುತ್ತಿರುವವರಲ್ಲಿ ಬಹುತೇಕರು ಬಡ ಹಾಗೂ ಮಧ್ಯಮ ವರ್ಗದವರಾಗಿದ್ದಾರೆ. ಹೀಗಾಗಿ ಅವರಿಗೆ ನ್ಯಾಯಸಮ್ಮತ ಪರಿಹಾರ ನೀಡಿದ ನಂತರವೇ ರಸ್ತೆ ಅಗಲೀಕರಣ ಕಾರ್ಯ ಮುಂದುವರಿಸಬೇಕು ಎಂದು ಅವರು ಆಗ್ರಹಿಸಿದರು.
ರಸ್ತೆ ಅಗಲೀಕರಣ ಕಾರ್ಯಕ್ಕೆ ಚಾಲನೆ ನೀಡಲು ಆರ್.ಕೆ. ಪಾಟೀಲ್ ಅವರಿಗೆ ಯಾವ ಸಂವಿಧಾನಾತ್ಮಕ ಅಧಿಕಾರವಿದೆ ಎಂದು ಪ್ರಶ್ನಿಸಿದ ಅವರು, ತಾಲೂಕಿನಲ್ಲಿ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿದರು. ಶಾಸಕ ಬಿ.ಆರ್.ಪಾಟೀಲ್ ಅವರು ಆಳಂದವನ್ನು ಮರೆತಂತೆ ವರ್ತಿಸುತ್ತಿದ್ದು, ಕೇವಲ ಬೆಂಗಳೂರು–ದೆಹಲಿ ನಗರಗಳಲ್ಲಿ ಕುಳಿತು ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.
ಇನ್ನೂ ಆಳಂದ ಪಟ್ಟಣದ ಸುಲ್ತಾನಪೂರ ಗಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಪೈಪ್ ಒಡೆದು ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಈ ಬಗ್ಗೆ ಮುಖ್ಯಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಇದೇ ರೀತಿಯ ನಿರ್ಲಕ್ಷ್ಯ ಮುಂದುವರೆದರೆ ಸಾರ್ವಜನಿಕರೊಂದಿಗೆ ಸೇರಿ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.