Kalaburagi | ವಸತಿ ನಿಲಯದ ವಿದ್ಯಾರ್ಥಿ ಅನುಮಾನಾಸ್ಪದ ಸಾವು ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ DYFI, SFI ಆಗ್ರಹ
ಮೃತ ವಿದ್ಯಾರ್ಥಿ
ಕಲಬುರಗಿ : ನಗರದ ಅಂಬೇಡ್ಕರ್ ವಸತಿ ನಿಲಯದಲ್ಲಿ ವಿದ್ಯಾರ್ಥಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಆಘಾತಕಾರಿ ಹಾಗೂ ಆತಂಕಕಾರಿ ಸಂಗತಿಯಾಗಿದ್ದು, ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಡಿವೈಎಫ್ಐ ಹಾಗೂ ಎಸ್ಎಫ್ಐ ಜಿಲ್ಲಾ ಸಮಿತಿಗಳು ಆಗ್ರಹಿಸಿವೆ.
ವಿದ್ಯಾರ್ಥಿಗಳು ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕಾದ ವಸತಿ ನಿಲಯಗಳಲ್ಲೇ ಇಂತಹ ದುರಂತಗಳು ಸಂಭವಿಸುತ್ತಿರುವುದು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ವಸತಿ ನಿಲಯಗಳ ನಿರ್ವಹಣೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೆರವಾಗಬೇಕಾದ ವಸತಿ ನಿಲಯಗಳಲ್ಲಿ ಸುರಕ್ಷತೆ, ಆರೋಗ್ಯ ಮತ್ತು ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡದಿರುವುದು ಆತಂಕಕಾರಿ ಎಂದು ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ.
ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣ ಪತ್ತೆಹಚ್ಚಿ, ಘಟನೆಗೆ ಸಂಬಂಧಿಸಿದ ಎಲ್ಲ ಸತ್ಯಾಂಶಗಳನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು. ಪ್ರಕರಣವನ್ನು ಆಕಸ್ಮಿಕ ಸಾವು ಎಂದು ಪರಿಗಣಿಸಿ ಮುಚ್ಚಿಹಾಕುವ ಪ್ರಯತ್ನ ಮಾಡಬಾರದು. ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಮಣಿಯದೆ ತನಿಖೆ ನಡೆಸಿ, ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ.
ಈ ಕುರಿತು ಡಿವೈಎಫ್ಐ ರಾಜ್ಯಾಧ್ಯಕ್ಷ ಲವಿತ್ರ, ಜಿಲ್ಲಾ ಅಧ್ಯಕ್ಷೆ ಸಮೀನಾ, ಜಿಲ್ಲಾ ಕಾರ್ಯದರ್ಶಿ ಪ್ರಮೋದ್, ಜಿಲ್ಲಾ ಉಪಾಧ್ಯಕ್ಷ ಬಾಬಾಸಾಬ್, ಎಸ್ಎಫ್ಐ ಜಿಲ್ಲಾ ಅಧ್ಯಕ್ಷೆ ಸುಜಾತಾ, ಜಿಲ್ಲಾ ಕಾರ್ಯದರ್ಶಿ ಇಮಾಮ್ ಸಾಬ್ ಹಾಗೂ ಜಿಲ್ಲಾ ಸಮಿತಿ ಸದಸ್ಯ ಪ್ರದೀಪ್ ಆಗ್ರಹಿಸಿದ್ದಾರೆ.