Kalaburagi | ಸರ್ಕಾರಿ ನೌಕರರ ಮಕ್ಕಳಿಗೆ ಆ.22ರಂದು ಪ್ರತಿಭಾ ಪುರಸ್ಕಾರ
ಕಲಬುರಗಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ 2025–26ನೇ ಸಾಲಿನಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಕಲಬುರಗಿ ವಿಭಾಗದ ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಸರ್ಕಾರಿ ನೌಕರರ ಮಕ್ಕಳಿಗೆ ಆ.22ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.22ರಂದು ಮಧ್ಯಾಹ್ನ 2 ಗಂಟೆಗೆ ಸೇಡಂ ರಸ್ತೆಯ ಹಳೆಯ ಆರ್‌ಟಿಒ ಕಚೇರಿ ಎದುರಿನ ಎಂ.ಆರ್.ಎಂ.ಸಿ ಸ್ಯಾಕ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
ಪ.ಬ್ರ. ಶ್ರೀ ಸೋಮಶೇಖರ ಶಿವಾಚಾರ್ಯರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ರಾಜ್ಯ ಗೃಹ ಹಾಗೂ ಐಟಿ–ಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ಶಶೀಲ ನಮೋಶಿ, ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಸಂಕನೂರ ಹಾಗೂ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಸೇರಿದಂತೆ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
552 ವಿದ್ಯಾರ್ಥಿಗಳಿಗೆ ಪುರಸ್ಕಾರ :
ಕಲಬುರಗಿ ಜಿಲ್ಲೆಯಿಂದ 286, ಬೀದರ್‌ನಿಂದ 156 ಹಾಗೂ ಯಾದಗಿರಿಯಿಂದ 110 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 552 ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ತಲಾ 2,000 ರೂ. ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಒಟ್ಟು 11.04 ಲಕ್ಷ ರೂ. ವಿತರಿಸಲಾಗುವುದು ಎಂದು ಬಸವರಾಜ ಬಳೂಂಡಗಿ ತಿಳಿಸಿದರು.
ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ನೌಕರರು ಹಾಗೂ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಚಂದ್ರಕಾಂತ ಏರಿ, ಶ್ರೀಮಂತ ಪಾಟೇದಾರ, ಧರ್ಮರಾಯ ಜವಳಿ, ಕೃಷ್ಣಾಚಾರ್ಯ, ಎಂ.ಬಿ. ಪಾಟೀಲ, ಪ್ರಕಾಶ್ ಉದನೂರ, ಸುರೇಶ್ ವಗ್ಗೆ, ಸಿದ್ದಲಿಂಗಯ್ಯ ಮಠಪತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.