Kalaburagi | ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಶಿಕ್ಷಕನಿಗೆ 25 ವರ್ಷ ಜೈಲು
ಕಲಬುರಗಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಖಾಸಗಿ ಶಾಲೆಯ ಶಿಕ್ಷಕನಿಗೆ ಕಲಬುರಗಿ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೊಕ್ಸೋ) ನ್ಯಾಯಾಲಯವು 25 ವರ್ಷಗಳ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಯಡ್ರಾಮಿ ಪಟ್ಟಣದ ಖಾಸಗಿ ಶಾಲೆಯಲ್ಲಿ ಶಿಕ್ಷಕ ಹಾಗೂ ಶಾಲೆಯ ಕಾರ್ಯದರ್ಶಿಯಾಗಿದ್ದ ಹಾಜಿಮಲಂಗ ಗಣಿಯಾರ (45) ಶಿಕ್ಷೆಗೆ ಗುರಿಯಾದ ಆರೋಪಿ.
ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ಪೊಕ್ಸೋ ನ್ಯಾಯಾಲಯದ ಎಫ್ ಟಿಎಸ್ಸಿ–1ರ ನ್ಯಾಯಾಧೀಶ ಎಸ್.ಎಲ್.ಚವ್ಹಾಣ ಅವರು, ಅಭಿಯೋಜನಾ ಪಕ್ಷದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಆರೋಪಿಯ ಅಪರಾಧ ಕೃತ್ಯಗಳು ಸಾಬೀತಾಗಿವೆ ಎಂದು ತೀರ್ಮಾನಿಸಿ, ಪೊಕ್ಸೋ ಕಾಯ್ದೆಯ ಕಲಂ 6ರಡಿ 25 ವರ್ಷಗಳ ಜೈಲು ಶಿಕ್ಷೆ ಹಾಗೂ 50,000 ದಂಡ ವಿಧಿಸಿ ತೀರ್ಪು ನೀಡಿದೆ.
ಆರೋಪಿಯು ದಂಡ ಪಾವತಿಸಲು ವಿಫಲವಾದರೆ ಆರು ತಿಂಗಳ ಸಾಧಾರಣ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ. ಅದೇ ರೀತಿ ಪೋಕ್ಸೋ ಕಾಯ್ದೆಯ ಕಲಂ 10ರಡಿ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ 50,000 ದಂಡ ವಿಧಿಸಲಾಗಿದ್ದು, ದಂಡ ಪಾವತಿಸಲು ವಿಫಲವಾದರೆ ಆರು ತಿಂಗಳ ಸಾಧಾರಣ ಜೈಲು ಶಿಕ್ಷೆ ವಿಧಿಸಿದ್ದಾರೆ.
ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಆರು ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ತೀರ್ಪಿನ ದಿನಾಂಕದಿಂದ ಒಂದು ತಿಂಗಳೊಳಗೆ ಪರಿಹಾರದ ಮೊತ್ತವನ್ನು ಬಾಲಕಿಗೆ ನೀಡಬೇಕು ಎಂದು ನ್ಯಾಯಾಧೀಶರು ಸೂಚಿಸಿದ್ದಾರೆ.
ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಂತ್ರಸ್ತೆಯ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.