ಕಲಬುರಗಿ: ಶಿಕ್ಷಕರು ಸಮಾಜದ ಭವಿಷ್ಯವನ್ನು ರೂಪಿಸುವ ಪ್ರಮುಖ ಶಕ್ತಿಯಾಗಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಮೌಲ್ಯಗಳು ಹಾಗೂ ಜವಾಬ್ದಾರಿಯುತ ನಾಗರಿಕತ್ವದ ಅರಿವು ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು.

ನಗರದ ಸೇಡಂ ರಸ್ತೆಯ ಎಂಆರ್‌ಎಂಸಿ ಸ್ಯಾಕ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ಆಯೋಜಿಸಿದ್ದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾವಂತ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಅಫಜಲಪುರ ಶಾಸಕ ಎಂ.ವೈ. ಪಾಟೀಲ ಮಾತನಾಡಿ, ದೇಶದ ಭಾವಿ ಪ್ರಜೆಗಳನ್ನು ರೂಪಿಸುವ ಮಹತ್ತರ ಹೊಣೆ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ಸಮಾಜದಲ್ಲಿ ಬದುಕಲು ಅಗತ್ಯವಾದ ಮಾರ್ಗದರ್ಶನ ಮತ್ತು ಮೌಲ್ಯಾಧಾರಿತ ಶಿಕ್ಷಣವನ್ನು ಶಿಕ್ಷಕರು ನೀಡುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಮೂಲಿ ಕಟ್ಟಿಮನಿ ಹಿರೇಮಠ ಪಾಳಾದ ಪಟ್ಟಾಧ್ಯಕ್ಷರಾದ ಷ.ಬ್ರ. ಡಾ. ಗುರುಮೂರ್ತಿ ಶಿವಾಚಾರ್ಯರು ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಹಾಗೂ ಶಾಸಕ ಅಲ್ಲಮಪ್ರಭು ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಗೌರವಾಧ್ಯಕ್ಷ ಡಾ. ಕೆ. ಹಣಮಂತಪ್ಪ, ರಾಜ್ಯಾಧ್ಯಕ್ಷ ಶಿವಾನಂದ ಹಿರೇಕುರುಬರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ಬಳೂಂಡಗಿ ಹಾಗೂ ಅಫಜಲಪುರ ಶಾಸಕ ಎಂ.ವೈ. ಪಾಟೀಲ ಪಾಲ್ಗೊಂಡಿದ್ದರು.

ಸಂಘದ ಜಂಟಿ ಕಾರ್ಯದರ್ಶಿ ಕಲ್ಯಾಣರಾವ ಬಿರಾದಾರ, ಸಂಘಟನಾ ಕಾರ್ಯದರ್ಶಿ ಪ್ರೇಮಸಿಂಗ್ ಚವ್ಹಾಣ, ಜಿಲ್ಲಾ ಗೌರವಾಧ್ಯಕ್ಷ ಹಣಮಂತ ಮರಡಿ, ಕಾರ್ಯಾಧ್ಯಕ್ಷ ಡಾ. ನಾಗಭೂಷಣ ವಿ. ಮಹಾಂತಿನಮಠ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ವಿಜಯಕುಮಾರ ಓಪ್ಪಾರಿ ಉಪಸ್ಥಿತರಿದ್ದರು. ಸಂಘದ ಜಿಲ್ಲಾ ಅಧ್ಯಕ್ಷ ಭಾನುಕುಮಾರ ಗಿರೇಗೋಳ ಅಧ್ಯಕ್ಷತೆ ವಹಿಸಿದ್ದರು.

ಕರ್ನಾಟಕ ರಾಜ್ಯ ರಾಜೀವಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಇಸಾಮುದ್ದೀನ್ ಖಾಜಿ ಹಾಗೂ ಮುತ್ತಣ್ಣ ಕುಂಬಾರ, ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಶ್ವನಾಥ ಪೊದ್ದಾರ, ರಾಷ್ಟ್ರೀಯ ಸಲಹೆಗಾರ ಡಾ. ಪ್ರೇಮಸಿಂಗ್ ಚವ್ಹಾಣ ಹಾಗೂ ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯಿಂದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಿದ್ದಣ್ಣ ಹೂಗಾರ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು. ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು. ರೇವಣಸಿದ್ದಯ್ಯ ವೈದ್ಯ ಸ್ವಾಗತಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor