Kalaburagi | ಶಿಕ್ಷಕರು ಮಕ್ಕಳ ವ್ಯಕ್ತಿತ್ವ ರೂಪಿಸುವ ಶಿಲ್ಪಿಗಳು: ಅಭಿನವ ಸಿದ್ದಲಿಂಗ ಶಿವಾಚಾರ್ಯರು
ಸಂಗೀತ ಸಂಭ್ರಮ, ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರದಾನ
ಕಲಬುರಗಿ: ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ, ಮಕ್ಕಳ ವ್ಯಕ್ತಿತ್ವ ರೂಪಿಸುವ ಶಿಲ್ಪಿಗಳಾಗಿದ್ದಾರೆ ಎಂದು ಮುಗುಳ್ನಾಗಾಂವ್ ಕಟ್ಟಿಮನಿ ಸಂಸ್ಥಾನ ಹಿರೇಮಠದ ಅಭಿನವ ಸಿದ್ದಲಿಂಗ ಶಿವಾಚಾರ್ಯರು ಹೇಳಿದರು.
ನಗರದ ಸೇಂಟ್ ಮೇರಿ ಚರ್ಚ್ ಸಭಾಭವನದಲ್ಲಿ ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಸಂಗೀತ ಸಂಭ್ರಮ ಹಾಗೂ 11ನೇ ವರ್ಷದ ಜಿಲ್ಲಾಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಕುವೆಂಪು ಅವರು ಜ್ಞಾನಪೀಠ ಪ್ರಶಸ್ತಿ ಪಡೆದ ‘ಶ್ರೀ ರಾಮಾಯಣ ದರ್ಶನಂ’ ಕೃತಿಯನ್ನು ತಮ್ಮ ಗುರು ವೆಂಕಣಯ್ಯ ಅವರಿಗೆ ಅರ್ಪಿಸಿರುವುದನ್ನು ಸ್ಮರಿಸಿದ ಅವರು, ಸಂತ ಕಬೀರದಾಸರು ತಮ್ಮ ದೋಹೆಗಳ ಮೂಲಕ ಗುರುವಿಗೆ ನೀಡಿರುವ ಮಹತ್ವವನ್ನು ಸಾರಿದ್ದಾರೆ. ಹೀಗಾಗಿ ಭಾರತೀಯ ಸಮಾಜದಲ್ಲಿ ಗುರು ಹಾಗೂ ಶಿಕ್ಷಕರಿಗೆ ಅತ್ಯುನ್ನತ ಸ್ಥಾನವಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಗೋಳ, ಶಿಕ್ಷಕ ವೃತ್ತಿ ಪವಿತ್ರವಾದದ್ದು. ಶಿಕ್ಷಕರಿಂದಲೇ ದೇಶ ಹಾಗೂ ಸಮಾಜದ ಅಭಿವೃದ್ಧಿ ಸಾಧ್ಯ. ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರು ಹಾಗೂ ಪಾಲಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.
ಕಾಂಗ್ರೆಸ್ ಮುಖಂಡ ನೀಲಕಂಠರಾವ ಮೂಲಗೆ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡುವಲ್ಲಿ ಶಿಕ್ಷಕರ ಪಾತ್ರ ನಿರ್ಣಾಯಕವಾಗಿದೆ. ಶಿಕ್ಷಕರು ದೇಶದ ದೊಡ್ಡ ಆಸ್ತಿ. ಮಕ್ಕಳು ಐಎಎಸ್, ಐಪಿಎಸ್ ಸೇರಿದಂತೆ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕಾದರೆ ಗುಣಮಟ್ಟದ ಶಿಕ್ಷಣ ಅಗತ್ಯವಾಗಿದ್ದು, ಅದನ್ನು ನೀಡುವ ಪ್ರಮುಖ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು.
ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಮಲ್ಲಯ್ಯ ಗುತ್ತೆದಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅದನ್ನು ಬೆಳೆಸಲು ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದು ಹೇಳಿದರು.
ಮುಖ್ಯ ಅತಿಥಿ ಡಾ. ಎಸ್.ಎಸ್. ಪಾಟೀಲ್ ಮಂದರವಾಡ ಮಾತನಾಡಿ, ಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರಗಳು ವೇಗವಾಗಿ ಅಭಿವೃದ್ಧಿಯಾಗುತ್ತಿದ್ದರೂ ಸಮಾಜದಲ್ಲಿ ಮೂಢನಂಬಿಕೆಗಳು ಮುಂದುವರಿದಿವೆ. ಮೂಢನಂಬಿಕೆಗಳನ್ನು ಹೋಗಲಾಡಿಸಿ ವೈಜ್ಞಾನಿಕ ಮನೋಭಾವ ಬೆಳೆಸುವ ಕಾರ್ಯವನ್ನು ಪ್ರತಿ ಗ್ರಾಮ, ಪ್ರತಿ ಮನೆ ಹಾಗೂ ಪ್ರತಿ ಮಗುವಿನವರೆಗೆ ತಲುಪಿಸಲು ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಹೇಳಿದರು.
ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಬಿ.ಎಚ್. ನಿರಗುಡಿ ಮಾತನಾಡಿ, ಜಿಲ್ಲೆಯ ಕ್ರಿಯಾಶೀಲ ಶಿಕ್ಷಕರಿಗೆ ಗೌರವ ಹಾಗೂ ಮನ್ನಣೆ ನೀಡುವ ಉದ್ದೇಶದಿಂದ ಪ್ರತಿಷ್ಠಾನದ ವತಿಯಿಂದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. 2026ನೇ ಸಾಲಿನಲ್ಲಿ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಒಟ್ಟು 106 ಶಿಕ್ಷಕರನ್ನು ಶ್ರೇಷ್ಠ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನವ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ದಯಾನಂದ ಪಾಟೀಲ್ ಸೇಡಂ, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದು ಬಾನರ, ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಂತೋಷ್ ಗಂಗೂ, ಅಖಿಲ ಕರ್ನಾಟಕ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸತೀಶ್ ಜಾಮಗೊಂಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರತಿಷ್ಠಾನದ ಅಧ್ಯಕ್ಷ ಬಿ.ಎಚ್. ನಿರಗುಡಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಶರಣಬಸಪ್ಪ ವಡ್ಡನಕೇರಿ ಕಾರ್ಯಕ್ರಮ ನಿರೂಪಿಸಿದರು.
ಸಂಗೀತ ಸಂಭ್ರಮದಲ್ಲಿ ವಿಜಯಲಕ್ಷ್ಮೀ ಕೆಂಗನಾಳ, ರಾಜಶೇಖರ್ ಮಾಂಗ, ಬಾಬು ಜಾಧವ್, ಕಿರಣ್ ಪಾಟೀಲ್, ಸೂರ್ಯಕಾಂತ್ ಪೂಜಾರಿ ಸೇರಿದಂತೆ ಹಲವು ಕಲಾವಿದರು ಕನ್ನಡ ಗೀತೆಗಳನ್ನು ಹಾಡಿ ಪ್ರೇಕ್ಷಕರನ್ನು ರಂಜಿಸಿದರು.
ಕಾರ್ಯಕ್ರಮದಲ್ಲಿ ಶಿವಾನಂದ ಖಜೂರಿ, ಶಂಬಣ್ಣ ಹೂಗಾರ್, ಡಾ. ಆನಂದ್ ಸಿದ್ಮಣಿ, ರಮೇಶ್ ಬಡಿಗೇರ್, ಸಿದ್ದಣ್ಣ ಹೂಗಾರ್, ರೇವಣಸಿದ್ದಪ್ಪ ದುಕಾನ್, ಸಿದ್ದರಾಮ ಬೇತಾಳೆ, ಶಿವಶರಣಪ್ಪ ಉದನೂರ, ಉದಯಕುಮಾರ್, ಪ್ರೊ. ಯಶವಂತ ಅಷ್ಟಗಿ, ಸಂಗಮೇಶ ಬಿರಾದಾರ, ಶಿವರಾಜ ಕಾಳಗಿ ಸೇರಿದಂತೆ ಹಲವರು ಭಾಗವಹಿಸಿದ್ದರು.