ಕಲಬುರಗಿ: ಯುವಕರಲ್ಲಿ ಜ್ಞಾನ, ಶಕ್ತಿ ಮತ್ತು ಸೃಜನಶೀಲತೆ ಇದೆ. ಈ ಶಕ್ತಿಯನ್ನು ಸಮಾಜದ ಅಭಿವೃದ್ಧಿಗಾಗಿ ಬಳಸಿದಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಶರಣಬಸವೇಶ್ವರ ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ದಯಾನಂದ ಹೊಡಲ್ ಅಭಿಪ್ರಾಯಪಟ್ಟರು.

ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ಬುಧವಾರ ನಡೆದ ಎನ್‌ಎಸ್‌ಎಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರ ಕನಸಿನಂತೆ, ಅವರ ಜನ್ಮ ಶತಮಾನೋತ್ಸವದ ವರ್ಷವಾದ 1969ರ ಸೆಪ್ಟೆಂಬರ್ 24ರಂದು ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಸ್ಥಾಪನೆಯಾಯಿತು. ‘ನಾನಲ್ಲ, ನೀನು’ ಎಂಬುದು ಎನ್‌ಎಸ್‌ಎಸ್‌ನ ಧ್ಯೇಯವಾಕ್ಯವಾಗಿದೆ. ಸ್ವಾರ್ಥಕ್ಕಿಂತ ಸಮಾಜದ ಹಿತವನ್ನು ಮುಂದಿಟ್ಟುಕೊಂಡು, ಸಮಾಜದ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳ ಪರಿಹಾರಕ್ಕೆ ಕೈಜೋಡಿಸುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಎನ್‌ಎಸ್‌ಎಸ್‌ನ ಪ್ರಮುಖ ಉದ್ದೇಶವಾಗಿದೆ. ಶಿಸ್ತು, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವುದು ಇದರ ಮುಖ್ಯ ಆಶಯವಾಗಿದೆ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶರಣಬಸವೇಶ್ವರ ದೇವಸ್ಥಾನ ಆವರಣದ ಶಾಲಾ-ಕಾಲೇಜುಗಳ ನಿರ್ದೇಶಕಿ ಡಾ. ನೀಲಾಂಬಿಕಾ ಶೇರಿಕಾರ ಮಾತನಾಡಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ದೊಡ್ಡ ವೇದಿಕೆಯಾಗಿದೆ. ಇಂದಿನ ಯುವಜನತೆ ದೇಶದ ದೊಡ್ಡ ಶಕ್ತಿಯಾಗಿದೆ. ಯುವಕರಲ್ಲಿ ಜ್ಞಾನ, ಕೌಶಲ್ಯ, ಶಿಸ್ತು ಮತ್ತು ಸೇವಾ ಮನೋಭಾವ ಬೆಳೆದರೆ ದೇಶದ ಅಭಿವೃದ್ಧಿ ಇನ್ನಷ್ಟು ವೇಗವಾಗಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ. ಪುಟ್ಟಮಣಿ ದೇವಿದಾಸ ಮಾತನಾಡಿದರು. ವೇದಿಕೆಯಲ್ಲಿ ಪ್ರಾಚಾರ್ಯೆ ಡಾ. ಸೀಮಾ ಪಾಟೀಲ, ಐಕ್ಯೂಎಸಿ ಸಂಯೋಜಕಿ ಡಾ. ಪ್ರತಿಭಾ ಪಾಟೀಲ ಇದ್ದರು. ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಡಾ. ರಾಜಲಕ್ಷ್ಮೀ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಲ್ಪನಾ ಡಿ.ಎಂ. ಅತಿಥಿ ಪರಿಚಯ ಮಾಡಿದರು. ಪ್ರಸಾದ ಅಷ್ಟಗೀಕರ ನಿರೂಪಿಸಿ, ವಂದಿಸಿದರು. ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor