ಸಾಂದರ್ಭಿಕ ಚಿತ್ರ

ಕಲಬುರಗಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್‌ಟಿಸಿ) ತನಿಖಾ ತಂಡಗಳು ನಡೆಸಿದ ವಿಶೇಷ ತಪಾಸಣಾ ಕಾರ್ಯಾಚರಣೆಯಲ್ಲಿ 4,344 ಟಿಕೆಟ್ ರಹಿತ ಪ್ರಯಾಣಿಕರಿಂದ ಒಟ್ಟು 10,14,614 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ನಿಗಮದ ಕಲಬುರಗಿ ಕೇಂದ್ರ ಕಚೇರಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಗಮದ ಆದಾಯ ಸೋರಿಕೆಯನ್ನು ತಡೆಗಟ್ಟುವ ಉದ್ದೇಶದಿಂದ 2026ರ ಜುಲೈನಿಂದ ಅಕ್ಟೋಬರ್‌ವರೆಗಿನ ಅವಧಿಯಲ್ಲಿ ತನಿಖಾ ತಂಡಗಳು ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿದ್ದವು. ಈ ಕಾರ್ಯಾಚರಣೆಯ ಸಂದರ್ಭದಲ್ಲಿ ರಾಜ್ಯ ಹಾಗೂ ನೆರೆಯ ರಾಜ್ಯಗಳಲ್ಲಿ ಸಂಚರಿಸುವ ನಿಗಮದ ವ್ಯಾಪ್ತಿಯ ಒಟ್ಟು 66,762 ಬಸ್‌ಗಳನ್ನು ತನಿಖಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

ತಪಾಸಣೆಯ ವೇಳೆ ಒಟ್ಟು 5,459 ಪ್ರಕರಣಗಳನ್ನು ಪತ್ತೆಹಚ್ಚಲಾಗಿದ್ದು, ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ 2,52,335 ರೂ. ಮೊತ್ತವನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಾರ್ವಜನಿಕ ಪ್ರಯಾಣಿಕರು ದಂಡಕ್ಕೆ ಒಳಗಾಗುವುದನ್ನು ತಪ್ಪಿಸಲು ಬಸ್‌ಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಸರಿಯಾದ ಟಿಕೆಟ್ ಅಥವಾ ಪಾಸ್ ಪಡೆದು ಪ್ರಯಾಣಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮನವಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ