ಕಲಬುರಗಿ | ಗಂಡನ ಕಿರುಕುಳಕ್ಕೆ ಬೇಸತ್ತು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಕಲಬುರಗಿ : ಗಂಡನ ಕಿರುಕುಳಕ್ಕೆ ಬೇಸತ್ತು ಮಹಿಳೆಯೋರ್ವಳು ಬಾವಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೇವರ್ಗಿ ತಾಲ್ಲೂಕಿನ ಶಕಾಪುರ ಗ್ರಾಮದಲ್ಲಿ ನಡೆದಿದೆ.
ಶಕಾಪುರ ಗ್ರಾಮದ ನಿವಾಸಿ ಭಾಗಮ್ಮ ಶಿವಪ್ಪ ಗೌಂಡಿ(30) ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎಂದು ಗುರುತಿಸಿದ್ದು, ಆರೋಪಿ ಗಂಡ ಶಿವಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಶಿವಪ್ಪ, ದಿನಾಲೂ ಕುಡಿದ ಅಮಲಿನಲ್ಲಿ ಬಂದು ಮೃತ ಭಾಗಮ್ಮಳಿಗೆ ದೈಹಿಕವಾಗಿ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತ ಭಾಗಮ್ಮ ಗ್ರಾಮದ ಹೊರಗಿರುವ ಬಾವಿಯೊಂದರಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಭಾಗಮ್ಮ ನಾಪತ್ತೆಯಾಗಿದ್ದಾಳೆ ಎಂದು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಮೂರು ದಿನಗಳ ಹಿಂದಷ್ಟೇ ದೂರು ದಾಖಲಾಗಿತ್ತು. ಗುರುವಾರ ಬೆಳಗ್ಗೆ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮೃತ ಭಾಗಮ್ಮಳ ತಾಯಿ ಮಹಾದೇವಿ ನೀಡಿದ ದೂರಿನ ಮೇರೆಗೆ ಮೃತಳ ಗಂಡ ಆರೋಪಿ ಶಿವಪ್ಪನನ್ನು ಬಂಧಿಸಿ, ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.