×
Ad

ಕಲಬುರಗಿ| ವಾರ್ತಾಭಾರತಿ ವರದಿ ಫಲಶ್ರುತಿ : ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ಸ್ವಚ್ಛತೆ, ಮೂಲಸೌಕರ್ಯ ಸುಧಾರಣೆ

Update: 2026-06-23 19:37 IST

ಕಲಬುರಗಿ: ನಗರದ ಮಿಸ್ಬಾ ನಗರದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿನ ಅವ್ಯವಸ್ಥೆಗಳ ಕುರಿತು ಪ್ರಕಟವಾದ ಸುದ್ದಿಗೆ ಸ್ಪಂದಿಸಿದ ಅಧಿಕಾರಿಗಳು, ಶಾಲೆಯ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಂಡಿದ್ದಾರೆ.

ಕಳೆದ ಜೂನ್ 11ರಂದು ವಾರ್ತಾಭಾರತಿ ದಿನಪತ್ರಿಕೆಯಲ್ಲಿ ‘ಅವ್ಯವಸ್ಥೆಗಳ ಆಗರ ಅಲ್ಪಸಂಖ್ಯಾತರ ವಸತಿ ಶಾಲೆ’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು. ವರದಿ ಪ್ರಕಟವಾದ ಬೆನ್ನಲ್ಲೇ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಸಮಸ್ಯೆಗಳ ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

ಶಾಲೆಯ ಶೌಚಾಲಯಗಳನ್ನು ಸಂಪೂರ್ಣ ಸ್ವಚ್ಛಗೊಳಿಸಲಾಗಿದ್ದು, ದುಸ್ಥಿತಿಯಲ್ಲಿದ್ದ ಹಾಗೂ ಹರಿದುಹೋಗಿದ್ದ ಬೆಡ್‌ಗಳನ್ನು ಬದಲಾಯಿಸಲಾಗಿದೆ. ಶಾಲಾ ಆವರಣದಲ್ಲಿ ಅನಗತ್ಯವಾಗಿ ನಿಲ್ಲಿಸಲಾಗಿದ್ದ ಖಾಸಗಿ ವಾಹನಗಳನ್ನು ತೆರವುಗೊಳಿಸಲಾಗಿದೆ.

ಇದಲ್ಲದೆ, ಶಾಲಾ ಕಟ್ಟಡಕ್ಕೆ ಹೊಸದಾಗಿ ಬಣ್ಣ ಬಳಿಯಲಾಗಿದ್ದು, ಬಾಲಕರ ವಸತಿ ಕೊಠಡಿಗಳನ್ನು ಸ್ವಚ್ಛಗೊಳಿಸಿ ವಿದ್ಯಾರ್ಥಿಗಳಿಗೆ ಉತ್ತಮ ಗಾಳಿ ಮತ್ತು ಬೆಳಕು ದೊರೆಯುವಂತೆ ವ್ಯವಸ್ಥೆ ಮಾಡಲಾಗಿದೆ. ದೀರ್ಘಕಾಲದಿಂದ ನಿರ್ವಹಣೆಯ ಕೊರತೆಯಿಂದ ದುರ್ವಾಸನೆ ಬೀರುತ್ತಿದ್ದ ಶೌಚಾಲಯಗಳ ಸ್ವಚ್ಛತಾ ಕಾರ್ಯ ಕೈಗೊಂಡಿರುವುದರ ಜೊತೆಗೆ ನವೀಕರಣ ಕಾಮಗಾರಿಯೂ ಪ್ರಗತಿಯಲ್ಲಿದೆ.

ಸುದ್ದಿ ಪ್ರಕಟವಾದ ಬಳಿಕ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ ಕ್ರಮ ಕೈಗೊಂಡಿರುವುದಕ್ಕೆ ಪಾಲಕರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಹಾಗೂ ವಸತಿ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಉಳಿದಿರುವ ಸಮಸ್ಯೆಗಳನ್ನೂ ಶೀಘ್ರ ಪರಿಹರಿಸಬೇಕು ಎಂಬುದು ಪಾಲಕರ ಆಗ್ರಹವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News