ಕಲಬುರಗಿ | ಫೆ.8ರಂದು ʼವಿಶ್ವಾಮಿತ್ರʼ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ : ಅಸಗೋಡು ಜಯಸಿಂಹ
ಕಲಬುರಗಿ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಫೆ.8 ರಂದು ಬೆಳಗ್ಗೆ 11 ಗಂಟೆಗೆ ನಗರದ ಊದನೂರ ರಸ್ತೆಯ ಜಯತೀರ್ಥ ಕಲ್ಯಾಣ ಮಂಟಪದಲ್ಲಿ 2024-25ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲಾವಾರು ಮೊದಲ ಮೂರು ಸ್ಥಾನ ಪಡೆದು ತೇರ್ಗಡೆಯಾದ ಕಲಬುರಗಿ ಮತ್ತು ಬೆಳಗಾವಿ ವಿಭಾಗದ 61 ಪ್ರತಿಭಾವಂತ ಬ್ರಾಹ್ಮಣ ವಿದ್ಯಾರ್ಥಿಗಳಿಗೆ "ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ" ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಕ್ರಮವಾಗಿ 15 ಸಾವಿರ, 10 ಸಾವಿರ ಮತ್ತು 5 ಸಾವಿರ ನಗದು ಬಹುಮಾನ, ಪ್ರಶಸ್ತಿ ಪತ್ರ ಹಾಗೂ ಪಾರಿತೋಷಕಗಳನ್ನು ನೀಡಲಾಗುವುದು ಎಂದರು.
ಹಾವೇರಿ, ಗದಗ, ಧಾರವಾಡ, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಶಿರಸಿ, ಉತ್ತರ ಕನ್ನಡ, ಯಾದಗಿರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬೀದರ್, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಿಗೆ ಬರುವ ವಿದ್ಯಾರ್ಥಿಗಳಿಗೆ ಪ್ರಯಾಣ ಭತ್ಯೆ ನೀಡಲಾಗುತ್ತಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಂದಾಯ ಸಚಿವ ಕೃಷ್ಣಬೈರೇಗೌಡ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರು, ಇತರ ಜನಪ್ರತಿನಿಧಿಗಳು, ವಿಪ್ರ ಮುಖಂಡರು, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕರು ಭಾಗವಹಿಸಲಿದ್ದಾರೆ ಎಂದರು.
ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯ ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ಸಾಹಿತ್ಯ, ಕ್ರೀಡೆ ಮತ್ತು ಉದ್ಯಮ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ಮಾಡುತ್ತಿದ್ದಾರೆ. ಆದರೆ, ಈ ಸಮುದಾಯ ಆರ್ಥಿಕವಾಗಿ ಸದೃಢವಾಗಿಲ್ಲ. ನಮ್ಮ ನಿಗಮದಿಂದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ನಗದು ಬಹುಮಾನ ಮತ್ತು ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ ಯೋಜನೆಯಡಿಯಲ್ಲಿ ಸಹಾಯಧನ ನೀಡಲಾಗುತ್ತಿದೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಕೃಷ್ಣಾಜಿ ಕುಲಕರ್ಣಿ, ಶ್ರೀಪಾದ ಜೋಶಿ, ಪ್ರಮೋದ ದೇಶಪಾಂಡೆ, ಗುರುರಾಜ ಕುಲಕರ್ಣಿ, ವೆಂಕೋಬಾ ಕುಲಕರ್ಣಿ, ವೆಂಕಟೇಶ ಕುಲಕರ್ಣಿ, ಪ್ರಶಾಂತ ಕೊರವಿ, ನಾಗುಬಾಯಿ ದೊಡ್ಡಮನಿ ಇತರರಿದ್ದರು.