ಕಲಬುರಗಿ | ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದಿಂದ ಪ್ರತಿಭಟನೆ
ಕಲಬುರಗಿ : ನಗರದ ಎಂ.ಜಿ. ರಸ್ತೆಯಲ್ಲಿ ಆಳವಾದ ಗುಂಡಿಗಳು ನಿರ್ಮಾಣವಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ತಕ್ಷಣ ರಸ್ತೆ ದುರಸ್ತಿ ಕೈಗೊಳ್ಳಬೇಕು ಎಂದು ಆಗ್ರಹಿಸಿ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ಮಹಾನಗರ ಪಾಲಿಕೆಯ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆಯಾದರೂ, ನಗರ ಪ್ರವೇಶದ ಮುಖ್ಯ ರಸ್ತೆಯನ್ನೇ ನಿರ್ಲಕ್ಷಿಸಲಾಗಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಗುಂಡಿಗಳಿಂದ ಅಪಘಾತ ಸಂಭವಿಸಿದರೆ ಪಾಲಿಕೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲ ವಾರ್ಡುಗಳಲ್ಲಿಯೂ ರಸ್ತೆಗಳು ಬೃಹತ್ ಗುಂಡಿಗಳಿಂದ ತುಂಬಿಕೊಂಡಿದ್ದು, ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ. ಅಧಿಕಾರಿಗಳು ಜಾಣಕುರುಡು ನಿಲುವು ತಾಳಿರುವುದರಿಂದ ದಿನನಿತ್ಯ ಸಂಚರಿಸುವ ಜನರು ಸಂಕಟ ಅನುಭವಿಸುತ್ತಿದ್ದಾರೆ. ವಾಹನಗಳು ಹಾಳಾಗುತ್ತಿವೆ, ಜನರು ಕೈಕಾಲು ಮುರಿಯುತ್ತಿದ್ದಾರೆ ಎಂದು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಎಲ್ಲಾ ಗುಂಡಿಗಳನ್ನು ಮುಚ್ಚಿ ರಸ್ತೆ ದುರಸ್ತಿ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಮಹಾನಗರ ಪಾಲಿಕೆ ಮುಂದಾಗಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಮೊಬಿನ್ ಅಹಮ್ಮದ್, ಸಲೀಮ್ ಅಹಮ್ಮದ್ ಚಿತಾಪುರಿ, ಸಲೀಮ್ ಸಗರಿ, ಅಬ್ದುಲ್ ಬಾರಿ, ತಾಜುದ್ದೀನ್, ಸಿರಾಜ್ ಶಹಾನಾ ಸೇರಿದಂತೆ ಹಲವರು ಭಾಗವಹಿಸಿದ್ದರು.