ಸಾಂದರ್ಭಿಕ ಚಿತ್ರ

ಕಲಬುರಗಿ: ಪತ್ನಿಯನ್ನು ಚಾಕುವಿನಿಂದ ಕುತ್ತಿಗೆ ಕೊಯ್ದು ಹಾಗೂ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಯೋರ್ವನಿಗೆ ಕಲಂ 302ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ಕಲಬುರಗಿಯ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದ ನಿವಾಸಿ ಖಾಜಪ್ಪ ಚಂದಪ್ಪ ಭಾವಿಕಟ್ಟಿ (35) ಶಿಕ್ಷೆಗೆ ಒಳಗಾದ ಆರೋಪಿ.

ಮೃತ ಯಲ್ಲಮ್ಮ ಅವರನ್ನು 2014ರಲ್ಲಿ ಖಾಜಪ್ಪ ಅವರೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಮದುವೆಯಾದ ಒಂದು ವರ್ಷದ ಬಳಿಕದಿಂದಲೇ ಖಾಜಪ್ಪ ಸೇರಿದಂತೆ ಇತರೆ ಆರೋಪಿತರು ಮನೆ ಹಾಗೂ ಹೊಲದ ಕೆಲಸದ ವಿಚಾರವಾಗಿ ಯಲ್ಲಮ್ಮ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹೊಡೆದು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿತ್ತು.

2022ರ ಜನವರಿ 10ರಂದು ರಾತ್ರಿ ಆರೋಪಿತರು ಯಲ್ಲಮ್ಮ ಅವರಿಗೆ ಮತ್ತೆ ನಿಂದಿಸಿ, ಹಲ್ಲೆ ನಡೆಸಿ ಕಿರುಕುಳ ನೀಡಿದ್ದರು. ಈ ವೇಳೆ ಎ-2ರಿಂದ ಎ-5ರವರೆಗಿನ ಆರೋಪಿತರು ಖಾಜಪ್ಪನಿಗೆ ಪ್ರಚೋದನೆ ನೀಡಿದ್ದರು ಎಂದು ಪ್ರಕರಣದಲ್ಲಿ ಆರೋಪಿಸಲಾಗಿತ್ತು.

ನಂತರ ಜನವರಿ 12ರಂದು ಬೆಳಗಿನ ಜಾವ ಸುಮಾರು 5 ಗಂಟೆಗೆ ಖಾಜಪ್ಪ ಯಲ್ಲಮ್ಮ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಕುತ್ತಿಗೆಗೆ ಇರಿದು, ಬಲ ಕಿವಿಯ ಮೇಲೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದನು ಎಂದು ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ವೇಳೆ ಸಾಕ್ಷಿಗಳ ಹೇಳಿಕೆ ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸರಿತಾ ಡಿ. ಅವರು, ಎ-1 ಆರೋಪಿ ಖಾಜಪ್ಪ ವಿರುದ್ಧದ ಕೊಲೆ ಆರೋಪ ಸಾಬೀತಾಗಿದೆ ಎಂದು ಪರಿಗಣಿಸಿದರು. ಭಾರತೀಯ ದಂಡ ಸಂಹಿತೆಯ ಕಲಂ 302ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದರು.

ಉಳಿದ ಆರೋಪಿತರ ವಿರುದ್ಧದ ಆರೋಪಗಳು ಸಾಕ್ಷ್ಯಾಧಾರಗಳಿಂದ ಸಾಬೀತಾಗದ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ನ್ಯಾಯಾಲಯದ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor