ಕಲಬುರಗಿ: ಯುವಜನರು ಸ್ವಯಂಪ್ರೇರಿತರಾಗಿ ರಕ್ತದಾನದಲ್ಲಿ ಪಾಲ್ಗೊಂಡು ಅಗತ್ಯವಿರುವವರಿಗೆ ನೆರವಾಗುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಲು ಮುಂದಾಗಬೇಕು ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಕರೆ ನೀಡಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಹಾಗೂ ಕಲಬುರಗಿಯ ಇಎಸ್‌ಐ ಆಸ್ಪತ್ರೆಯ ಸಹಯೋಗದಲ್ಲಿ ರಾಷ್ಟ್ರೀಯ ರಕ್ತದಾನ ದಿನದ ಅಂಗವಾಗಿ ವಿಶ್ವವಿದ್ಯಾಲಯದ ವಿವಿಧೋದ್ದೇಶ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶೇಷ ರಕ್ತದಾನ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಕ್ತದಾನವು ಕೇವಲ ಮಾನವೀಯ ಸೇವೆಯಲ್ಲ, ಮತ್ತೊಬ್ಬರ ಜೀವ ಉಳಿಸುವ ಮಹತ್ವದ ಕಾರ್ಯವಾಗಿದೆ. ವಿದ್ಯಾರ್ಥಿಗಳು ಹಾಗೂ ಯುವಜನರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ತಮ್ಮ ಅಮೂಲ್ಯ ಕೊಡುಗೆ ನೀಡಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಇಎಸ್‌ಐ ಆಸ್ಪತ್ರೆಯ ರೋಗಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಅಬ್ದುಲ್ ಹಕೀಂ ಅತ್ತಾರ ಮಾತನಾಡಿ, ಒಂದು ಯೂನಿಟ್ ರಕ್ತವನ್ನು ದಾನ ಮಾಡುವುದರಿಂದ ಅದರ ವಿವಿಧ ಘಟಕಗಳನ್ನು ಬೇರ್ಪಡಿಸಿ ಮೂವರು ರೋಗಿಗಳಿಗೆ ನೆರವಾಗಲು ಸಾಧ್ಯವಿದೆ. ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಸಿಯುಕೆ ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ್ ಮಾತನಾಡಿ, ದೇಶದಲ್ಲಿ ಪ್ರತಿವರ್ಷ ಸುಮಾರು 15 ಮಿಲಿಯನ್ ಯೂನಿಟ್ ರಕ್ತದ ಅಗತ್ಯವಿದ್ದು, ಪ್ರಸ್ತುತ ಸುಮಾರು 12 ಮಿಲಿಯನ್ ಯೂನಿಟ್‌ಗಳಷ್ಟು ರಕ್ತ ಸಂಗ್ರಹವಾಗುತ್ತಿದೆ. ಅಗತ್ಯ ಮತ್ತು ಲಭ್ಯತೆಯ ನಡುವಿನ ಅಂತರವನ್ನು ಕಡಿಮೆ ಮಾಡಲು ಹೆಚ್ಚಿನ ಪ್ರಮಾಣದಲ್ಲಿ ರಕ್ತ ಸಂಗ್ರಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ರಕ್ತದಾನ ಮಾಡುವುದರಿಂದ ಅಗತ್ಯವಿರುವ ರೋಗಿಗಳಿಗೆ ನೆರವಾಗುವುದರ ಜೊತೆಗೆ ಅಮೂಲ್ಯ ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಿಯುಕೆ ಕಾರ್ಯಕಾರಿ ಸಮಿತಿ ಸದಸ್ಯ ಡಾ. ರಘು ಅಕಮಂಚಿ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕುಲಪತಿ ಸೇರಿದಂತೆ ವಿದ್ಯಾರ್ಥಿಗಳು ರಕ್ತದಾನ ಮಾಡುವ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಳಿಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

ಕಾರ್ಯಕ್ರಮದ ಸಂಯೋಜಕ ಡಾ. ಡಿ. ರಂಗನಾಥ ಸ್ವಾಗತಿಸಿದರು. ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರದ ವೈದ್ಯ ಡಾ. ರೋಹಿತ್ ಕುಮಾರ್ ವಂದನಾರ್ಪಣೆ ಮಾಡಿದರು.

ಪ್ರೊ. ಆರ್.ಎಸ್. ಹೆಗಡಿ, ಡಾ. ಬುಚಿರೆಡ್ಡಿ, ಸಹಾಯಕ ಕುಲಸಚಿವ ಸುನೀಲ್ ಜಿ., ಡಾ. ಚರಣ್ ಕುಮಾರ್, ಶಿವಕುಮಾರ್ ಸಿರಿಗೇರಿ, ಇಎಸ್‌ಐ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ, ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor