ಕಾಳಗಿ | ಪಿಎಂ ಕಿಸಾನ್ ಫಲಾನುಭವಿಗಳಿಗೆ ಬಯೋಮೆಟ್ರಿಕ್ ಇ-ಕೆವೈಸಿ ಕಡ್ಡಾಯ
ರಾಹುಲ್ ಚವ್ಹಾಣ
ಕಾಳಗಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯ ಅರ್ಹ ಫಲಾನುಭವಿಗಳು ಮುಂದಿನ ಕಂತಿನ ಹಣ ಪಡೆಯಲು ಬಯೋಮೆಟ್ರಿಕ್ ಅಥವಾ ಫೇಸ್ ದೃಢೀಕರಣ ಆಧಾರಿತ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಕಾಳಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ರಾಹುಲ್ ಚವ್ಹಾಣ ತಿಳಿಸಿದ್ದಾರೆ.
ಯೋಜನೆಯಡಿ ನಕಲಿ ಫಲಾನುಭವಿಗಳನ್ನು ತಡೆಗಟ್ಟುವುದು ಹಾಗೂ ಮೃತಪಟ್ಟವರ ಹೆಸರನ್ನು ಪಟ್ಟಿಯಿಂದ ಕೈಬಿಟ್ಟು ಅರ್ಹ ರೈತರ ಖಾತೆಗೆ ಪಾರದರ್ಶಕವಾಗಿ ಹಣ ಜಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕ್ರಮ ಜಾರಿಗೆ ತಂದಿದೆ ಎಂದು ಅವರು ತಿಳಿಸಿದ್ದಾರೆ.
ಈ ಹಿಂದೆ ಆಧಾರ್ ಓಟಿಪಿ ಆಧಾರಿತ ಇ-ಕೆವೈಸಿ ವ್ಯವಸ್ಥೆಯಲ್ಲಿ ಮೃತಪಟ್ಟವರ ಖಾತೆಗಳಿಗೆ ಹಣ ವರ್ಗಾವಣೆಯಾಗುತ್ತಿದ್ದ ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ, ಓಟಿಪಿ ವ್ಯವಸ್ಥೆಯನ್ನು ರದ್ದುಪಡಿಸಿ ಬಯೋಮೆಟ್ರಿಕ್ ಅಥವಾ ಫೇಸ್ ಆಧಾರಿತ ಇ-ಕೆವೈಸಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ವಿವರಿಸಿದರು.
ಪಿಎಂ ಕಿಸಾನ್ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (CSC) ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಕಡ್ಡಾಯವಾಗಿ ಇ-ಕೆವೈಸಿ ಪೂರ್ಣಗೊಳಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ ಮಾಡಿದೆ.