ಕಾಳಗಿ | ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

Update: 2026-07-23 19:35 IST

ಕಾಳಗಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಖಂಡಿಸಿ ವಿದ್ಯಾರ್ಥಿ ಯುವಜನ ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.

ಹಳೆ ಬಸ್ ನಿಲ್ದಾಣದಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದ ಕಾರ್ಯಕರ್ತರು ಮಾನವ ಸರಪಳಿ ರಚಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮುಖಂಡರು, ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ನೀಟ್‌ನಂತಹ ಮಹತ್ವದ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇದರಿಂದ ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸ ಕುಸಿದಿದ್ದು, ವಿದ್ಯಾರ್ಥಿಗಳಲ್ಲಿ ಅನಿಶ್ಚಿತತೆ ಮತ್ತು ಆತಂಕ ಸೃಷ್ಟಿಯಾಗಿದೆ ಎಂದು ಆರೋಪಿಸಿದರು.

ನೀಟ್ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ಸಂಪೂರ್ಣ ನೈತಿಕ ಹೊಣೆಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ಕೂಡಲೇ ರಾಜೀನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಕ್ಷಮೆಯಾಚಿಸಬೇಕು. ದೇಶದ ಉನ್ನತ ಶಿಕ್ಷಣ ಪ್ರವೇಶ ಪರೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಅಥವಾ ಸ್ವತಂತ್ರ ಸಂಸ್ಥೆಯ ಮೂಲಕ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ನೀಟ್ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲ ವ್ಯಕ್ತಿಗಳು, ಅಧಿಕಾರಿಗಳು ಹಾಗೂ ಮಧ್ಯವರ್ತಿಗಳನ್ನು ಗುರುತಿಸಿ ಕಾನೂನು ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಯಾವುದೇ ಪ್ರಭಾವಕ್ಕೆ ಮಣಿಯದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಾಗ ಮಾತ್ರ ವಿದ್ಯಾರ್ಥಿಗಳಲ್ಲಿ ವಿಶ್ವಾಸ ಮೂಡಲಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಹಾಗೂ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಮುಖಂಡರಾದ ರಾಘವೇಂದ್ರ ಗುತ್ತೇದಾರ, ಶರಣು ಮಜ್ಜಗಿ, ಗುರುನಂದೇಶ ಕೊಣಿನ್, ಪ್ರದೀಪ ಡೊಣ್ಣೂರ, ಅವಿನಾಶ್ ಕೊಡದೂರ, ದಿನೇಶ್ ಮೋಘಾ, ಅವಿನಾಶ ಗುತ್ತೇದಾರ, ಬಂಡು ಗದ್ದಿ, ಗಣಪತಿ ಹಾಳಕಾಯಿ, ಗಂಗಾಧರ ಮಾಡಬೂಳ, ಸದ್ದಾಂ ಇನಾಮದಾರ, ಪವಾನ ಡೊಣ್ಣೂರ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News