ಕಮಲಾಪುರ : ಜಲಜೀವನ್ ಮಿಷನ್ ಯೋಜನೆಯಡಿ ‘ಮನೆ ಮನೆಗೆ ಗಂಗೆ’ ಹೆಸರಿನಲ್ಲಿ ಮಹಾಗಾಂವ ಸೇರಿದಂತೆ ಕಮಲಾಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೈಗೊಂಡಿರುವ ಕುಡಿಯುವ ನೀರು ಸರಬರಾಜು ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿವೆ. ಮಹಾಗಾಂವ ಗ್ರಾಮವೊಂದರಲ್ಲೇ ಸುಮಾರು 3.50 ಕೋಟಿ ರೂ. ವೆಚ್ಚದ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಯುವಶಕ್ತಿ ಸೈನ್ಯದ ರಾಜ್ಯಾಧ್ಯಕ್ಷ ಲಿಂಗರಾಜ ಗುಂಡುರಕರ್ ನೇತೃತ್ವದಲ್ಲಿ ಸೋಮವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಲಿಂಗರಾಜ ಗುಂಡುರಕರ್, ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಜಾರಿಗೊಳಿಸಿರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳು ಮಹಾಗಾಂವ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳಲ್ಲಿ ಕಳಪೆ ಮಟ್ಟದಲ್ಲಿ ನಡೆದಿವೆ ಎಂದು ಆರೋಪಿಸಿದರು. ಸರ್ಕಾರದ ಅನುದಾನ ಸಮರ್ಪಕವಾಗಿ ಬಳಕೆಯಾಗಿದೆಯೇ ಎಂಬುದನ್ನು ಪರಿಶೀಲಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಾಮಗಾರಿಗಳ ಗುಣಮಟ್ಟದ ಕುರಿತು ಸಮಗ್ರ ತಪಾಸಣೆ ನಡೆಸಬೇಕು ಎಂದು ಒತ್ತಾಯಿಸಿದರು.

ತಾಲೂಕಿನ ರೈತರು, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಜೀವನಾಡಿಯಾಗಿರುವ ಗಂಡೋರಿ ನಾಲಾ ಜಲಾಶಯದಲ್ಲಿ ಮಳೆ ಕೊರತೆಯಿಂದ ನೀರಿನ ಸಂಗ್ರಹ ಕಡಿಮೆಯಾಗಿದೆ. ಇದರಿಂದ ಜನರು ಮತ್ತು ಜಾನುವಾರುಗಳು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಜಲಾಶಯದಿಂದ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿಗೆ ಪೈಪ್‌ಲೈನ್ ಮೂಲಕ ನೀರು ಪೂರೈಸುವ ಕಾಮಗಾರಿಯನ್ನು ಕೈಬಿಡಬೇಕು. ಮೊದಲು ಸ್ಥಳೀಯ ರೈತರು, ಜನರು ಹಾಗೂ ಜಾನುವಾರುಗಳ ಕುಡಿಯುವ ನೀರಿನ ಅಗತ್ಯಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಮಹಾಗಾಂವ ತಾಂಡದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ನಿವಾಸಿಗಳು ಪ್ರತಿನಿತ್ಯ ನೀರಿಗಾಗಿ ಪರದಾಡುತ್ತಿದ್ದಾರೆ. ಅಧಿಕಾರಿಗಳು ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಪರಿಶೀಲಿಸಿ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ರಾಜು ರಾಥೋಡ್, ಶರಣಪ್ಪ ಬೆನಕಪಳಿ, ಮನೋಜಕುಮಾರ ಹತ್ತಿ, ವೆಂಕಟೇಶ ರಾಥೋಡ್, ಸಂಜುಕುಮಾರ, ಮುಸ್ತಫಾ ಕುರಿಕೋಟಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರತಿಭಟನೆಯ ಬಳಿಕ ತಹಶೀಲ್ದಾರ್ ಮುಹಮ್ಮದ್ ಮೊಸಿನ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ