ಸಿದ್ದರಾಮಯ್ಯರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಿದರೆ ರಾಜ್ಯದಲ್ಲಿ ದಂಗೆ : ಮಹಾಂತೇಶ್ ಕೌಲಗಿ
ಕಲಬುರಗಿ: ಹಿಂದುಳಿದ ವರ್ಗಗಳು ಸೇರಿದಂತೆ ರಾಜ್ಯದ ಎಲ್ಲಾ ಸಮುದಾಯಗಳ ಹಿತವನ್ನು ಬಯಸಿ, ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ಸಿದ್ದರಾಮಯ್ಯ ಅವರನ್ನು ಷಡ್ಯಂತ್ರ ಮಾಡಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ಮಾಡಿದರೆ ರಾಜ್ಯದಲ್ಲಿ ದಂಗೆಗಳನ್ನು ಎದುರಿಸಬೇಕಾದಿತು ಎಂದು ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಮುಖಂಡ ಮಹಾಂತೇಶ್ ಕೌಲಗಿ ಎಚ್ಚರಿಕೆ ನೀಡಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಹಾಂತೇಶ್ ಕೌಲಗಿ, ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿರುವ ಸಿಎಂ ಸಿದ್ದರಾಮಯ್ಯನವರನ್ನು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕು ಎಂದು ಹೇಳಿದರು.
ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಹಲವು ಭಾಗ್ಯಗಳನ್ನು ಜಾರಿಗೆ ತರುವುದರ ಮೂಲಕ ಜನಮನ್ನಣೆ ಗಳಿಸಿದ್ದರು. ಎರಡನೇ ಸಲ ಭರವಸೆ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದ್ದಾರೆ. ಎಲ್ಲರ ಅಭ್ಯುದಯ ಬಯಸುವ ಇಂತಹ ಮುಖ್ಯಮಂತ್ರಿಗಳನ್ನು ಅಧಿಕಾರದ ಆಸೆಯಿಂದ ಕೆಳಗಿಳಿಸುವ ಪ್ರಯತ್ನ ಮಾಡಬಾರದು ಎಂದು ಕಾಂಗ್ರೆಸ್ ಶಾಸಕರಿಗೆ ಎಚ್ಚರಿಸಿದರು.
ಸಿದ್ದರಾಮಯ್ಯನವರಿಗೆ 125ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ. ಮಾಧ್ಯಮಗಳಲ್ಲಿ ಎರಡೂವರೆ ವರ್ಷಗಳ ಬಳಿಕ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂಬ ಸುದ್ದಿ ಹರಿದಾಡುತ್ತಿವೆ. ಇವುಗಳಿಗೆ ಯಾವುದೇ ಬೆಲೆ ಕೊಡದೆ, ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಗೌರವಯುತವಾಗಿ ನಡೆಸಿಕೊಂಡು ಮುಂದಿನ ಅವಧಿಗೂ ಸಿದ್ದರಾಮಯ್ಯನವರೇ ಸಿಎಂ ಎಂದು ಸ್ಪಷ್ಟಪಡಿಸಬೇಕು ಎಂದು ತಿಳಿಸಿದರು.
ಒಂದು ವೇಳೆ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನಗಳು ನಡೆದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಬೆಲೆ ತೆರಬೇಕಾದೀತು. ಹಾಗಾಗಿ ಮುಖ್ಯಮಂತ್ರಿ ಬದಲಾವಣೆ ಮಾಡುವ ವಿಷಯದಲ್ಲಿ ಕೈ ಹಾಕಬಾರದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಸಯ್ಯ ಗುತ್ತೇದಾರ್, ಅರ್ಜುನ್ ಗೊಬ್ಬುರ, ಭೈಲಪ್ಪ ನೆಲೋಗಿ, ಪೀಡಪ್ಪ ಜಾಲಗಾರ್, ಶರಣಬಸಪ್ಪಾ ಕನ್ನಗೊಂಡ, ಲಕ್ಷ್ಮಣ ಪೂಜಾರಿ, ಸುರೇಶ್ ವಳಕೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.