×
Ad

ಮಹಿಳಾ ಹಕ್ಕುಗಳಿಗಾಗಿ ಕಲಬುರಗಿಯಲ್ಲಿ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

Update: 2026-04-01 19:51 IST

ಕಲಬುರಗಿ : ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘ, ಕೃಷಿ ಕೂಲಿಕಾರರ ಸಂಘ, ಜನವಾದಿ ಮಹಿಳಾ ಸಂಘಟನೆ, ಭಾರತ ವಿದ್ಯಾರ್ಥಿ ಫೆಡರೇಷನ್ ಹಾಗೂ ಡಿವೈಎಫ್‌ಐ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ 118ನೇ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರ ಹಕ್ಕುಗಳ ರಕ್ಷಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಸಂಘಟನೆಗಳ ಮುಖಂಡರು ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನಾಕಾರರು ಮಾತನಾಡಿ, ಸ್ವಾತಂತ್ರ್ಯ ಪಡೆದ ನಂತರವೂ ಸಮಾಜದಲ್ಲಿ ಲಿಂಗ ತಾರತಮ್ಯ ಇನ್ನೂ ಜೀವಂತವಾಗಿದ್ದು, ಸಮಾನ ಹಕ್ಕುಗಳಿಗಾಗಿ ಮಹಿಳೆಯರು ನಿರಂತರ ಹೋರಾಟ ನಡೆಸಬೇಕಾದ ಪರಿಸ್ಥಿತಿ ಇದೆ ಎಂದು ಹೇಳಿದರು. ಎಲ್ಲಾ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಮಾತೃತ್ವ ರಜೆ ಹಾಗೂ ಮುಟ್ಟಿನ ರಜೆ ನೀಡಬೇಕು ಎಂದು ಆಗ್ರಹಿಸಿದರು.

ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಪದ್ಮನಿ ಕಿರಣಗಿ ಮಾತನಾಡಿ, ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಅಫಜಲಪುರದ ಬಳೂರಗಿ ಗ್ರಾಮದ ಸಮೀಪ ನಡೆದ ಪತ್ನಿಹತ್ಯೆ ಘಟನೆ ಉಲ್ಲೇಖಿಸಿ, ಮಹಿಳೆಯರಿಗೆ ಭದ್ರತೆ ಇಲ್ಲದಂತಾಗಿದೆ ಎಂದು ಖೇದ ವ್ಯಕ್ತಪಡಿಸಿದರು.

ಡಿವೈಎಫ್‌ಐ ರಾಜ್ಯ ಘಟಕದ ಅಧ್ಯಕ್ಷೆ ಲವಿತ್ರ ವಸ್ತ್ರದ ಮಾತನಾಡಿ, ಸಾವಿತ್ರಿಬಾಯಿ ಫುಲೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೋರಾಟದ ಫಲವಾಗಿ ಮಹಿಳೆಯರು ಹಲವಾರು ಹಕ್ಕುಗಳನ್ನು ಪಡೆದಿದ್ದಾರೆ. ಆದರೆ, ಇಂದಿನ ಪರಿಸ್ಥಿತಿಯಲ್ಲಿ ಆ ಹಕ್ಕುಗಳನ್ನು ಉಳಿಸಿಕೊಳ್ಳಲು ಸಹ ಮತ್ತೆ ಹೋರಾಟ ನಡೆಸಬೇಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಸಿಐಟಿಯುನ ಶಾಂತಾ ಘಂಟಿ, ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಗೌರಮ್ಮ ಪಾಟೀಲ, ಜಿಲ್ಲಾ ಕೃಷಿ ಕೂಲಿಕಾರರ ಸಂಘಟನೆಯ ಮಲ್ಲಮ್ಮ ಕೊಡ್ಲಿ, ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಸುಜಾತಾ ವೈ., ಬಸಮ್ಮ ಗುತ್ತೇದಾರ, ಸಿಐಟಿಯು ಮುಖಂಡ ಎಂ.ಬಿ.ಸಜ್ಜನ್, ಶ್ರೀಮಂತ ಬಿರಾದಾರ, ಶಾಂತಾ ಸರಡಗಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News