×
Ad

ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಹೊಣೆ: ಶಾಸಕ ಡಾ.ಅವಿನಾಶ್‌ ಜಾಧವ್ ಎಚ್ಚರಿಕೆ

Update: 2026-05-13 18:45 IST

ಚಿಂಚೋಳಿ: ತಾಲೂಕಿನ ಯಾವುದೇ ಗ್ರಾಮ ಅಥವಾ ತಾಂಡಾಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಂಟಾದರೆ ಸಂಬಂಧಿತ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಶಾಸಕ ಡಾ. ಅವಿನಾಶ ಜಾಧವ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಪಟ್ಟಣದ ಪ್ರಜಾಸೌಧದಲ್ಲಿ ಬುಧವಾರ ನಡೆದ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನೆಲೆ ಸಾರ್ವಜನಿಕರ ಹಿತದೃಷ್ಟಿಯಿಂದ ಅಧಿಕಾರಿಗಳು ಕಚೇರಿಯಲ್ಲೇ ಕುಳಿತುಕೊಳ್ಳದೆ ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ನೀರಿನ ಅಭಾವ ಎದುರಿಸುತ್ತಿರುವ ಗ್ರಾಮಗಳಿಗೆ ತಕ್ಷಣವೇ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಕೆಟ್ಟು ನಿಂತಿರುವ ಬೋರ್‌ವೆಲ್‌ಗಳನ್ನು 24 ಗಂಟೆಯೊಳಗೆ ದುರಸ್ತಿ ಮಾಡಬೇಕು. ಅಗತ್ಯವಿದ್ದಲ್ಲಿ ಹೊಸ ಬೋರ್‌ವೆಲ್ ಕೊರೆಯಲು ತಕ್ಷಣವೇ ಪ್ರಸ್ತಾವನೆ ಸಲ್ಲಿಸಿ ಮಂಜೂರಾತಿ ಪಡೆಯುವಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಿಸಿಗಾಳಿಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಗ್ರಾಮ ಮಟ್ಟದಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ಹಾಗೂ ಒಆರ್‌ಎಸ್ (ORS) ಪ್ಯಾಕೆಟ್‌ಗಳ ಸಮರ್ಪಕ ದಾಸ್ತಾನು ಇರಿಸಿಕೊಳ್ಳಬೇಕು ಎಂದು ತಿಳಿಸಿದರು.

ಪಶುಸಂಗೋಪನಾ ಇಲಾಖೆಯು ಮೇವು ಬ್ಯಾಂಕ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಂಡು ರೈತರಿಗೆ ಮೇವಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ತಹಸಿಲ್ದಾರ್ ಸುಬ್ಬಣ್ಣ ಜಮಖಂಡಿ, ಇಒ ಸಂತೋಷ್ ಚೌಹಾಣ್, ಕಾಶಿನಾಥ್ ದನ್ನಿ, ಡಾ. ಗಫಾರ್, ಡಾ. ಮಲ್ಲಿಕಾರ್ಜುನ, ಪ್ರವೀಣ್ ಕುಮಾರ್, ವೀರಶೆಟ್ಟಿ ರಾಠೋಡ್, ಉಮೇಶ್ ರಾಠೋಡ್, ಯುವರಾಜ್ ರಾಠೋಡ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News