ಮೋದಿ, ಅಮಿತ್ ಶಾ, ಜ್ಞಾನೇಶ್ ಕುಮಾರ್ SIR ಅಕ್ರಮಗಳ ಪ್ರಮುಖ ಆರೋಪಿಗಳು: ಸಚಿವ ಪ್ರಿಯಾಂಕ್ ಖರ್ಗೆ
"ಸಮರ್ಪಕ ಕಾರಣವಿಲ್ಲದೆ 13.2 ಕೋಟಿ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ"
ಕಲಬುರಗಿ : ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರೇ ಪ್ರಮುಖ ಆರೋಪಿಗಳು ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್ಐಆರ್ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಕಾಂಗ್ರೆಸ್ ಕೇಳುತ್ತಿರುವ ಪ್ರಶ್ನೆಗಳಿಗೆ ಬಿಜೆಪಿ ನಾಯಕರು ಉತ್ತರಿಸುವ ಬದಲು ಚುನಾವಣಾ ಆಯೋಗವೇ ಸ್ಪಷ್ಟನೆ ನೀಡಬೇಕು. ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರ ಹೆಸರುಗಳನ್ನು ಕೈಬಿಟ್ಟಿರುವ ಕುರಿತು ಪ್ರಶ್ನಿಸುವುದು ತಪ್ಪೇ ಎಂದು ಪ್ರಶ್ನಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ಮಾತ್ರ ಉತ್ತರಿಸುತ್ತಿದ್ದಾರೆಯೇ ಹೊರತು ಚುನಾವಣಾ ಆಯೋಗ ಮೌನವಾಗಿದೆ. ಕಾಂಗ್ರೆಸ್ ಯಾವುದೇ ವಿಷಯ ಪ್ರಸ್ತಾಪಿಸಿದರೂ ತಕ್ಷಣ ಪ್ರತಿಕ್ರಿಯಿಸುತ್ತಿದ್ದ ಚುನಾವಣಾ ಆಯೋಗ, ಕಳೆದ ಒಂದೂವರೆ ತಿಂಗಳಿನಿಂದ ಕೇಳಲಾಗುತ್ತಿರುವ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ ಎಂದು ಟೀಕಿಸಿದರು.
ಸುಮಾರು 13.2 ಕೋಟಿ ಮತದಾರರನ್ನು ಯಾವುದೇ ಸಮರ್ಪಕ ಕಾರಣವಿಲ್ಲದೆ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಶೇ.15ರಷ್ಟು ಮತದಾರರ ಹೆಸರುಗಳನ್ನು ತೆಗೆದುಹಾಕಿರುವ ಕುರಿತು ಪ್ರಶ್ನಿಸುವುದು ತಪ್ಪೇ? ಚುನಾವಣಾ ಆಯೋಗದ ನಿರ್ಧಾರಗಳನ್ನು ಮೂವರು ಆಯುಕ್ತರು ಒಟ್ಟಾಗಿ ಕೈಗೊಳ್ಳಬೇಕಾದ ಸಂದರ್ಭದಲ್ಲಿ, ಇಬ್ಬರು ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಿದ್ದರೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದೇಕೆ ಎಂದು ಪ್ರಶ್ನಿಸಿದರು.
ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಫಾರ್ಮ್-7 ಅರ್ಜಿಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಕೆಲವು ಕಡೆಗಳಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ಕಾರ್ಯಕರ್ತರು ಅರ್ಜಿಗಳನ್ನು ಸಲ್ಲಿಸಿ ಮತದಾರರ ಹೆಸರುಗಳನ್ನು ತೆಗೆಸಲು ಪ್ರಯತ್ನಿಸಿದ್ದಾರೆ. ವಿಜಯಪುರದಲ್ಲಿ ಮೃತಪಟ್ಟಿದ್ದಾರೆ ಎಂದು ಸುಳ್ಳು ದೂರು ನೀಡಿರುವುದು ಹಾಗೂ ಚಿತ್ತಾಪುರದಲ್ಲಿ ಒಂದು ಸಮುದಾಯದ 40 ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲು ಯತ್ನಿಸಿರುವ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಆರೋಪಿಸಿದರು.
ಚಿತ್ತಾಪುರದಲ್ಲಿ ಪರಿಶೀಲನೆ ನಡೆಸಿದಾಗ ಸಂಬಂಧಪಟ್ಟ ಮತದಾರರು ಅಲ್ಲಿಯೇ ವಾಸವಾಗಿದ್ದು, ಸ್ಥಳಾಂತರಗೊಂಡಿಲ್ಲ ಎಂಬುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ಕುರಿತು ಎಫ್ಐಆರ್ ದಾಖಲಿಸಬೇಕು ಎಂದು ಸೂಚಿಸಿದ್ದರು ಎಂದು ತಿಳಿಸಿದರು.
ಚುನಾವಣಾ ಆಯೋಗದ ಸಾಫ್ಟ್ವೇರ್ ಬದಲಾಯಿಸಿದ್ದು ಯಾರು? ಲಾಗಿನ್ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿ ದುರುಪಯೋಗಕ್ಕೆ ಅವಕಾಶ ಕಲ್ಪಿಸಿದ್ದು ಯಾರು? ಫಾರ್ಮ್-6 ಪ್ರಕ್ರಿಯೆಯಲ್ಲಿ ಬದಲಾವಣೆ ತಂದವರು ಯಾರು? ಇಸಿಐನ ಇರೋನೆಟ್ ಜಾಲತಾಣದಲ್ಲಿ ಬದಲಾವಣೆ ಮಾಡಲು ಅನುಮತಿ ನೀಡಿದವರು ಯಾರು? ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ ಎಂದು ಹೇಳಿದರು.
ಎಸ್ಐಆರ್ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಆರೋಪಿಗಳೆಂದು ಉಲ್ಲೇಖಿಸಿದ ಪ್ರಿಯಾಂಕ್ ಖರ್ಗೆ, ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆಯಾಗಬೇಕು. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ನಾಯಕರು ಈ ವಿಷಯದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವುದನ್ನು ಉಲ್ಲೇಖಿಸಿದ ಅವರು, ಪಿಯೂಷ್ ಗೋಯಲ್ ಅವರು ಈ ಹಿಂದೆ ಬೀದಿಗಿಳಿದು ಪ್ರತಿಭಟನೆಗಳಲ್ಲಿ ಭಾಗವಹಿಸಿದ ಉದಾಹರಣೆ ಇಲ್ಲ. ಈಗ ಅವರು ಬೀದಿಗಿಳಿದಿರುವುದು ಎಲ್ಲವೂ ಬಹಿರಂಗವಾಗುತ್ತಿದೆ ಎಂಬುದನ್ನು ತೋರಿಸುತ್ತದೆ ಎಂದು ಟೀಕಿಸಿದರು.
ವಿದ್ಯಾರ್ಥಿಗಳ ಪ್ರತಿಭಟನೆಗೆ ವಿದೇಶಿ ಹಣಕಾಸು ನೆರವು ಹಾಗೂ ಅವರ ಹಿಂದೆ ವಿದೇಶಿ ಕೈವಾಡವಿದೆ ಎಂಬ ಆರೋಪಗಳನ್ನು ಮಾಡುವವರು ಅದಕ್ಕೆ ಪುರಾವೆ ನೀಡಬೇಕು. ಸರ್ಕಾರ ನಿಮ್ಮದೇ ಇರುವಾಗ ದಾಖಲೆಗಳನ್ನು ಯಾಕೆ ನೀಡುತ್ತಿಲ್ಲ ಎಂದು ಸವಾಲು ಹಾಕಿದರು.
ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಅವರು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಮಾತನಾಡುವವರು ಖರ್ಗೆ ಅವರ ರಾಜಕೀಯ ಅನುಭವದಷ್ಟು ತಮ್ಮ ವಯಸ್ಸಿದೆಯೇ ಎಂಬುದನ್ನು ಮರೆಯಬಾರದು. ತಮ್ಮ ರಾಜಕೀಯ ಗುರು ಪ್ರಧಾನಿ ನರೇಂದ್ರ ಮೋದಿ ಅವರು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿ ಎಂದು ಸವಾಲು ಹಾಕಿದರು.
ಬಿಜೆಪಿಯವರು ಗೆದ್ದಾಗ ಮತದಾನ ವ್ಯವಸ್ಥೆಯ ಬಗ್ಗೆ ಪ್ರಶ್ನಿಸುವುದಿಲ್ಲ. ತಾವು ಗೆದ್ದರೂ ಐಟಿ-ಬಿಟಿ ಸಚಿವನಾಗಿ ಚುನಾವಣಾ ವ್ಯವಸ್ಥೆಯ ಪಾರದರ್ಶಕತೆಗಾಗಿ ಎಥಿಕಲ್ ಹ್ಯಾಕಥಾನ್ ನಡೆಸುವಂತೆ ಹೇಳಿದ್ದೇನೆ. ಇದಕ್ಕೆ ವಿರೋಧ ವ್ಯಕ್ತಪಡಿಸುವ ಅಗತ್ಯವೇನು ಎಂದು ಪ್ರಶ್ನಿಸಿದರು.
ರಾಜ್ಯದ ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆಯಲ್ಲಿ ಸೋತರೆ ಅದು 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ವಾರಾಣಸಿ ಹಾಗೂ ನಾಗಪುರದಲ್ಲಿಯೂ ಮೋದಿ ಅವರು ಸೋತಿದ್ದಾರೆ. ಹಾಗಾದರೆ ಅದನ್ನು ಮುಂದಿನ ಚುನಾವಣೆಯ ದಿಕ್ಸೂಚಿ ಎನ್ನಬಹುದೇ? ಬ್ಯಾಲೆಟ್ ಪೇಪರ್ನಲ್ಲಿ ಗೆಲ್ಲುವವರು ಮುಂದಿನ ಚುನಾವಣೆಯನ್ನೂ ಬ್ಯಾಲೆಟ್ ಪೇಪರ್ನಲ್ಲೇ ಎದುರಿಸಲಿ ಎಂದು ಸವಾಲು ಹಾಕಿದರು.
ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದನೆ :
ಈ ವರ್ಷ ಮಳೆಯ ಪ್ರಮಾಣದಲ್ಲಿ ಕೊರತೆಯಾಗಿದ್ದು, ನದಿ ಹಾಗೂ ಜಲಮೂಲಗಳು ಬತ್ತಿಹೋಗಿವೆ. ಜಿಲ್ಲೆಯ 11 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಗ್ರೌಂಡ್ ಟ್ರೂಥ್ ಪ್ರಕ್ರಿಯೆ ನಡೆಯುತ್ತಿದೆ. ಬೆಳೆ ನಷ್ಟದ ಕುರಿತು ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ. ಬೆಳೆ ವಿಮೆ ಮತ್ತು ಪರಿಹಾರ ವಿತರಣೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.
ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಮಾತನಾಡಿದ ಅವರು, ಕಬ್ಬು ಬೆಳೆಗಾರರಿಗೆ ರಾಜ್ಯ ಸಲಹಾ ಬೆಲೆ (ಎಸ್ಎಪಿ) ನೀಡುವ ಪ್ರಕ್ರಿಯೆ ಇದೆ. ರೈತರ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮುಖ್ಯಮಂತ್ರಿ ಅವರು ರೈತರೊಂದಿಗೆ ಚರ್ಚೆ ನಡೆಸಿದ್ದಾರೆ. ರೈತರ ಮೇಲೆ ಅನಗತ್ಯ ಒತ್ತಡ ಹೇರಬಾರದು ಎಂದು ಮನವಿ ಮಾಡಿದರು.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಅವರು, ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆ ನೀಡಿದ್ದವರು ಈಗ ರೈತರ ಸಮಸ್ಯೆಗಳ ಬಗ್ಗೆ ಏಕೆ ಮಾತನಾಡುತ್ತಿಲ್ಲ? ರೈತರ ಪ್ರತಿಭಟನಾ ಸ್ಥಳಕ್ಕೆ ಕೇಂದ್ರದ ಯಾವ ಸಚಿವರು ಭೇಟಿ ನೀಡಿದ್ದಾರೆ ಎಂಬುದನ್ನು ತಿಳಿಸಲಿ ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರವೇ ಹಣ ಭರಿಸಬೇಕಾದ ಪರಿಸ್ಥಿತಿ ಇದೆ. ಕೇಂದ್ರ ಪ್ರಾಯೋಜಿತ ಯೋಜನೆಗಳಿಂದ ರಾಜ್ಯದ ಮೇಲಿನ ಆರ್ಥಿಕ ಹೊರೆ ಕುರಿತು ಚರ್ಚೆಯಾಗಬೇಕು. ರೈತರ ಬೆಳೆ ವಿಮೆ, ಬೆಂಬಲ ಬೆಲೆ ಹಾಗೂ ಪರಿಹಾರದ ವಿಚಾರಗಳಲ್ಲಿ ಕೇಂದ್ರ ಸರ್ಕಾರವೂ ತನ್ನ ಜವಾಬ್ದಾರಿ ನಿರ್ವಹಿಸಬೇಕು ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಬಯೋ ಎಕಾನಮಿ ಯೋಜನೆಗೆ ಚಾಲನೆ ನೀಡಲಾಗಿದೆ. ಕೃಷಿಯಲ್ಲಿ ತಂತ್ರಜ್ಞಾನ ಬಳಕೆಗೆ ಆದ್ಯತೆ ನೀಡಲಾಗುತ್ತಿದ್ದು, ಡ್ರೋನ್ ಮೂಲಕ ಔಷಧ ಸಿಂಪಡಣೆ ಸೇರಿದಂತೆ ಹೊಸ ಪ್ರಯೋಗಗಳನ್ನು ಕಲಬುರಗಿಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಭೀಮಾ ನದಿಯಿಂದ 15 ಟಿಎಂಸಿ ನೀರು ಹರಿಸಲು ಮನವಿ :
ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಜಲಮೂಲಗಳು ಬತ್ತಿಹೋಗಿದ್ದು, ಕುಡಿಯುವ ನೀರು ಮತ್ತು ಕೃಷಿಗೆ ನೀರಿನ ಸಮಸ್ಯೆ ಎದುರಾಗುತ್ತಿದೆ. ಮಹಾರಾಷ್ಟ್ರದಿಂದ ಭೀಮಾ ನದಿಗೆ 15 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ನೀರು ಬಿಡುವುದಾಗಿ ಅಲ್ಲಿನವರು ಭರವಸೆ ನೀಡಿದ್ದಾರೆ. ಯಾವಾಗ ನೀರು ಹರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ ಎಂದರು.
ಪ್ರತಿ ತಾಲೂಕಿಗೆ 1 ಕೋಟಿ ರೂ. ಅನುದಾನ ನೀಡಲಾಗುತ್ತಿದ್ದು, ಕೊಳವೆಬಾವಿ ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಭೀಮಾ ನದಿ ನೀರಿನ ಹಂಚಿಕೆ ವಿಚಾರವನ್ನು ಸರ್ವಪಕ್ಷ ನಿಯೋಗದ ಮೂಲಕವೂ ಪ್ರಸ್ತಾಪಿಸಲಾಗಿದೆ. ಮುಂದಿನ ಕಾನೂನು ಕ್ರಮಗಳ ಕುರಿತು ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ :
ಎಚ್ಎಂಟಿ, ಎನ್ಎಎಲ್, ಉಕ್ಕಿನ ಕಾರ್ಖಾನೆ, ಎಚ್ಎಎಲ್ ಹಾಗೂ ಡಿಆರ್ಡಿಒದಂತಹ ಸಂಸ್ಥೆಗಳನ್ನು ಸ್ಥಾಪಿಸಿದ್ದು ಕಾಂಗ್ರೆಸ್ ಸರ್ಕಾರ. ಈಗ ಕುಮಾರಸ್ವಾಮಿ ಅವರು ಎಚ್ಎಂಟಿ ಕಂಪನಿಯ ಎರಡು ಹೊಸ ವಾಚ್ಗಳನ್ನು ತರುವುದನ್ನೇ ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ಕೇಂದ್ರ ಸಚಿವರಾಗಿರುವ ಅವರು ರಾಜ್ಯದಲ್ಲಿ ಹೊಸ ಕೈಗಾರಿಕೆಗಳನ್ನು ಸ್ಥಾಪಿಸಿದ್ದಾರೆಯೇ ಎಂದು ಪ್ರಶ್ನಿಸಿದರು.
ಮುಂದುವರಿದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ತಮ್ಮ ಇಲಾಖೆಯಿಂದ 11 ನೀತಿಗಳನ್ನು ಜಾರಿಗೆ ತಂದಿದ್ದೇನೆ. ಆದರೆ ಅವರು ಸ್ಟಿಂಗ್ ಪ್ರಕರಣದ ನಿಜಾಂಶ ಹೊರಬರಬೇಕು ಎಂದು ಹೇಳಿದ್ದರು. ಪ್ರಕರಣದಲ್ಲಿ ಬಂಧನವಾಗಿ ನಿಜಾಂಶ ಹೊರಬಂದಾಗ ಪಾದಯಾತ್ರೆ ಮಾಡುವುದೇಕೆ ಎಂದು ವ್ಯಂಗ್ಯವಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಹರವಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.