×
Ad

NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಪಿಡ್ಡಪ್ಪ ಜಾಲಗಾರ ಆಗ್ರಹ

Update: 2026-05-19 18:43 IST

ಕಲಬುರಗಿ: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಕುಸಿತಗೊಳಿಸಿದ್ದು, ಈ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಒಬಿಸಿ ಮೋರ್ಚಾ ಉಪಾಧ್ಯಕ್ಷ ಪಿಡ್ಡಪ್ಪ ಜಾಲಗಾರ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ದೇಶದಾದ್ಯಂತ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ರಾಜ್ಯದಲ್ಲೇ ಸುಮಾರು ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಗಲು-ರಾತ್ರಿ ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸಿ ಪರೀಕ್ಷೆ ಬರೆದಿದ್ದರು. ಮಕ್ಕಳ ಭವಿಷ್ಯಕ್ಕಾಗಿ ಪೋಷಕರು ಸಹ ಅನೇಕ ತ್ಯಾಗಗಳನ್ನು ಮಾಡಿದ್ದಾರೆ. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಪ್ರಕ್ರಿಯೆಯ ಗೊಂದಲಗಳಿಂದ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆ ಕುಸಿದಿದೆ. ಈ ಘಟನೆಯಿಂದ ಮಾನಸಿಕವಾಗಿ ನೊಂದ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ದುಃಖಕರ ಸಂಗತಿಯಾಗಿದೆ ಎಂದು ಅವರು ಹೇಳಿದರು.

ಈಗಾಗಲೇ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವ ಕೇಂದ್ರ ಸರಕಾರ, ಅದನ್ನು ಹಿಂಪಡೆದು ದೇಶದ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಪಿಡ್ಡಪ್ಪ ಜಾಲಗಾರ ಒತ್ತಾಯಿಸಿದರು.

ನೀಟ್ ಹಗರಣವನ್ನು ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರ ಮತ್ತು ಶಿಕ್ಷಣ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ. ಆದ್ದರಿಂದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News