ಕಲಬುರಗಿ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಪ್ರಯತ್ನ ಅಗತ್ಯ : ಸಂಗೀತಾ ಸಡಕೀನ
ಕಲಬುರಗಿ : ಶಿಕ್ಷಣದಿಂದ ವಂಚಿತರಾಗಿ ದುಡಿಮೆಯಲ್ಲಿ ತೊಡಗಿಕೊಂಡಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಸರಕಾರ, ಸರಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರೆಲ್ಲರೂ ಸಂಘಟಿತರಾಗಿ ಪ್ರಯತ್ನಿಸಬೇಕಿದೆ ಎಂದು ಎಂ.ಎಸ್.ಇರಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸಂಗೀತಾ ಸಡಕೀನ ಹೇಳಿದರು.
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಎಸ್.ಇರಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಕುಟುಂಬದಲ್ಲಿನ ಬಡತನ, ಅನಕ್ಷರತೆ, ಶಿಕ್ಷಣದ ಮಹತ್ವದ ಕುರಿತು ಅರಿವಿಲ್ಲದಿರುವುದು, ವಲಸೆ ಹೋಗುವುದು, ತೀವ್ರ ತರಹದ ಕಾಯಿಲೆಯಿಂದ ಬಳಲುತ್ತಿರುವ ಪೋಷಕರು, ಅಸ್ಪೃಶ್ಯತೆ ಹೀಗೆ ಅನೇಕ ಕಾರಣಗಳಿಂದ ಮಕ್ಕಳು ಶಾಲೆಗೆ ಹೋಗದೇ ಕೆಲಸಕ್ಕೆ ಹೋಗಿ ಬಾಲಕಾರ್ಮಿಕರಾಗುತ್ತಾರೆ. ಮಕ್ಕಳ ರಕ್ಷಣೆ ಹಾಗೂ ಅವರಿಗೆ ಕಡ್ಡಾಯವಾಗಿ ಶಿಕ್ಷಣ ಒದಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು
ಬಾಲ ಕಾರ್ಮಿಕ ಪದ್ಧತಿಯಿಂದ ಆಗುವ ದುಷ್ಪರಿಣಾಮ ಕುರಿತು ಪೋಷಕರಲ್ಲಿ ಅರಿವು ಮೂಡಿಸಿ, ಬಾಲ ಕಾರ್ಮಿಕತೆಯನ್ನು ನಿರ್ಮೂಲನೆ ಮಾಡಬೇಕು. ಮಕ್ಕಳಿಗೆ ಅವರ ಹಕ್ಕುಗಳ ಕುರಿತು ತಿಳಿವಳಿಕೆ ನೀಡಬೇಕು. ತಂದೆ ತಾಯಿಗಳು ತಮ್ಮ ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಉಪನ್ಯಾಸಕರಾದ ಆನಂದ ಕೊಪ್ಪದ, ಬಾಲಕಾರ್ಮಿಕ ಪದ್ಧತಿ ವಿರೋಧಿ ಪ್ರಮಾಣ ವಚನ ಬೋಧಿಸಿದರು.
ಹಿರಿಯ ಉಪನ್ಯಾಸಕರಾದ ಕೃಷ್ಣವೇಣಿ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲ ಸಿಬ್ಬಂದಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.