ಕಲಬುರಗಿ : ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಎನ್‌ಡಿಎ ಅಭ್ಯರ್ಥಿ ಶಶೀಲ್ ಜಿ.ನಮೋಶಿ ಮುನ್ನಡೆ ಸಾಧಿಸಿದ್ದು, ಎರಡನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈ ಮೂಲಕ ಅವರ ಗೆಲುವು ಬಹುತೇಕ ಖಚಿತವಾಗಿದೆ. ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.

ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಹಿನ್ನಡೆ ಅನುಭವಿಸಿದ್ದಾರೆ.

ಮೊದಲ ಸುತ್ತಿನ ಪ್ರಥಮ ಪ್ರಾಶಸ್ತ್ಯದ ಮತಗಳ ಎಣಿಕೆಯಲ್ಲಿ ಶಶೀಲ್ ಜಿ. ನಮೋಶಿ ಅವರು ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗಿಂತ 1,529 ಮತಗಳ ಮುನ್ನಡೆ ಸಾಧಿಸಿದ್ದರು. ಎರಡನೇ ಸುತ್ತಿನಲ್ಲೂ ನಮೋಶಿ ಮುನ್ನಡೆ ಮುಂದುವರಿಸಿದ್ದು, 3 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ ಎಂದು ವರದಿಯಾಗಿದೆ.

ಕ್ಷೇತ್ರದಲ್ಲಿ ಒಟ್ಟು 34,784 ಮತದಾರರಿದ್ದು, ಅವರಲ್ಲಿ 30,250 ಮಂದಿ ಮತ ಚಲಾಯಿಸಿದ್ದರು. ಮೊದಲ ಸುತ್ತಿನಲ್ಲಿ ಒಟ್ಟು 14,001 ಮತಗಳನ್ನು ಎಣಿಕೆ ಮಾಡಲಾಗಿತ್ತು. ಈ ಪೈಕಿ 13,183 ಮತಗಳು ಸಿಂಧುವಾಗಿದ್ದು, 818 ಮತಗಳು ತಿರಸ್ಕೃತಗೊಂಡಿದ್ದವು.

ಶಶೀಲ್ ನಮೋಶಿ ಅವರ ಗೆಲುವಿನ ಅಧಿಕೃತ ಘೋಷಣೆ ಇನ್ನಷ್ಟೇ ಬಾಕಿಯಿದೆ.

ಶಶೀಲ್ ನಮೋಶಿ ಪರಿಚಯ ಇಲ್ಲಿದೆ :

ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿಜೆಪಿ ಹಿರಿಯ ನಾಯಕ ಶಶೀಲ್ ಜಿ.ನಮೋಶಿ ಅವರು ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಐದನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಕಲಬುರಗಿಯ ಪ್ರತಿಷ್ಠಿತ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ (ಎಚ್‌ಕೆಇ) ಅಧ್ಯಕ್ಷರಾಗಿರುವ ನಮೋಶಿ ಅವರು, ಶಿಕ್ಷಕರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದು, ಶಿಕ್ಷಣ ಕ್ಷೇತ್ರದ ಸಮಸ್ಯೆಗಳು, ಶಿಕ್ಷಕರ ಹಕ್ಕುಗಳ ರಕ್ಷಣೆ, ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿ ಹಾಗೂ ಸಂವಿಧಾನದ 371(ಜೆ) ವಿಧಿಯ ಸಮರ್ಪಕ ಅನುಷ್ಠಾನ ಸೇರಿದಂತೆ ವಿವಿಧ ವಿಚಾರಗಳ ಕುರಿತು ಧ್ವನಿ ಎತ್ತುತ್ತಾ ಬಂದಿದ್ದಾರೆ.

ರಾಜಕೀಯ ಹಿನ್ನೆಲೆ :

1956ರ ಸೆ.21ರಂದು ಕಲಬುರಗಿಯಲ್ಲಿ ಜನಿಸಿದ ಶಶೀಲ್ ಜಿ. ನಮೋಶಿ ಅವರು ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ. ಮಾಜಿ ಶಾಸಕ ದಿವಂಗತ ಗಂಗಾಧರ ನಮೋಶಿ ಅವರ ಪುತ್ರರಾಗಿರುವ ಅವರು, 1990–91ರಲ್ಲಿ ಗುಲ್ಬರ್ಗಾ ಮಹಾನಗರ ಪಾಲಿಕೆಯ ಉಪಮೇಯರ್ ಆಗಿ ಸೇವೆ ಸಲ್ಲಿಸಿದ್ದಾರೆ.

ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ 1996–2002, 2002–2008 ಹಾಗೂ 2008–2014ರ ಅವಧಿಯಲ್ಲಿ ಸತತವಾಗಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು. 2014ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರ ವಿರುದ್ಧ ಸೋಲು ಕಂಡಿದ್ದರು. ಬಳಿಕ 2020ರಲ್ಲಿ ನಡೆದ ಚುನಾವಣೆಯಲ್ಲಿ ಮಟ್ಟೂರ ಅವರನ್ನು ಸೋಲಿಸಿ ಮತ್ತೆ ವಿಧಾನ ಪರಿಷತ್ ಪ್ರವೇಶಿಸಿದ್ದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor