ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪವಾಗದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ: ಮಾಜಿ ಸಚಿವೆ ಉಮಾಶ್ರೀ
ಸೇಡಂ : ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಸೇರಿದಂತೆ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ, ಯಾವುದೇ ಲೋಪದೋಷಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಎಸ್‌ಐಆರ್ ಪ್ರಕ್ರಿಯೆ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಉಳಿಯಲು ಸಾಧ್ಯವಾಗುತ್ತದೆ. ಬಿಎಲ್‌ಒಗಳು ಬೂತ್ ಮಟ್ಟದಲ್ಲಿ ಜವಾಬ್ದಾರಿಯಿಂದ ಕೆಲಸ ಮಾಡಿದರೆ ಮತದಾರರ ಪಟ್ಟಿ ಸಮರ್ಪಕವಾಗಿರುತ್ತದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಮಾತನಾಡಿ, ಚುನಾವಣೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವ ಕಾಂಗ್ರೆಸ್ ಕಾರ್ಯಕರ್ತರು ಎಸ್‌ಐಆರ್ ಪ್ರಕ್ರಿಯೆಯಲ್ಲೂ ಮನೆ-ಮನೆಗೆ ತೆರಳಿ ಮತದಾರರಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸಬೇಕು ಎಂದು ಕರೆ ನೀಡಿದರು.
ಕಾಂಗ್ರೆಸ್ ಮುಖಂಡ ಬಸವರಾಜ ಪಾಟೀಲ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ದುರುದ್ದೇಶದಿಂದ ಎಸ್‌ಐಆರ್ ಜಾರಿಗೊಳಿಸಿದೆ ಎಂದು ಆರೋಪಿಸಿದರು. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ವೇದಿಕೆ ಮೇಲೆ ಕೆಪಿಸಿಸಿ ರಾಜ್ಯ ಪ್ರ.ಕಾ ನಾಗೇಶ್ವರರಾವ್ ಮಾಲಿಪಾಟೀಲ ಹಾಗೂ ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ಸೋಮಶೇಖರ್ ಹಿರೇಮಠ, ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಿವಶರಣರೆಡ್ಡಿ ಪಾಟೀಲ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ನಂದಿಗಾಮ್ ಉಪಸ್ಥಿತರಿದ್ದರು.