ಕೋಲಿ ಕಬ್ಬಲಿಗ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ: ತಿಪ್ಪಣ್ಣಪ್ಪ ಕಮಕನೂರಿಗೆ ಸಚಿವ ಸ್ಥಾನ ನೀಡಲು ಆಗ್ರಹ
ಕಲಬುರಗಿ: ಕೋಲಿ ಕಬ್ಬಲಿಗ ಸಮಾಜಕ್ಕೆ ರಾಜಕೀಯವಾಗಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶದಿಂದ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಸಚಿವ ಸ್ಥಾನ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಭೀಮಣ್ಣ ಸಾಲಿ ಅವರಿಗೆ ರಾಜ್ಯಮಟ್ಟದ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿ ಸಂಪುಟ ದರ್ಜೆಯ ಸ್ಥಾನಮಾನ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಇತರೆ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ಪಿಡ್ಡಪ್ಪ ಜಾಲಗಾರ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತತ ಮೂರನೇ ಬಾರಿಗೆ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ತಿಪ್ಪಣ್ಣಪ್ಪ ಕಮಕನೂರ ಅವರು ಕೋಲಿ ಕಬ್ಬಲಿಗ ಸಮಾಜದ ಧ್ವನಿಯಾಗಿ ಸದನದ ಒಳಗೂ ಹೊರಗೂ ನಿರಂತರ ಹೋರಾಟ ನಡೆಸುತ್ತಿದ್ದಾರೆ. ರಾಜ್ಯ ಸಚಿವ ಸಂಪುಟದ ಮುಂದಿನ ವಿಸ್ತರಣೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಸುಮಾರು 40 ಲಕ್ಷ ಜನಸಂಖ್ಯೆ ಹೊಂದಿರುವ ಕೋಲಿ ಕಬ್ಬಲಿಗ ಸಮುದಾಯವು ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದು, ರಾಜಕೀಯವಾಗಿ ಹಿಂದುಳಿದಿದೆ. ಹಿಂದೆ ಈ ಸಮಾಜದಿಂದ ಹಲವು ಶಾಸಕರು ಹಾಗೂ ಸಂಸದರು ಆಯ್ಕೆಯಾಗಿದ್ದರೂ, ಪ್ರಸ್ತುತ ವಿಧಾನಸಭೆಯಲ್ಲಿ ಸಮುದಾಯದ ಪ್ರತಿನಿಧಿತ್ವ ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ ಸಮಾಜದ ಏಕೈಕ ವಿಧಾನ ಪರಿಷತ್ ಸದಸ್ಯರಾಗಿರುವ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ ಎಂದು ಹೇಳಿದರು.
ಇದೇ ವೇಳೆ, ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಅವರಿಗೆ ರಾಜ್ಯಮಟ್ಟದ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿ ಸಂಪುಟ ದರ್ಜೆಯ ಸ್ಥಾನಮಾನ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಭೀಮಣ್ಣ ಸಾಲಿ ಅವರು ಪಕ್ಷದ ಏಳಿಗೆಗಾಗಿ ನಿರಂತರವಾಗಿ ದುಡಿದಿದ್ದಾರೆ. ವಿಶೇಷವಾಗಿ ಖರ್ಗೆ ಕುಟುಂಬದ ವಿವಿಧ ಚುನಾವಣಾ ಹೋರಾಟಗಳಲ್ಲಿ ಮಹತ್ವದ ಪಾತ್ರ ವಹಿಸಿರುವ ಅವರು, ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ ಎಂದು ಹೇಳಿದರು.
ಈ ಕುರಿತು ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಗಮನಹರಿಸಿ ಸಮಾಜದ ಈ ಇಬ್ಬರು ಮುಖಂಡರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಬೇಕು ಎಂದು ಪಿಡ್ಡಪ್ಪ ಜಾಲಗಾರ ಮನವಿ ಮಾಡಿದರು.