ಕಲಬುರಗಿ: ಅಲ್ಪಸಂಖ್ಯಾತ ಶಾಸಕರು ಹಾಗೂ ಸಂಸದರು ಒಗ್ಗೂಡಿ ಒಕ್ಕೂಟ ರಚಿಸಿದ್ದು, ಅಲ್ಪಸಂಖ್ಯಾತರು ಸೇರಿದಂತೆ ಸಾಮಾನ್ಯ ಜನರ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಅಲ್ಪಸಂಖ್ಯಾತ ಶಾಸಕರ ಒಕ್ಕೂಟದ ಅಧ್ಯಕ್ಷ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಶಾಸಕ ಎನ್.ಎ.ಹಾರಿಸ್ ನಲಪಾಡ್ ಹೇಳಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧವಾ ವೇತನ, ಅಂಗವಿಕಲರ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.

ಅಲ್ಪಸಂಖ್ಯಾತರ ವಿವಿಧ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಸಂಘಟನೆಯ ಮೂಲಕ ಸರ್ಕಾರದ ಗಮನಕ್ಕೆ ತಂದು, ಅವುಗಳ ಪರಿಹಾರಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಾಮಾನ್ಯ ಜನರಿಗೆ ಅನುಕೂಲವಾಗುವ ಉದ್ದೇಶದಿಂದಲೂ ಸಂಘಟನೆ ಕೆಲಸ ಮಾಡಲಿದೆ ಎಂದು ತಿಳಿಸಿದರು.

ಅಂಗವಿಕಲರ ವೇತನ ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ದೂರುಗಳು ಬಂದಿವೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಯೋಜನೆಗಳಿಗೆ ಫಲಾನುಭವಿಗಳು ಅರ್ಜಿ ಸಲ್ಲಿಸಿದ ಬಳಿಕವೂ ಕೆಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವ್ಯವಸ್ಥೆಯಲ್ಲಿನ ಲೋಪಗಳನ್ನು ಪರಿಶೀಲಿಸಲು ಸಮಿತಿ ರಚಿಸಲಾಗಿದ್ದು, ಅಗತ್ಯವಿದ್ದಲ್ಲಿ ತನಿಖೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅನುಕೂಲವಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಸುಮಾರು 55 ಸಾವಿರ ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳ ಪ್ರಯೋಜನ ರಾಜ್ಯದ ಜನರಿಗೆ ತಲುಪುತ್ತಿದೆ. ರಾಜ್ಯದ ಅಭಿವೃದ್ಧಿಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಹಿನ್ನಡೆಯಾಗಿದೆ ಎಂಬ ಟೀಕೆಗಳಿದ್ದರೂ, ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ಹೇಳಿದರು.

ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದ ಬಳಿಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಜನಪರ ಯೋಜನೆಗಳನ್ನು ಮುಂದುವರಿಸಲಾಗುವುದು ಎಂದರು.

ಹಾಲಿನ ದರ ಏರಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹಾಗೂ ಅವರ ಒತ್ತಡದ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರದ ಮಟ್ಟದಲ್ಲಿ ಹಲವು ಬೆಲೆ ಏರಿಕೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಬೆಲೆ ಏರಿಕೆಗೆ ಮುಂದಾಗಿಲ್ಲ ಎಂದು ಹೇಳಿದರು.

ಬರಪೀಡಿತ ಪ್ರದೇಶಗಳಿಗೆ ಅಗತ್ಯವಿರುವ ಅನುದಾನವನ್ನು ಕೇಂದ್ರ ಸರ್ಕಾರ ಸಮರ್ಪಕವಾಗಿ ನೀಡುತ್ತಿಲ್ಲ. ಈ ಕುರಿತು ರಾಜ್ಯ ಸರ್ಕಾರ ತನ್ನ ಹಕ್ಕಿಗಾಗಿ ಹೋರಾಟ ನಡೆಸುತ್ತಿದೆ ಎಂದು ತಿಳಿಸಿದರು.

ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿದ್ದು, ಬೀದರ್ ಜಿಲ್ಲೆಯ ಪ್ರವಾಸ ಪೂರ್ಣಗೊಳಿಸಿ ಇದೀಗ ಕಲಬುರಗಿಗೆ ಆಗಮಿಸಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಉಳಿದ ಜಿಲ್ಲೆಗಳಿಗೂ ಪ್ರವಾಸ ಕೈಗೊಂಡು ಅಲ್ಪಸಂಖ್ಯಾತರ ವಿವಿಧ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡಲಾಗುವುದು ಎಂದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಶೇ.8ರಷ್ಟು ನಿವೇಶನಗಳನ್ನು ಮೀಸಲಿಡಬೇಕು ಹಾಗೂ ಈ ಭಾಗದ ಜನರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂಬ ಬೇಡಿಕೆಯ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮುಂದಿನ ದಿನಗಳಲ್ಲಿ ಪರಿಶೀಲಿಸಲಾಗುವುದು ಎಂದು ಉತ್ತರಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕಿ ಖನೀಜ್ ಫಾತಿಮಾ, ಬಿಲ್ಕಿಸ್ ಬಾನು, ಮಝಹರ್ ಖಾನ್ ಆಲಂ, ಅಹ್ಮದ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿರಣ್ ದೇಶಮುಖ್, ಫರಾಜ್ ಉಲ್ ಇಸ್ಲಾಂ ಹಾಗೂ ಕೆಪಿಸಿಸಿ ಸದಸ್ಯ ಲಾಲ್ ಅಹ್ಮದ್ ಸೇಠ್ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor