ಜನರ ಅಹವಾಲುಗಳಿಗೆ ಸ್ಪಂದಿಸುವುದೇ ʼಪ್ರಜಾಸೇವಾ ಅಭಿಯಾನʼದ ಉದ್ದೇಶ : ಸಚಿವ ಪ್ರಿಯಾಂಕ್ ಖರ್ಗೆ
ಕಮಲಾಪುರದಲ್ಲಿ ʼಪ್ರಜಾಸೇವಾ ಅಭಿಯಾನʼಕ್ಕೆ ಚಾಲನೆ
ಕಲಬುರಗಿ : ಸರಕಾರ ಜನರನ್ನು ಆಳುವುದಕ್ಕಲ್ಲ, ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವುದಕ್ಕಾಗಿ ಇರಬೇಕು. ಈ ಉದ್ದೇಶದಿಂದಲೇ ಪ್ರಜಾಸೇವಾ ಅಭಿಯಾನವನ್ನು ಆರಂಭಿಸಲಾಗಿದ್ದು, ಸರಕಾರವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ರಾಜ್ಯದ ಗೃಹ, ಐಟಿ-ಬಿಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕಮಲಾಪುರ ಪಟ್ಟಣದಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾಸೇವಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಎಂದರೆ ಜನರಿಂದ, ಜನರಿಗಾಗಿ ಮತ್ತು ಜನರಿಗೋಸ್ಕರ ಇರುವ ವ್ಯವಸ್ಥೆ. ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಕಚೇರಿಗಳಿಗೆ ಅಲೆದಾಡುವ ಬದಲು ಸರಕಾರವೇ ಅವರ ಬಳಿಗೆ ತೆರಳಿ ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಹಿಂದೆ ಜನರು ಅರ್ಜಿ ಸಲ್ಲಿಸಿದ ಬಳಿಕ ಅದರ ಸ್ಥಿತಿ ಏನಾಯಿತು ಎಂಬುದನ್ನು ತಿಳಿದುಕೊಳ್ಳಲು ಕಚೇರಿಗಳಿಗೆ ಅಲೆದಾಡಬೇಕಾಗಿತ್ತು. ಆದರೆ ಪ್ರಜಾಸೇವಾ ಇಲಾಖೆಯ ಮೂಲಕ ಜನರಿಂದ ಸ್ವೀಕರಿಸುವ ಪ್ರತಿಯೊಂದು ಅರ್ಜಿಗೂ ನಿಗದಿತ ಅವಧಿಯೊಳಗೆ ಸ್ಪಂದನೆ ನೀಡಲಾಗುವುದು. ಅರ್ಜಿ ಪುರಸ್ಕೃತವಾಗಿದೆಯೇ, ತಿರಸ್ಕೃತವಾಗಿದೆಯೇ ಅಥವಾ ಯಾವ ಹಂತದಲ್ಲಿದೆ ಎಂಬುದರ ಕುರಿತು ಅರ್ಜಿದಾರರಿಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಅನ್ನ, ಅಕ್ಷರ, ಆರೋಗ್ಯ ಹಾಗೂ ಆವಿಷ್ಕಾರಕ್ಕೆ ಒತ್ತು ನೀಡುವ ಮೂಲಕ ಕಲಬುರಗಿ ಮಾತ್ರವಲ್ಲದೆ ಇಡೀ ಕರ್ನಾಟಕದ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದ ಅವರು, ಪ್ರತಿ ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟಕ್ಕೂ ಭೇಟಿ ನೀಡಿ ಜನರ ಅಹವಾಲುಗಳನ್ನು ಸ್ವೀಕರಿಸುವುದಾಗಿ ಹೇಳಿದರು. ಅಹವಾಲು ಸ್ವೀಕರಿಸುವುದಷ್ಟೇ ಅಲ್ಲದೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ರೈತರ ಸಾಲಮನ್ನಾಕ್ಕಾಗಿ ಕೇಂದ್ರಕ್ಕೆ ನಿಯೋಗ:
ಬರಗಾಲ ಘೋಷಣೆಗೆ ಕೇಂದ್ರ ಸರಕಾರ ನಿಗದಿಪಡಿಸಿರುವ ಮಾನದಂಡಗಳಿದ್ದು, ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ರೈತರ ಹಿತಾಸಕ್ತಿ ಕಾಪಾಡಲು ಪಕ್ಷಭೇದ ಮರೆತು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕೇಂದ್ರ ಸರ್ಕಾರ ಉದ್ಯಮಿಗಳ ಸುಮಾರು 10 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದೆ. ಆದರೆ ರೈತರ ಸಾಲಮನ್ನಾವೂ ಮಾಡಬೇಕು ಎಂದು ಕೇಂದ್ರಕ್ಕೆ ಆಗ್ರಹಿಸಿದ ಅವರು, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ನಿಯೋಗ ತೆರಳುವ ಅಗತ್ಯವಿದೆ ಎಂದು ಅವರು ಹೇಳಿದರು.
ಸರಕಾರ ಜನರ ಬಾಗಿಲಿಗೆ ಬಂದಿದೆ: ತಿಪ್ಪಣ್ಣಪ್ಪ ಕಮಕನೂರ
ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಬುದ್ಧ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳಿಗೆ ಅನುಗುಣವಾಗಿ ಸರಕಾರ ಪ್ರಜಾಸೇವಾ ಇಲಾಖೆಯನ್ನು ರೂಪಿಸಿದೆ. ಸರಕಾರವೇ ಜನರ ಮನೆ ಬಾಗಿಲಿಗೆ ಬಂದು ಅವರ ಸಂಕಷ್ಟಗಳನ್ನು ಆಲಿಸಿ ಪರಿಹರಿಸುವ ವ್ಯವಸ್ಥೆ ಇದಾಗಿದೆ ಎಂದರು.
ಕಾರ್ಯಕ್ರಮದ ಬಳಿಕ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಮಲಾಪುರ ಸೇರಿದಂತೆ ವಿವಿಧ ತಾಲೂಕು ಹಾಗೂ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಪಿಂಚಣಿ, ಆವಾಸ ಯೋಜನೆಗಳು ಸೇರಿದಂತೆ ವಿವಿಧ ಸರಕಾರಿ ಸೌಲಭ್ಯಗಳ ಹಲವು ಸಮಸ್ಯೆಗಳ ಕುರಿತು ಸಾರ್ವಜನಿಕರು ಸಚಿವರಿಗೆ ಮನವಿ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಹರವಾಳ, ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ್ ಪಾಟೀಲ್, ಕಾಡಾ ಅಧ್ಯಕ್ಷ ಅಬ್ದುಲ್ ರಶೀದ್, ಕುಡಾ ಅಧ್ಯಕ್ಷ ಮಝಾರ್ ಖಾನ್ ಆಲಂ, ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಕೆಕೆಆರ್‌ಟಿಸಿ ನಿರ್ದೇಶಕಿ ಬಿ.ಸುಶೀಲಾ, ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯದರ್ಶಿ ಸುಬೋಧ್ ಯಾದವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಸಂಕನೂರ, ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ಮಾಜಿ ಸಚಿವ ರೇವುನಾಯಕ ಬೆಳಮಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.