ಜ.12ರಂದು ಕಲಬುರಗಿ ಜಿಲ್ಲೆಗೆ ಸಿಎಂ ಭೇಟಿ: ಅಧಿಕಾರಿಗಳ ಜೊತೆ ಸಚಿವ ಪ್ರಿಯಾಂಕ್ ಖರ್ಗೆ ಪೂರ್ವಭಾವಿ ಸಭೆ
ಕಲಬುರಗಿ: ಜ.12 ರಂದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ "ಪ್ರಜಾ ಸೌಧ" ನಿರ್ಮಾಣಕ್ಕೆ ಅಡಿಗಲ್ಲು ಸೇರಿದಂತೆ ಯಡ್ರಾಮಿ ಮತ್ತು ಸೇಡಂ ಪ್ರತ್ಯೇಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭೆ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ, ಡಿ.ಸಿ.ಎಂ ಡಿ.ಕೆ.ಶಿವಕುಮಾರ ಅವರುಗಳು ಆಗಮಿಸುತ್ತಿದ್ದು, ಕಾರ್ಯಕ್ರಮ ಯಶಸ್ಸಿಗೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು.
ಶನಿವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಸೋಮವಾರ ಮೊದಲು ಯಡ್ರಾಮಿ ನಂತರ ಸೇಡಂನಲ್ಲಿ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಜಿಲ್ಲೆಯ ಸುಮಾರು 1,595 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ ಎಂದರು.
ಕಂದಾಯ ಸಚಿವ ಕೃಷ್ಣ ಬೈರೇಗೌಡ, ಶಿಕ್ಷಣ ಸಚಿವ ಎಸ್.ಮಧುಬಂಗಾರಪ್ಪ ಸೇರಿದಂತೆ ಪ್ರದೇಶದ ಸಚಿವರು, ಚುನಾಯಿತ ಜನಪ್ರತಿನಿಧಿಗಳು ಸಹ ಆಗಮಿಸಲಿರುವ ಹಿನ್ನೆಲೆಯಲ್ಲಿ ಗಣ್ಯರ ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಬೇಕು. ಅಧಿಕಾರಿಗಳಿಗೆ ನೀಡಲಾದ ಜವಾಬ್ದಾರಿಯನ್ನು ಅರಿತು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.
ಎರಡು ಕಾರ್ಯಕ್ರಮಕ್ಕೆ ಆಯಾ ತಾಲೂಕಿನ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನ ಅಗಮಿಸುವ ನಿರೀಕ್ಷೆ ಇರುವುದರಿಂದ ಬಸ್ ವ್ಯವಸ್ಥೆ ಮಾಡಬೇಕು ಎಂದು ಕೆ.ಕೆ.ಅರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ.ಸುಶೀಲಾ ಅವರಿಗೆ ನಿರ್ದೇಶನ ನೀಡಿದ ಸಚಿವರು, ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಸಮರ್ಪಕವಾಗಿ ಮಾಡಬೇಕು. ಜನಸಂದಣಿಯಾಗದಂತೆ ಸುಗಮ ಸಂಚಾರದ ನಿರ್ವಹಣೆ ಮಾಡಬೇಕು. ತುರ್ತು ಚಿಕಿತ್ಸೆಗೆ ಅಂಬುಲೆನ್ಸ್ ತೈನಾತಿಸಬೇಕು. ಎಲ್ಲೆಡೆ ಸೂಕ್ತ ಪೊಲೀಸ್ ಭದ್ರತೆ ನಿಯೋಜಿಸಬೇಕು. ಅಗತ್ಯವುದಲ್ಲಿ ಬೇರೆ ಜಿಲ್ಲೆಯಿಂದ ಭದ್ರತೆಗೆ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದರು.
ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ಮಹಿಳೆಯರು ಆಗಮಿಸುವುದರಿಂದ ಯಡ್ರಾಮಿ ಮತ್ತು ಸೇಡಂ ಎರಡು ಕಡೆ ಊಟದ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕು. ಜನಸ್ತೋಮಕ್ಕನುಗುಣವಾಗಿ ಊಟದ ಕೌಂಟರ್ ಹೆಚ್ಚಿಸಬೇಕು. ಯಾವುದೇ ಗೊಂದಲಕ್ಕೆ ಅವಕಾಶ ನೀಡಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.
ಸಭೆಯಲ್ಲಿ ಕರ್ನಾಟಕ ರೇಷ್ಮೆ ಉದ್ಯಮಗಳ ನಿಯಮಿತದ ಅಧ್ಯಕ್ಷರು ಹಾಗೂ ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ, ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ಎಂ.ಎಲ್.ಸಿ ಜಗದೇವ ಗುತ್ತೇದಾರ, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ಐ.ಜಿ.ಪಿ ಶಾಂತನು ಸಿನ್ಹಾ, ಕೆ.ಕೆ.ಆರ್.ಟಿ.ಸಿ. ಎಂ.ಡಿ ಡಾ.ಬಿ.ಸುಶೀಲಾ, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಅಯುಕ್ತರಾದ ಸಾಹಿತ್ಯ, ಪ್ರಭುರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.