ಕಲಬುರಗಿ ಜಿಲ್ಲೆಗೆ 375 ಕೋಟಿ ರೂ. ಗೂ ಅಧಿಕ ಬೆಳೆ ವಿಮೆ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಡಿಸಿ ಇಕ್ರಮ್ ಶರೀಫ್
ಕಲಬುರಗಿ, ನ. 25: ಪ್ರಸಕ್ತ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ಉಂಟಾಗಿ, ಬಿತ್ತನೆ ಮಾಡಿರುವ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿದೆ. ಇದರಿಂದ ಇಳುವರಿಯಲ್ಲಿ ಗಣನೀಯ ಪ್ರಮಾಣದ ಕುಸಿತ ಉಂಟಾಗಿದ್ದು, ರೈತರಿಗೆ ಆಗಿರುವ ಆರ್ಥಿಕ ನಷ್ಟವನ್ನು ತಗ್ಗಿಸುವ ಹಾಗೂ ಸಕಾಲದಲ್ಲಿ ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಗೆ 375 ಕೋಟಿ ರೂ. ಗೂ ಅಧಿಕ ಮೊತ್ತದ ಬೆಳೆ ವಿಮೆ ಪರಿಹಾರ ಅನುದಾನ ಮಂಜೂರು ಮಾಡುವಂತೆ ಸರ್ಕಾರಕ್ಕೆ ಸಮಗ್ರ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆ ಉಂಟಾಗಿ ಕೃಷಿ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಸರ್ಕಾರವು ಜಿಲ್ಲೆಯ ಎಲ್ಲ 11 ತಾಲ್ಲೂಕುಗಳನ್ನು ಈಗಾಗಲೇ ಅಧಿಕೃತವಾಗಿ ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿದೆ. ಜಿಲ್ಲೆಯ ಪ್ರಮುಖ ಬೆಳೆಗಳಾದ ಹೆಸರು, ಉದ್ದು, ಸೋಯಾಬೀನ್, ತೊಗರಿ, ಹತ್ತಿ ಸೇರಿದಂತೆ ಇತರೆ ಬೆಳೆಗಳಿಗೆ ಮಳೆ ಕೊರತೆಯಿಂದ ಉಂಟಾದ ಹಾನಿ ಹಾಗೂ ಬೆಳೆಗಳ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಗಣಿಸಿ, ಬೆಳೆ ವಿಮೆ ಯೋಜನೆಯಡಿ ರೈತರಿಗೆ ಪರಿಹಾರ ಕಲ್ಪಿಸಲು ಮಧ್ಯಂತರ ಬೆಳೆ ವಿಮೆ ಪರಿಹಾರದ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ವಿಮಾ ಸಂಸ್ಥೆಯಾದ ಇಂಡಸ್‌ಇಂಡ್ ಜನರಲ್ ಇನ್ಶೂರೆನ್ಸ್ ಕಂಪನಿಯೂ ಸಮ್ಮತಿ ಸೂಚಿಸಿದೆ ಎಂದು ತಿಳಿಸಿದ್ದಾರೆ.
ಮಧ್ಯಂತರ ಬೆಳೆ ವಿಮೆ ಪರಿಹಾರದ ಪ್ರಸ್ತಾವನೆಗೆ ಸರ್ಕಾರದಿಂದ ಅನುಮೋದನೆ ದೊರೆತು ಪರಿಹಾರ ಮಂಜೂರಾದಲ್ಲಿ, ರೈತರು ತಮ್ಮ ವಂತಿಕೆಯಾಗಿ ಪಾವತಿಸಿರುವ 67.82 ಕೋಟಿ ರೂ. ಪ್ರೀಮಿಯಂ ಮೊತ್ತಕ್ಕೆ ಪ್ರತಿಯಾಗಿ ಸುಮಾರು ಆರು ಪಟ್ಟು ಹೆಚ್ಚು, ಅಂದರೆ 375 ಕೋಟಿ ರೂ. ಗೂ ಅಧಿಕ ಮೊತ್ತದ ಮಧ್ಯಂತರ ಬೆಳೆ ವಿಮೆ ಪರಿಹಾರವನ್ನು ಜಿಲ್ಲೆಯ ಅರ್ಹ ರೈತರು ಪಡೆಯುವ ನಿರೀಕ್ಷೆಯಿದೆ. ಇದರಿಂದ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಗಣನೀಯ ಪ್ರಮಾಣದ ಆರ್ಥಿಕ ನೆರವು ದೊರೆಯಲಿದ್ದು, ಮುಂದಿನ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.
ಬೆಳೆ ವಿಮೆ ನೋಂದಣಿಯಲ್ಲಿ ಕಲಬುರಗಿ ಜಿಲ್ಲೆಗೆ ಪ್ರಥಮ ಸ್ಥಾನ :
ಮುಂಗಾರು ಹಂಗಾಮಿನಲ್ಲಿ ರೈತರ ಬೆಳೆಗಳಿಗೆ ಪ್ರಕೃತಿ ವಿಕೋಪ, ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇತರೆ ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ಆರ್ಥಿಕ ನಷ್ಟದಿಂದ ರಕ್ಷಣೆ ಒದಗಿಸುವ ಉದ್ದೇಶದಿಂದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ.
2026-27ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 4,52,609 ರೈತರು 5,35,820.48 ಹೆಕ್ಟೇರ್ ಪ್ರದೇಶಕ್ಕೆ ಬೆಳೆ ವಿಮೆ ನೋಂದಣಿ ಮಾಡಿಸಿ, 67.82 ಕೋಟಿ ರೂ. ಪ್ರೀಮಿಯಂ ಮೊತ್ತ ಪಾವತಿಸಿದ್ದಾರೆ. ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರಂತರ ಪ್ರಯತ್ನ ಹಾಗೂ ಜಾಗೃತಿಯಿಂದ ಇದು ಸಾಧ್ಯವಾಗಿದೆ. ರಾಜ್ಯದಲ್ಲಿಯೇ ಬೆಳೆ ವಿಮೆ ನೋಂದಣಿಯಲ್ಲಿ ಕಲಬುರಗಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.
ಹಿಂಗಾರು ಬೆಳೆ ವಿಮೆ ನೋಂದಣಿಗೆ ನ. 30 ಕೊನೆಯ ದಿನ :
ಪ್ರಸಕ್ತ 2026-27ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಬೆಳೆಯಲಾಗುವ ಕಡಲೆ, ಜೋಳ, ಗೋಧಿ, ಕುಸುಬೆ ಸೇರಿದಂತೆ ಇತರೆ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ನೋಂದಾಯಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ರೈತರು ಕೊನೆಯ ದಿನದವರೆಗೆ ಕಾಯದೆ ತಮ್ಮ ಹತ್ತಿರದ ಬ್ಯಾಂಕ್, ಗ್ರಾಮ ಒನ್ ಅಥವಾ ಸಿಎಸ್‌ಸಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು. ಬೆಳೆ ಸಾಲ ಹೊಂದಿರುವ ರೈತರು ತಾವು ಸಾಲ ಪಡೆದಿರುವ ಬ್ಯಾಂಕ್‌ಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಮನವಿ ಮಾಡಿದ್ದಾರೆ.