ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಜೇವರ್ಗಿಯಲ್ಲಿ ಪ್ರತಿಭಟನೆ : S I R ಪ್ರಕ್ರಿಯೆ ಸ್ಥಗಿತಕ್ಕೆ ಆಗ್ರಹ
ಜೇವರ್ಗಿ: ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಪಟ್ಟಣದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಲಾಯಿತು.
ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್‌ಗೂ ಮುನ್ನ ಇದ್ದ ಮತದಾರರ ಪಟ್ಟಿಯನ್ನು ಪುನರ್‌ಸ್ಥಾಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿಯ ಶವಯಾತ್ರೆಯನ್ನು ಅಂಬೇಡ್ಕರ್ ಭವನದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆಸಲಾಯಿತು. ಬಳಿಕ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಮುಖ್ಯ ಚುನಾವಣಾ ಆಯುಕ್ತರನ್ನು ಕೂಡಲೇ ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನಂತರ ಪ್ರತಿಭಟನಾಕಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಷ್ಟ್ರಪತಿಗಳಿಗೆ ಜೇವರ್ಗಿ ತಹಶೀಲ್ದಾರ್ ಅವರ ಮೂಲಕ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮಹೇಶ್ ಕುಮಾರ್ ರಾಠೋಡ್, ಬಾಬು ಪಾಟೀಲ, ಅಡ್ವಕೇಟ್ ಮೊಹಿದ್ದಿನ್ ಇನಾಮ್ದಾರ್, ಇಬ್ರಾಹಿಂ ಪಟೇಲ್ ಯಾಳವಾರ, ಸಿದ್ದರಾಮ ಕಟ್ಟಿ, ಸಿದ್ದು ಕೆರೂರ್, ರಾಜಾ ಪಟೇಲ್, ಅಜೀಜ್ ಪಟೇಲ್, ಇಬ್ರಾಹಿಂ ಪಟೇಲ್ ಜೇವರ್ಗಿ, ಭೀಮರಾಯ ನಗನೂರು, ಹಬೀಬ್ ಸಾಬ್ ಜಮಾದಾರ್, ಶರಿಹರಿ ಕರ್ಕೆಹಳಿ, ವಜೀರ್ ಪಟೇಲ್ ಸೇರಿದಂತೆ ಪ್ರಗತಿಪರ ಸಂಘಟನೆಗಳ ಮುಖಂಡರು, ಹೋರಾಟಗಾರರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.