ಚಿತ್ತಾಪುರ ತಾಲೂಕಿನ ಮೂವರು ಶಿಕ್ಷಕರಿಗೆ ರಾಜೀವ್ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ
ಚಿತ್ತಾಪುರ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಶಿಕ್ಷಕರ ಘಟಕದಿಂದ ನೀಡಲಾಗುವ *ಮಾಜಿ ಪ್ರಧಾನಿ ರಾಜೀವ್ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ*ಗೆ ಚಿತ್ತಾಪುರ ತಾಲೂಕಿನ ಮೂವರು ಶಿಕ್ಷಕರು ಭಾಜನರಾಗಿದ್ದಾರೆ.
ಪಟ್ಟಣದ ಶ್ರೀ ಗಂಗಾಪರಮೇಶ್ವರಿ ಪಿಯು ಕಾಲೇಜಿನ ಪ್ರಾಚಾರ್ಯ ಮುರಳಿಧರ ಎಂ. ಪಾಟೀಲ, ಯರಗಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಶಿವಪುತ್ರ ಹಾಗರಗಿ ಹಾಗೂ ಕರದಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕ ನರಸಪ್ಪ ಜಾನಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಭಾರತ್ ಜೋಡೋ ಸಭಾಂಗಣ (ಇಂದಿರಾ ಗಾಂಧಿ ಭವನ)ದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೂವರು ಶಿಕ್ಷಕರಿಗೆ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹಾಗೂ ಕೆಪಿಸಿಸಿ ಶಿಕ್ಷಕರ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ್ ತಿಳಿಸಿದ್ದಾರೆ.
ಚಿತ್ತಾಪುರ ತಾಲೂಕಿನ ಮೂವರು ಶಿಕ್ಷಕರು ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರಾಜೇಂದ್ರ ಪ್ರಸಾದ್ ಹರ್ಷ ವ್ಯಕ್ತಪಡಿಸಿದ್ದಾರೆ.