ಕಲಬುರಗಿ: ಆಳಂದ ಕಾಲೇಜು ಆವರಣದಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ನೂತನ ಕಟ್ಟಡ ಹಾಗೂ 5.26 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡವನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಶನಿವಾರ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.

2017-18ನೇ ಸಾಲಿನ ತಾಂತ್ರಿಕ ಶಿಕ್ಷಣ ಯೋಜನೆಯಡಿ 8 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಟ್ಟಡ ನಿರ್ಮಿಸಲಾಗಿದೆ. ಕಾಲೇಜು ಶಿಕ್ಷಣ ಇಲಾಖೆಯ 2023-24ನೇ ಸಾಲಿನ ಕೆಕೆಆರ್‌ಡಿಬಿ (ಮ್ಯಾಕ್ರೋ/ಮೈಕ್ರೋ) ಯೋಜನೆಯಡಿ 5.26 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ನಿರ್ಮಿಸಲಾಗಿದೆ.

ನಂತರ ಮಾತನಾಡಿದ ಸಚಿವ ಬಸವರಾಜ ರಾಯರೆಡ್ಡಿ, ರಾಜ್ಯದ ಒಟ್ಟು 4.48 ಲಕ್ಷ ಕೋಟಿ ರೂ. ಮೊತ್ತದ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 55 ಸಾವಿರ ಕೋಟಿ ರೂ. (ಶೇ.11.6) ಅನುದಾನ ಮೀಸಲಿಡಲಾಗಿದೆ. ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ರಾಜ್ಯದ ವಿವಿಧ ಕಾಲೇಜುಗಳಲ್ಲಿ ಖಾಲಿ ಇರುವ 1,000 ಬೋಧಕ ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 1,000 ಪ್ರಾಧ್ಯಾಪಕ ಹುದ್ದೆಗಳು ಹಾಗೂ 320 ಪ್ರಾಂಶುಪಾಲರ ಹುದ್ದೆಗಳನ್ನು ಶೀಘ್ರದಲ್ಲೇ ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಲಾಗುವುದು ಎಂದರು.

ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಖಾಲಿ ಇರುವ 800 ಹುದ್ದೆಗಳು ಸೇರಿದಂತೆ ಒಟ್ಟು 2,320 ಹುದ್ದೆಗಳನ್ನು ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ನೇರವಾಗಿ ಮೆರಿಟ್ ಆಧಾರದ ಮೇಲೆ ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಪ್ರತಿವರ್ಷ 5,000 ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಸಂವಿಧಾನದ 371(ಜೆ) ವಿಧಿಯ ಅನುಷ್ಠಾನದಿಂದ ಈ ಭಾಗದ ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಮೀಸಲಾತಿ ದೊರೆಯುತ್ತಿದೆ. ಪಿಡಬ್ಲ್ಯುಡಿ ಅಪೆಂಡಿಕ್ಸ್ ಅಡಿಯಲ್ಲಿ 50 ಕೋಟಿ ರೂ., ಎಚ್‌ಎಚ್‌ಡಿಪಿ ಅಡಿಯಲ್ಲಿ 50 ಕೋಟಿ ರೂ. ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ರಸ್ತೆ ಮತ್ತು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗುತ್ತಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಕಲಬುರಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಆಳಂದ ಪಟ್ಟಣದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಿರುವ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು.

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ ಮಾತನಾಡಿ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ನೇತೃತ್ವದಲ್ಲಿ ಆಳಂದ ತಾಲೂಕಿನಲ್ಲಿ ಎರಡು ಕಾಲೇಜುಗಳ ನೂತನ ಕಟ್ಟಡಗಳನ್ನು ಉದ್ಘಾಟಿಸಲಾಗಿದೆ. ಹಿಂದಿನ ಅವಧಿಯಲ್ಲಿ ಮಂಜೂರಾಗಿದ್ದ ಕಾಲೇಜುಗಳಿಗೆ ಗುಣಮಟ್ಟದ ಕಟ್ಟಡಗಳನ್ನು ನಿರ್ಮಿಸಿ ಇದೀಗ ಲೋಕಾರ್ಪಣೆ ಮಾಡಲಾಗಿದೆ ಎಂದರು.

ಬೀದರ್ ಲೋಕಸಭಾ ಕ್ಷೇತ್ರದ ಸಂಸದ ಸಾಗರ್ ಈಶ್ವರ ಖಂಡ್ರೆ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಸುಧಾರಣೆಗಳಾಗಬೇಕು. ಕಾಲೇಜುಗಳ ನಿರ್ಮಾಣದ ಜೊತೆಗೆ ಗುಣಮಟ್ಟದ ಬೋಧಕ ಸಿಬ್ಬಂದಿ ನೇಮಕಾತಿಗೂ ಆದ್ಯತೆ ನೀಡಬೇಕು. ಬರಗಾಲದಿಂದ ಸಂಕಷ್ಟಕ್ಕೀಡಾದ ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸೂಕ್ತ ಪರಿಹಾರ ಹಾಗೂ ಬೆಳೆ ವಿಮೆ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ರಾಜ್ಯ ರಾಜಕಾರಣದಲ್ಲಿ ಎಂಟು ಬಾರಿ ಶಾಸಕರಾಗಿ, ಸಂಸದರು ಹಾಗೂ ಸಚಿವರಾಗಿ ಸೇವೆ ಸಲ್ಲಿಸಿರುವ ಬಸವರಾಜ ರಾಯರೆಡ್ಡಿ ಅವರ ಆಡಳಿತಾತ್ಮಕ ಅನುಭವ ಮತ್ತು ಕೊಡುಗೆ ಅಪಾರವಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಬಜೆಟ್‌ಗಳಲ್ಲಿ ರಾಯರೆಡ್ಡಿ ಅವರ ಪಾತ್ರ ಮಹತ್ವದ್ದಾಗಿದೆ ಎಂದರು.

ಆಳಂದ ಕ್ಷೇತ್ರದ ಶಾಸಕ ಬಿ.ಆರ್. ಪಾಟೀಲ ಅವರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚಿನ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಶಿಕ್ಷಣದ ಕನಸನ್ನು ನನಸು ಮಾಡಲು ಬಿ.ಆರ್. ಪಾಟೀಲ ಹಾಗೂ ಪ್ರಿಯಾಂಕ್ ಖರ್ಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಷ್ಟದ ಸಂದರ್ಭದಲ್ಲಿಯೂ 650 ಕೋಟಿ ರೂ. ಗೂ ಅಧಿಕ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿರುವ ಬಿ.ಆರ್. ಪಾಟೀಲ ಅವರ ಕಾರ್ಯವನ್ನು ಸ್ಮರಿಸಿದರು.

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಬುರೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪಂಡಿತ ಬೆಳಮಗಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಡಾ. ವಿ. ಅಶೋಕ್, ತಹಶೀಲ್ದಾರ್ ಅಣ್ಣಾರಾವ ಪಾಟೀಲ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಪ್ರೇಮಿಳಾ ಅಂಬರಾಯ, ಸಿದ್ಧರಾಮ ಪ್ಯಾಟಿ, ಗುರುಶರಣ ಪಾಟೀಲ, ಸೈಯದ್ ಮಜರ್ ಹುಸೇನ್, ಸುಭಾಷ್ ಮುರುಡ, ಸಲಾಂ ಸಗರಿ, ನಾಗೇಂದ್ರಪ್ಪ ತಂಬೆ, ರಾಜಶೇಖರ ಪಾಟೀಲ, ಸುನೀಲಗೌಡ ಪಾಟೀಲ, ಬಸವರಾಜ ಪವಾಡಶೆಟ್ಟಿ, ದಶವಂತ ಸೇರಿದಂತೆ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor