ಕಲಬುರಗಿ: ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಹಗರಣಗಳು ಮತ್ತು ಬೆಲೆ ಏರಿಕೆಯೇ ಗ್ಯಾರಂಟಿಗಳಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ನಾಯಕ ಸಿ.ಟಿ. ರವಿ ಟೀಕಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನನ ಪ್ರಮಾಣಪತ್ರದಿಂದ ಮರಣ ಪ್ರಮಾಣಪತ್ರದವರೆಗೆ ಎಲ್ಲದರ ಮೇಲೂ ತೆರಿಗೆ ವಿಧಿಸುವ ಮೂಲಕ ಜನಸಾಮಾನ್ಯರ ಬದುಕನ್ನು ದುಸ್ತರಗೊಳಿಸಲಾಗಿದೆ ಎಂದು ಆರೋಪಿಸಿದರು.

ಮುಡಾ, ವಾಲ್ಮೀಕಿ ನಿಗಮ ಹಾಗೂ ಕೆಪಿಎಸ್‌ಸಿ ಸೇರಿದಂತೆ ವಿವಿಧ ವಿವಾದಗಳು ಮತ್ತು ಹಗರಣಗಳ ಆರೋಪಗಳ ಕುರಿತು ಜನರಿಗೆ ಉತ್ತರ ನೀಡುವ ಬದಲು ವಿಷಯಾಂತರ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.

ಜನರ ಬದುಕಿನ ಸಮಸ್ಯೆಗಳು ಚರ್ಚೆಯಾಗಬಾರದು ಎಂಬ ಉದ್ದೇಶದಿಂದ ಸದ್ದು ಮಾಡುವ ಸುದ್ದಿಗಳನ್ನು ಮುನ್ನೆಲೆಗೆ ತರಲಾಗುತ್ತಿದೆ. ಸ್ಟಿಂಗ್ ಆಪರೇಷನ್ ವಿಚಾರದಲ್ಲಿಯೂ ನಿಷ್ಪಕ್ಷಪಾತ ತನಿಖೆ ನಡೆಯಲಿ. ಅದರ ನಿರ್ದೇಶಕರು, ನಿರ್ಮಾಪಕರು ಮತ್ತು ಪಾತ್ರಧಾರಿಗಳು ಕಾಂಗ್ರೆಸ್‌ನವರೇ ಎಂಬುದು ತನಿಖೆಯಿಂದ ಬಹಿರಂಗವಾಗಲಿ ಎಂದು ಹೇಳಿದರು.

ಮುಖ್ಯಮಂತ್ರಿಗಳು ಸ್ಟಿಂಗ್ ಆಪರೇಷನ್ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ. ಆದರೆ ಪ್ರಾಮಾಣಿಕವಾಗಿ ನಡೆದುಕೊಳ್ಳುವಂತೆ ತಮ್ಮ ಸಚಿವರು ಮತ್ತು ನಾಯಕರಿಗೆ ಏಕೆ ಹೇಳುತ್ತಿಲ್ಲ ಎಂದು ಪ್ರಶ್ನಿಸಿದರು. ಈ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸುವುದಾದರೆ ನಡೆಸಲಿ, ಸತ್ಯ ಹೊರಬರಲಿ ಎಂದರು.

ಮತಗಳ್ಳತನದ ಆರೋಪಕ್ಕೆ ದಾಖಲೆ ನೀಡಲಿ :

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರವಾಗಿ ಮಾತನಾಡಿದ ಅವರು, ಮತಗಳ್ಳತನ ನಡೆದಿದೆ ಎಂಬ ಆರೋಪಗಳನ್ನು ಕಾಂಗ್ರೆಸ್ ನಾಯಕರು ದಾಖಲೆಗಳೊಂದಿಗೆ ಸಾಬೀತುಪಡಿಸಬೇಕು ಎಂದು ಸವಾಲು ಹಾಕಿದರು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಥವಾ ಹೆಸರು ತೆಗೆದುಹಾಕುವ ಪ್ರಕ್ರಿಯೆ ಚುನಾವಣಾ ಆಯೋಗದ ನಿಯಮಗಳ ಪ್ರಕಾರ ನಡೆಯುತ್ತದೆ. ಅರ್ಜಿ ಸಲ್ಲಿಸುವುದು ಮತ್ತು ಆಕ್ಷೇಪಣೆ ದಾಖಲಿಸುವುದು ಪ್ರಕ್ರಿಯೆಯ ಭಾಗವಾಗಿದ್ದು, ಅವುಗಳ ಪರಿಶೀಲನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವುದು ಸಂಬಂಧಪಟ್ಟ ಚುನಾವಣಾಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.

ನಕಲಿ ಮತದಾರರನ್ನು ಸೇರಿಸಲಾಗುತ್ತಿದೆ ಎಂದು ಒಂದು ಕಡೆ ಆರೋಪಿಸುವವರು, ಮತ್ತೊಂದೆಡೆ ಮತದಾರರ ಹೆಸರುಗಳನ್ನು ಅಳಿಸಲಾಗುತ್ತಿದೆ ಎಂದು ಹೇಳುತ್ತಿರುವುದು ಪರಸ್ಪರ ವಿರೋಧಾಭಾಸದ ಹೇಳಿಕೆಗಳಾಗಿವೆ ಎಂದು ಟೀಕಿಸಿದರು. ಕಲಬುರಗಿಯಲ್ಲಿ ಮತಗಳ್ಳತನ ನಡೆದಿದೆ ಎನ್ನುವುದಕ್ಕೆ ಪುರಾವೆಗಳಿದ್ದರೆ ಬಹಿರಂಗಪಡಿಸಲಿ ಎಂದು ಹೇಳಿದರು.

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸುವವರು, ಅದೇ ಮತಗಳಿಂದ ಗೆದ್ದು ಬಂದಿರುವ ಅವರುಗಳು ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಹೇಳಿದರು.

ರಾಜ್ಯದಲ್ಲಿ ರೈತರು, ಶಿಕ್ಷಕರು, ಅತಿಥಿ ಉಪನ್ಯಾಸಕರು ಹಾಗೂ ಪಿಂಚಣಿದಾರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತೊಗರಿ, ಜೋಳ ಮತ್ತು ರಾಗಿ ಖರೀದಿಯ ಬಾಕಿ ಹಣ ಪಾವತಿಯಾಗಿಲ್ಲ. ಹಾಲು ಉತ್ಪಾದಕರಿಗೆ ನೀಡಬೇಕಾದ ಪ್ರೋತ್ಸಾಹಧನದ ಸುಮಾರು 900 ಕೋಟಿ ರೂ. ಬಾಕಿ ಉಳಿದಿದೆ. ಅತಿಥಿ ನೌಕರರಿಗೆ ಮೂರ್ನಾಲ್ಕು ತಿಂಗಳಿಂದ ಗೌರವಧನ ಪಾವತಿಯಾಗಿಲ್ಲ ಎಂದು ಆರೋಪಿಸಿದರು.

ಸುಮಾರು 23 ಲಕ್ಷ ಜನರ ಪಿಂಚಣಿ ಪಾವತಿಯಲ್ಲಿ ವಿಳಂಬವಾಗಿರುವ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ರಾಜ್ಯದ ಹಲವು ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ರೈತರು ಸಂಕಷ್ಟದಲ್ಲಿರುವಾಗ ಅವರಿಗೆ ನೆರವು ನೀಡಲು ಸರ್ಕಾರದ ಬಳಿ ಯಾವ ಯೋಜನೆ ಇದೆ ಎಂಬುದನ್ನು ಚರ್ಚಿಸಬೇಕು. ಆದರೆ ಸಂಪುಟ ಸಭೆಗಳಲ್ಲಿ ಜನರ ಬದುಕು, ರಾಜ್ಯದ ಭವಿಷ್ಯ ಮತ್ತು ಕರ್ನಾಟಕದ ಅಭಿವೃದ್ಧಿಯ ಕುರಿತು ಗಂಭೀರ ಚರ್ಚೆಗಳು ನಡೆಯುತ್ತಿಲ್ಲ ಎಂದು ಟೀಕಿಸಿದರು.

ಹಾಲಿನ ದರವನ್ನು ಮತ್ತೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯುತ್ ಪರಿವರ್ತಕ (ಟಿಸಿ) ಪಡೆಯಲು ರೈತರು ಪಾವತಿಸಬೇಕಾದ ಮೊತ್ತ ಹೆಚ್ಚಾಗಿದೆ ಎಂಬ ದೂರುಗಳೂ ಕೇಳಿಬರುತ್ತಿವೆ. ರಾಜ್ಯದ ಖಜಾನೆ ಖಾಲಿಯಾಗಿದೆ ಎಂದು ಹೇಳಲಾಗುತ್ತಿರುವ ಸಂದರ್ಭದಲ್ಲಿ ರೈತರು ಬೀದಿಗಿಳಿದರೆ ಸರ್ಕಾರ ಅವರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಲಿದೆ ಎಂದು ಪ್ರಶ್ನಿಸಿದರು.

ಕಬ್ಬು ಬೆಳೆಗಾರರ ಹಿತಾಸಕ್ತಿಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನೀತಿಗಳನ್ನು ಸಮಗ್ರವಾಗಿ ಪರಿಶೀಲಿಸಬೇಕು. ಹಿಂದಿನ ಅವಧಿಗೆ ಹೋಲಿಸಿದರೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಎಷ್ಟಿದೆ ಎಂಬುದನ್ನು ಗಮನಿಸಬೇಕು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಹಿತ ಕಾಪಾಡಿದ್ದು, ಕರ್ನಾಟಕವನ್ನು ಕಡೆಗಣಿಸಿಲ್ಲ ಎಂದು ಪ್ರತಿಪಾದಿಸಿದರು.

ಶಶೀಲ್ ನಮೋಶಿ ಅವರು ಕಳೆದ ನಾಲ್ಕು ಅವಧಿಗಳಿಂದ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಹಾಗೂ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿಗೆ ನಿರಂತರವಾಗಿ ಧ್ವನಿ ಎತ್ತಿದ್ದಾರೆ. ಆದ್ದರಿಂದ ಶಿಕ್ಷಕರು ಮತ್ತೊಮ್ಮೆ ಅವರನ್ನು ಗೆಲ್ಲಿಸಬೇಕು. ವಿದ್ಯಾವಂತ ಹಾಗೂ ಪ್ರಬುದ್ಧ ಮತದಾರರು ಪ್ರಥಮ ಪ್ರಾಶಸ್ತ್ಯದ ಮತ ನೀಡಿ, ರಾಜ್ಯ ಸರ್ಕಾರಕ್ಕೆ ರಾಜಕೀಯ ಸಂದೇಶ ರವಾನಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ, ಮಾಜಿ ಸಂಸದ ಉಮೇಶ್ ಜಾಧವ್, ಬಿ.ಜಿ. ಪಾಟೀಲ್, ಬಸವರಾಜ ಮತ್ತಿಮಡು, ಅವಿನಾಶ್ ಜಾಧವ್, ಚಂದು ಪಾಟೀಲ್, ಅಶೋಕ್ ಬಗಲಿ, ಶರಣಪ್ಪ ತಳವಾರ, ನಿತಿನ್ ಗುತ್ತೇದಾರ, ಅಂಬರಾಯ ಅಷ್ಟಗಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor