Sedam | ಗಣೇಶ ಉತ್ಸವ ನಿಮಿತ್ತ ರಕ್ತದಾನ ಶಿಬಿರ : 40 ಯುವಕರಿಂದ ರಕ್ತದಾನ
ಸೇಡಂ: ತಾಲೂಕಿನ ಇಟ್ಕಲ್ ಗ್ರಾಮದ ರಾಷ್ಟ್ರೀಯ ಗ್ರಾಮೀಣ ಯುವಕ ಮಂಡಳಿಯ ವತಿಯಿಂದ ಗೌರಿ-ಗಣೇಶ ಉತ್ಸವದ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ ಒಟ್ಟು 40 ಮಂದಿ ಯುವಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.
ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರ ಹಾಗೂ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಶಿಬಿರವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜೀವ್ ಪಾಟೀಲ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಹಬ್ಬ-ಹರಿದಿನಗಳ ಸಂದರ್ಭದಲ್ಲಿ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ. ಅಪಘಾತ, ತುರ್ತು ಚಿಕಿತ್ಸೆ ಹಾಗೂ ಹೆರಿಗೆಯಂತಹ ಸಂದರ್ಭಗಳಲ್ಲಿ ರಕ್ತದ ಅಗತ್ಯತೆ ಹೆಚ್ಚಿರುತ್ತದೆ. ಯುವಜನತೆ ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವ ಉಳಿಸಲು ಮುಂದಾಗಬೇಕು ಎಂದು ಕರೆ ನೀಡಿದರು.
ಇಟ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ದೇವಿಕಾ ಮಾತನಾಡಿ, ರಕ್ತದಾನ ಮಾಡುವುದರಿಂದ ದಾನಿಗಳ ಆರೋಗ್ಯಕ್ಕೂ ಉತ್ತಮ ಪ್ರಯೋಜನಗಳಿವೆ. ಯಾವುದೇ ಭಯವಿಲ್ಲದೆ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ರಕ್ತದಾನ ಮಾಡಬಹುದು ಎಂದು ತಿಳಿಸಿದರು.
ಶಿಬಿರದಲ್ಲಿ ಜಿಮ್ಸ್ ರಕ್ತ ನಿಧಿ ಕೇಂದ್ರದ ವೈದ್ಯಕೀಯ ಸಿಬ್ಬಂದಿ, ರಾಷ್ಟ್ರೀಯ ಗ್ರಾಮೀಣ ಯುವಕ ಮಂಡಳಿಯ ಪದಾಧಿಕಾರಿಗಳು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು. ರಕ್ತದಾನ ಮಾಡಿದ ಎಲ್ಲ ಯುವಕರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.