ಸೇಡಂ: ಸರ್ಕಾರದ ಜನಪರ ಯೋಜನೆಗಳು ಹಾಗೂ ಆಡಳಿತವನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಸೇಡಂ ತಾಲೂಕಿನ ಆಡಕಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ಪ್ರಜಾಸೇವೆ’ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಆಡಕಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ತಹಸೀಲ್ದಾರ್ ಶ್ರೀಯಾಂಕ ಧನಶ್ರೀ, ಸಾರ್ವಜನಿಕರಿಂದ ಸ್ವೀಕರಿಸುವ ಪ್ರತಿಯೊಂದು ಅಹವಾಲನ್ನು ಗಂಭೀರವಾಗಿ ಪರಿಗಣಿಸಿ ಸಾಧ್ಯವಾದಷ್ಟು ಬೇಗ ವಿಲೇವಾರಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಾರ್ವಜನಿಕರು ಸಲ್ಲಿಸುವ ವಿವಿಧ ಇಲಾಖೆಗಳ ಕುಂದುಕೊರತೆ ಹಾಗೂ ಮನವಿ ಪತ್ರಗಳನ್ನು ಪರಿಶೀಲಿಸಿ, ಸ್ಥಳದಲ್ಲೇ ಪರಿಹರಿಸಬಹುದಾದ ಸಮಸ್ಯೆಗಳನ್ನು ತಕ್ಷಣ ಇತ್ಯರ್ಥಪಡಿಸಲಾಗುವುದು. ಸ್ಥಳ ಪರಿಶೀಲನೆ ಅಥವಾ ವರದಿ ಅಗತ್ಯವಿರುವ ಅರ್ಜಿಗಳನ್ನು ಆದ್ಯತೆಯ ಮೇರೆಗೆ ಶೀಘ್ರವಾಗಿ ವಿಲೇವಾರಿ ಮಾಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ, ಆಹಾರ ಮತ್ತು ನಾಗರಿಕ ಸರಬರಾಜು, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಮಾಹಿತಿ ಮಳಿಗೆಗಳನ್ನು ತೆರೆಯಲಾಗಿತ್ತು. ಗ್ರಾಮಸ್ಥರು ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.

ಕೆರೆ-ಕಾಲುವೆ ಹೂಳೆತ್ತುವುದು, ಆಸ್ಪತ್ರೆ ನಿರ್ಮಾಣ, ನರೇಗಾ ಯೋಜನೆಯಡಿ ಉದ್ಯೋಗ, ಕುಡಿಯುವ ನೀರು, ಒಳಚರಂಡಿ ಹಾಗೂ ಸ್ವಚ್ಛತೆ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ 40ಕ್ಕೂ ಹೆಚ್ಚು ಅರ್ಜಿಗಳನ್ನು ಗ್ರಾಮಸ್ಥರು ಸಲ್ಲಿಸಿದರು.

ಜೆಜೆಎಂ ಕಾಮಗಾರಿ ಸರಿಪಡಿಸಲು ಒತ್ತಾಯ :

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮುಕ್ರಂಖಾನ್ ಮಾತನಾಡಿ, ‘ಪ್ರಜಾಸೇವೆ’ ಕಾರ್ಯಕ್ರಮದ ಕುರಿತು ಹೋಬಳಿ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೂ ವ್ಯಾಪಕ ಪ್ರಚಾರ ನೀಡಬೇಕಿತ್ತು ಎಂದರು. ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಯಿಂದ ಹಲವು ರಸ್ತೆಗಳು ಹಾಳಾಗಿದ್ದು, ಸಮರ್ಪಕ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ, ಹಾಳಾದ ರಸ್ತೆಗಳನ್ನು ದುರಸ್ತಿಪಡಿಸುವಂತೆ ಒತ್ತಾಯಿಸಿದರು.

ಇದಕ್ಕೆ ಸ್ಪಂದಿಸಿದ ತಹಸೀಲ್ದಾರ್ ಶ್ರೀಯಾಂಕ ಧನಶ್ರೀ, ಜೆಜೆಎಂ ಕಾಮಗಾರಿಯಿಂದ ಉಂಟಾಗಿರುವ ಸಮಸ್ಯೆಗಳನ್ನು ಮುಂದಿನ ಎರಡು ವಾರಗಳೊಳಗೆ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಇಒ ಸೈಯದ್‌ ಪಟೇಲ್, ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಹುಜರಾತಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಎಇಇ ವಿಶ್ವನಾಥ್, ಭೂ ದಾಖಲೆಗಳ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮೀ ಪಾಟೀಲ, ಸಿಡಿಪಿಒ ಅನುರಾಧ ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಡಾ. ಶೃತಿ, ಅಬಕಾರಿ ಇಲಾಖೆಯ ಓಂಪ್ರಕಾಶ್ ಮಠಪತಿ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದು, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor