ಕಲಬುರಗಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕಲಬುರಗಿ ಜಿಲ್ಲಾ ಸಮಿತಿಯ ವತಿಯಿಂದ ನಗರದ ಜಗತ್ ವೃತ್ತದಲ್ಲಿ ತ್ರಿವರ್ಣ ಧ್ವಜವನ್ನು ಎತ್ತರಿಸಿ ಗೌರವಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸೌಹಾರ್ದ ಬೆಂಬಲ ಸೂಚಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಇಮಾಮ್ ಸಾಬ್ ನದಾಫ್, ದೇಶದ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಹೊರಟಿರುವ ಕೇಂದ್ರ ಸರ್ಕಾರ ಅಧಿಕಾರದಲ್ಲಿ ಮುಂದುವರಿಯಬಾರದು. ಎಸ್‌ಐಆರ್ ಪ್ರಕ್ರಿಯೆಯು ಸಂವಿಧಾನದ ಮೇಲಿನ ದಾಳಿಯಾಗಿದೆ ಎಂದು ಆರೋಪಿಸಿದರು.

ದೇಶದಲ್ಲಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುವ ಉದ್ದೇಶದಿಂದ ಬಿಜೆಪಿ ಫಾರಂ-7 ಅನ್ನು ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪಗಳು ತೀವ್ರ ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕಿದೆ. ಆ ಹಕ್ಕನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಭಾರತವು ಬಹುಸಾಂಸ್ಕೃತಿಕ ಪರಂಪರೆ ಹಾಗೂ ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ವಿವಿಧ ಧರ್ಮ, ಭಾಷೆ, ಸಂಸ್ಕೃತಿ ಮತ್ತು ಸಮುದಾಯಗಳ ಜನರು ಸಹಬಾಳ್ವೆಯಿಂದ ಬದುಕುತ್ತಿರುವ ಭಾರತದ ಬಹುತ್ವವನ್ನು ವಿದ್ಯಾರ್ಥಿಗಳು ಕಾಪಾಡಬೇಕು. ಸಂವಿಧಾನಬದ್ಧ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ವಿದ್ಯಾರ್ಥಿ ಸಮುದಾಯ ಸದಾ ಸಿದ್ಧವಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಎಫ್‌ಐ ಜಿಲ್ಲಾ ಉಪಾಧ್ಯಕ್ಷರಾದ ತಾಯಣ್ಣ, ಪ್ರದೀಪ್, ಮಂಜು ಆಜಾದಪುರ, ಜಿಲ್ಲಾ ಸಮಿತಿ ಸದಸ್ಯರಾದ ಪೂಜಾ, ಅಕ್ಷರ, ದಿಲ್ಶಾದ್, ಅನೀತಾ, ಕಲಬುರಗಿ ತಾಲೂಕು ಕಾರ್ಯದರ್ಶಿ ಬೃಂದಾ ಧನ್ನಿ, ಧನರಾಜ್, ಕೃಷ್ಣ, ಸುಧಾ, ರಾಧಿಕಾ, ನಿಖಿತಾ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor