ಕಲಬುರಗಿಯಲ್ಲಿ ವಿಶೇಷ ಕಾರ್ಯಾಚರಣೆ: 10 ಬಾಲ ಕಾರ್ಮಿಕರ ರಕ್ಷಣೆ
ಹೋಟೆಲ್, ಗ್ಯಾರೇಜ್, ಚಿಕನ್ ಸೆಂಟರ್ಗಳಲ್ಲಿ ಜಂಟಿ ದಾಳಿ; ಮಾಲಕರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ
ಕಲಬುರಗಿ: ಕಾರ್ಮಿಕ ಆಯುಕ್ತರು ಹಾಗೂ ಪೊಲೀಸ್ ಇಲಾಖೆಯ ನಿರ್ದೇಶನದ ಮೇರೆಗೆ ಬಾಲ ಮತ್ತು ಕಿಶೋರ ಕಾರ್ಮಿಕರ ಪತ್ತೆ ಹಾಗೂ ರಕ್ಷಣೆಗಾಗಿ ಕಲಬುರಗಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು.
ಜಿಲ್ಲೆಯ 11 ತಾಲೂಕುಗಳಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಡಾನ್ ಬಾಸ್ಕೋ, ಮಾರ್ಗದರ್ಶಿ ಸಂಸ್ಥೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ವಿವಿಧ ವಾಣಿಜ್ಯ ಸ್ಥಳಗಳಲ್ಲಿ ಕೆಲಸ ಮಾಡುತ್ತಿದ್ದ 10 ಬಾಲ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಲಾಯಿತು.
ಹೋಟೆಲ್, ಗ್ಯಾರೇಜ್, ಚಿಕನ್ ಸೆಂಟರ್ ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳಲ್ಲಿ ತಪಾಸಣೆ ನಡೆಸಿ ಮಕ್ಕಳನ್ನು ರಕ್ಷಿಸಿದ ಅಧಿಕಾರಿಗಳು, ಬಳಿಕ ಅವರನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿದರು. ತಾತ್ಕಾಲಿಕವಾಗಿ ಬಾಲಕರ ಬಾಲಮಂದಿರದಲ್ಲಿ ಪುನರ್ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.
ರಕ್ಷಿಸಲಾದ ಮಕ್ಕಳ ವಯಸ್ಸು ಹಾಗೂ ಇತರ ಅಗತ್ಯ ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದು, ಮಕ್ಕಳನ್ನು ಕಾನೂನುಬಾಹಿರವಾಗಿ ಕೆಲಸಕ್ಕೆ ನೇಮಿಸಿಕೊಂಡಿರುವುದು ದೃಢಪಟ್ಟರೆ ಸಂಬಂಧಪಟ್ಟ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.