ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಮತದಾನಕ್ಕೆ ಆದ್ಯತೆ: ಝಹೀರಾ ನಸೀಮ್
ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಕಲ ಸಿದ್ಧತೆ
ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್ ತಿಳಿಸಿದರು.
ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ ಮಾತನಾಡಿದ ಅವರು, ಕ್ಷೇತ್ರದ ಎಲ್ಲ ತಾಲೂಕುಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೊಳಿಸುವ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಚುನಾವಣೆಗೆ ಸಂಬಂಧಿಸಿದ ದೂರುಗಳನ್ನು ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ 08472-200255ಕ್ಕೆ ಕರೆ ಮಾಡಿ ಸಲ್ಲಿಸಬಹುದು ಎಂದು ಹೇಳಿದರು.
ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ಅಕ್ಟೋಬರ್ 23ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಶುಕ್ರವಾರ ಕೊನೆಯ ದಿನವಾಗಿದ್ದು, ಪಕ್ಷೇತರ ಅಭ್ಯರ್ಥಿ ನಬಿರಸೂಲ್ ದಸ್ತಗೀರಸಾಬ್ ಜಕಾತಿ ಅವರು ನಾಮಪತ್ರ ಹಿಂಪಡೆದಿದ್ದಾರೆ. ಹೀಗಾಗಿ ಅಂತಿಮವಾಗಿ 13 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ ಎಂದು ತಿಳಿಸಿದರು.
34,784 ಮತದಾರರು, 144 ಮತಗಟ್ಟೆಗಳು:
ಕ್ಷೇತ್ರದಲ್ಲಿ ಒಟ್ಟು 34,784 ಮತದಾರರು ನೋಂದಣಿಯಾಗಿದ್ದು, ಇವರಲ್ಲಿ 20,040 ಪುರುಷರು ಹಾಗೂ 14,744 ಮಹಿಳೆಯರಿದ್ದಾರೆ. ಬಳ್ಳಾರಿಯ ಒಂದು ಹೆಚ್ಚುವರಿ ಮತಗಟ್ಟೆ ಸೇರಿದಂತೆ ಒಟ್ಟು 144 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತಗಟ್ಟೆ ಏಜೆಂಟರ ನೇಮಕಾತಿಗೆ ಸಂಬಂಧಿಸಿದ ವಿವರಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕು ಎಂದು ಅಭ್ಯರ್ಥಿಗಳಿಗೆ ಸೂಚಿಸಿದರು.
ಚುನಾವಣಾ ಪ್ರಚಾರಕ್ಕೆ ವಾಹನಗಳನ್ನು ಬಳಸಲು ಜಿಲ್ಲಾಧಿಕಾರಿ ಕಚೇರಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಮತಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ಸಂಚಾರಕ್ಕೆ ಸಂಬಂಧಿಸಿದ ಅನುಮತಿಯನ್ನು ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಪಡೆಯಬೇಕು. ಚುನಾವಣಾ ಕರಪತ್ರಗಳ ಮುದ್ರಣಕ್ಕೂ ನಿಗದಿತ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.
ಮತದಾನ ನಡೆಯುವ ಸಂದರ್ಭದಲ್ಲಿ ಮತಗಟ್ಟೆಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಮದ್ಯ ಮಾರಾಟ ಹಾಗೂ ಸೇವನೆಯನ್ನು ನಿಷೇಧಿಸಲಾಗುತ್ತದೆ. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಲು ಎಲ್ಲ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗುತ್ತದೆ. ಮತದಾರರು ಚುನಾವಣಾ ಆಯೋಗ ಸೂಚಿಸಿರುವ ಅಧಿಕೃತ ಗುರುತಿನ ಚೀಟಿಗಳಲ್ಲಿ ಯಾವುದಾದರೂ ಒಂದನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು ಎಂದು ಹೇಳಿದರು.
ಅ. 27ರಂದು ಮತ ಎಣಿಕೆ:
ಅಕ್ಟೋಬರ್ 27ರಂದು ಕಲಬುರಗಿಯ ನಗರದ ಗುಲ್ಬರ್ಗಾ ವಿಶ್ವವಿದ್ಯಾಲಯದ ಭಾಸ್ಕರ್ ಹಾಲ್‌ನಲ್ಲಿ ಭದ್ರತಾ ಕೊಠಡಿ ಹಾಗೂ ಮತ ಎಣಿಕೆ ಕೇಂದ್ರ ಸ್ಥಾಪಿಸಲಾಗುವುದು. ಸಮೀಪದ ಪ್ರಾಣಿಶಾಸ್ತ್ರ ವಿಭಾಗದ ಸಭಾಂಗಣದಲ್ಲಿ ಮಾಧ್ಯಮ ಕೇಂದ್ರ ತೆರೆಯಲಾಗುತ್ತದೆ. ಮತ ಎಣಿಕೆಗಾಗಿ 14 ಟೇಬಲ್‌ಗಳ ವ್ಯವಸ್ಥೆ ಮಾಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಮತ ಎಣಿಕೆ ಏಜೆಂಟರ ವಿವರಗಳನ್ನು ಭಾವಚಿತ್ರದೊಂದಿಗೆ ನಿಗದಿತ ನಮೂನೆ-18ರಲ್ಲಿ ಸಲ್ಲಿಸಬೇಕು ಎಂದು ಸೂಚಿಸಿದರು.
ಅಂದು ಬೆಳಿಗ್ಗೆ 7.45ಕ್ಕೆ ಭದ್ರತಾ ಕೊಠಡಿಯ ಮುದ್ರೆ ತೆರೆಯಲಾಗುವುದು. ಈ ಸಂದರ್ಭದಲ್ಲಿ ಸಂಬಂಧಪಟ್ಟವರು ಕಡ್ಡಾಯವಾಗಿ ಹಾಜರಿರಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಮಹಾನಗರ ಪಾಲಿಕೆಯ ಉಪ ಆಯುಕ್ತೆ (ಆಡಳಿತ) ಪ್ರಮೀಳಾ ಎಂ.ಕೆ. ಸೇರಿದಂತೆ ಚುನಾವಣಾಧಿಕಾರಿಗಳು ಹಾಗೂ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಉಪಸ್ಥಿತರಿದ್ದರು.