ಡಿ.18ರಂದು ಕಲಬುರಗಿಯಲ್ಲಿ ರಾಜ್ಯ ಹೋಟೆಲ್ ಸಂಘದ ಪ್ರಶಸ್ತಿ ಪ್ರದಾನ ಸಮಾರಂಭ
ಕಲಬುರಗಿ: ರಾಜ್ಯ ಹೋಟೆಲ್ ಸಂಘದ ವಾರ್ಷಿಕ ಆತಿಥ್ಯ ರತ್ನ ಮತ್ತು ಉದ್ಯಮ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಂಘದ ಮಹಾಸಭೆ ಇದೇ ಮೊದಲ ಬಾರಿಗೆ ಡಿಸೆಂಬರ್ 18ರಂದು ಕಲಬುರಗಿಯಲ್ಲಿ ನಡೆಯಲಿದೆ.
ಜಿಲ್ಲಾ ಹೋಟೆಲ್ ವಸತಿ ಮತ್ತು ಬೇಕರಿ ಮಾಲೀಕರ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲು ನವೆಂಬರ್ 26ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಹೋಟೆಲ್ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಅನುಮೋದನೆ ನೀಡಲಾಗಿದೆ ಎಂದು ಸಂಘದ ಉಪಾಧ್ಯಕ್ಷ ಸತ್ಯನಾಥ ಶೆಟ್ಟಿ ತಿಳಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸಂಘದ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಗೆ ಕಲಬುರಗಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳನ್ನು ಆಹ್ವಾನಿಸಿ ಚರ್ಚಿಸಲಾಯಿತು. ಬಳಿಕ ಕಾರ್ಯಕ್ರಮ ಆಯೋಜನೆಯ ಜವಾಬ್ದಾರಿಯನ್ನು ಕಲಬುರಗಿಗೆ ವಹಿಸಲಾಯಿತು. ಈ ವೇಳೆ ಕಾರ್ಯಕ್ರಮದ ರೂಪುರೇಷೆ ಹಾಗೂ ಪೂರ್ವಸಿದ್ಧತೆಗಳ ಕುರಿತು ಚರ್ಚಿಸಲಾಯಿತು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 300ಕ್ಕೂ ಹೆಚ್ಚು ಹೋಟೆಲ್ ಉದ್ಯಮಿಗಳ ಪ್ರತಿನಿಧಿಗಳು, ಅವರ ಕುಟುಂಬ ಸದಸ್ಯರು ಹಾಗೂ ಹಿತೈಷಿಗಳು ಸೇರಿದಂತೆ 500ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ರಾಜ್ಯದ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳು ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ ಸಂಘದ ಮಹಾಸಭೆ ನಡೆಯಲಿದ್ದು, ಸಂಜೆ 3 ಗಂಟೆಗೆ ಆತಿಥ್ಯ ರತ್ನ ಮತ್ತು ಉದ್ಯಮ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ವಿವರಿಸಿದರು.
ಸಭೆಯಲ್ಲಿ ಕಲಬುರಗಿ ಜಿಲ್ಲಾ ಸಂಘದ ಅಧ್ಯಕ್ಷ ನರಸಿಂಹ ಮೆಂಡನ್, ಖಜಾಂಚಿ ಸುನಿಲ್ ಶೆಟ್ಟಿ, ರಾಜ್ಯ ಸಮಿತಿ ಸದಸ್ಯ ಡಾ. ಸದಾನಂದ ಪೆರ್ಲ ಹಾಗೂ ಸದಸ್ಯ ಅಶೋಕ್ ಶಹಪುರಕರ್ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.
ರಾಜ್ಯ ಸಂಘದ ಅಧ್ಯಕ್ಷ ಮಧುಕರ ಎಂ. ಶೆಟ್ಟಿ, ಗೌರವಾಧ್ಯಕ್ಷ ಜಿ.ಕೆ. ಶೆಟ್ಟಿ, ಉಪಾಧ್ಯಕ್ಷರಾದ ರವಿ ಶಾಸ್ತ್ರಿ, ಜಿ.ಎ. ದೀಪಾನಂದ, ಶೇಖರ ನಾಯ್ಡು, ಎಚ್.ಎಂ. ಉಮೇಶ್, ಶ್ರೀನಿವಾಸ ಶೆಟ್ಟಿ, ಖಜಾಂಚಿ ರಾಮಮೂರ್ತಿ, ಮೈಸೂರು ರವಿಶಾಸ್ತ್ರಿ, ರಾಘವೇಂದ್ರ ಸೇರಿದಂತೆ ಇತರ ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಲಹೆ ನೀಡಿದರು.
ಸಭೆಯ ಬಳಿಕ ಕಲಬುರಗಿ ಜಿಲ್ಲಾ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.