ಸುಳ್ಳು ಸುದ್ದಿಗಳಿಂದ ಆಡಳಿತ ವ್ಯವಸ್ಥೆ ಬದಲಿಸಲು ಸಾಧ್ಯವಿಲ್ಲ: ಛಲವಾದಿ ನಾರಾಯಣಸ್ವಾಮಿ
ಶಹಾಪುರ: ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ದೇಶದ ಆಡಳಿತ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯವಿಲ್ಲ. ದೇಶದ ಸಕ್ರಮ ಮತದಾರರು ತಮ್ಮ ಮತದಾನದ ಮೂಲಕ ಸರ್ಕಾರವನ್ನು ಬದಲಾಯಿಸಬಹುದೇ ಹೊರತು, ಡಾ. ಬಿ.ಆರ್. ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಅಡಿಯಲ್ಲಿ ನಡೆಯುತ್ತಿರುವ ಆಡಳಿತ ವ್ಯವಸ್ಥೆಯನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ನಗರದಲ್ಲಿ ಬಿಜೆಪಿ ಮುಖಂಡ ಅಮೀನರಡ್ಡಿ ಯಾಳಗಿ ಅವರ ನಿವಾಸದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ನಕಲಿ ಜೆನ್ ಝೀಗಳ ಹೋರಾಟ ಹಾಗೂ ಆಡಳಿತ ವ್ಯವಸ್ಥೆ ಬದಲಾವಣೆಯ ಹೆಸರಿನಲ್ಲಿ ನೀಡಲಾಗುತ್ತಿರುವ ಹೇಳಿಕೆಗಳ ವಿರುದ್ಧ ವಾಗ್ದಾಳಿ ನಡೆಸಿದರು. ಇಂತಹ ಹೋರಾಟಗಾರರು ಕಾಂಗ್ರೆಸ್ನ ಅಸಲಿ ಮುಖಗಳಾಗಿದ್ದಾರೆ ಎಂದು ಆರೋಪಿಸಿದರು.
ಮಾಜಿ ಸಚಿವ ಎನ್.ಮಹೇಶ್ ಮಾತನಾಡಿ, ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಸಮರ್ಥಿಸಿಕೊಂಡರು. ಅಕ್ರಮ ನುಸುಳುಕೋರರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು. ದೇಶದಲ್ಲಿ ಕಾಂಗ್ರೆಸ್ ಸೃಷ್ಟಿಸಲು ಹೊರಟಿದೆ ಎನ್ನಲಾದ ಅರಾಜಕತೆಯನ್ನು ತಡೆಯುವ ನಿಟ್ಟಿನಲ್ಲಿ ಜನರು ಜಾಗೃತರಾಗಬೇಕು ಎಂದು ಕರೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ಮುದ್ನಾಳ, ಮಾಜಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ, ಹಿರಿಯ ಮುಖಂಡ ಸಿದ್ದಣ್ಣಗೌಡ ವಡಿಗೇರಾ, ಉಪಾಧ್ಯಕ್ಷ ಬಸವರಾಜ ಸೊನ್ನದ, ಅಡಿವಪ್ಪ ಜಾಕಾ, ಪ್ರಧಾನ ಕಾರ್ಯದರ್ಶಿಗಳಾದ ಪರಶುರಾಮ ಕುರುಕುಂದಿ, ಶಿವರಾಜ ದೇಶಮುಖ, ಯಾದಗಿರಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ ವಡಿಗೇರಾ, ತಿರುಪತಿರೆಡ್ಡಿ, ರಾಜಶೇಖರ ಗೂಗಲ್, ರಾಜುಗೌಡ ಉಕ್ಕಿನಾಳ, ಗುರು ಕಾಮ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.