ವಾಡಿ | ಪಾರದರ್ಶಕ ಆಡಳಿತಕ್ಕಾಗಿ ಪ್ರಜಾ ಸೇವಾ ಆಂದೋಲನ: ತಹಶೀಲ್ದಾರ್ ನಾಗಯ್ಯ ಹಿರೇಮಠ
ವಾಡಿ: ಜನರ ಬಳಿಗೆ ಜನಪರ ಆಡಳಿತವನ್ನು ಕೊಂಡೊಯ್ಯುವ ಹಾಗೂ ಸರ್ಕಾರಿ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಜಾಸೇವಾ ಆಂದೋಲನ ಜಾರಿಗೊಳಿಸಿದೆ ಎಂದು ಚಿತ್ತಾಪುರ ತಹಶೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.
ತಾಲೂಕಿನ ನಾಲವಾರ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವುದು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ನಿಗದಿತ ಸಮಯದಲ್ಲಿ ತಲುಪಿಸುವುದೇ ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದರು.
ಪ್ರತಿ ತಿಂಗಳು ನಿಗದಿತ ದಿನ ಮತ್ತು ನಿಗದಿತ ಸ್ಥಳದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಲ್ಪಿಸಲಿದ್ದಾರೆ. ಸಾರ್ವಜನಿಕರು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಸಾರ್ವಜನಿಕರಿಂದ ಒಟ್ಟು 152 ಅರ್ಜಿಗಳು ಸ್ವೀಕರಿಸಲಾಯಿತು. ಇದರಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಪಿಂಚಣಿ ಯೋಜನೆಗಳಿಗಾಗಿ 129 ಅರ್ಜಿಗಳು ಸಲ್ಲಿಕೆಯಾಗಿರುವುದು ಗಮನಾರ್ಹವಾಗಿದೆ.
ಇದೇ ವೇಳೆ ತಾಲೂಕು ಪಂಚಾಯಿತಿಗೆ ಸಂಬಂಧಿಸಿದ 9 ಅರ್ಜಿಗಳು, ಆಹಾರ ಇಲಾಖೆಗೆ 3 ಅರ್ಜಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ 1 ಅರ್ಜಿ ಸ್ವೀಕರಿಸಲಾಗಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.
ಕಾರ್ಯಕ್ರಮದಲ್ಲಿ ಕೃಷಿ, ಉಪನೋಂದಣಿ, ಆಹಾರ, ಶಿಕ್ಷಣ, ಕಂದಾಯ, ಕೃಷಿ ಉತ್ಪನ್ನ ಮಾರುಕಟ್ಟೆ, ಹಿಂದುಳಿದ ವರ್ಗಗಳ ಕಲ್ಯಾಣ, ಅಬಕಾರಿ, ಜೆಸ್ಕಾಂ, ಅರಣ್ಯ, ಕಾರ್ಮಿಕ ಹಾಗೂ ಭೂಮಾಪನ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಅಕ್ರಮ್ ಪಾಶಾ, ಚಿತ್ತಾಪುರ ಅಬಕಾರಿ ಇಲಾಖೆಯ ಪಿಎಸ್ಐ ವನಿತಾ ಎಸ್., ಶ್ರೀಮಂತ ಸಂಗಾವಿ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ, ಮುಖಂಡರಾದ ಶಿವರೇಡ್ಡಿ ಗೌಡ ಹಾಗೂ ಶರಣಪ್ಪ ಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.