ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಲು ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 16 ಮತ್ತು 17ರಂದು ಎರಡು ದಿನಗಳ ಕಾಲ ಕಲಬುರಗಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ, ಉತ್ಸವವನ್ನು ಯಶಸ್ವಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲು ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಕೆಕೆಆರ್‌ಡಿಬಿ ಕಾರ್ಯದರ್ಶಿ ನಲಿನ್ ಅತುಲ್ ಸೂಚಿಸಿದರು.

ಗುರುವಾರ ಕೆಕೆಆರ್‌ಡಿಬಿ ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಗಣ್ಯರ ಭದ್ರತೆ, ಸಂಚಾರ ವ್ಯವಸ್ಥೆ ಸೇರಿದಂತೆ ಅಗತ್ಯ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸುವುದರ ಜತೆಗೆ, ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಜಿಲ್ಲಾಡಳಿತದ ನಿರ್ದೇಶನದಂತೆ ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಯಾವುದೇ ಲೋಪವಿಲ್ಲದೆ ನಿರ್ವಹಿಸಬೇಕು. ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಸೆಪ್ಟೆಂಬರ್ 17ರಂದು ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವದ ಮುಖ್ಯ ಕಾರ್ಯಕ್ರಮದಲ್ಲಿ ಕೆಕೆಆರ್‌ಡಿಬಿ ಅನುದಾನದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ನಲಿನ್ ಅತುಲ್ ತಿಳಿಸಿದರು.

ಕೆಕೆಆರ್‌ಡಿಬಿ ನೆರವಿನ ಅಕ್ಷರ ಆವಿಷ್ಕಾರ, ಆರೋಗ್ಯ ಆವಿಷ್ಕಾರ, ಉದ್ಯೋಗ ಆವಿಷ್ಕಾರ ಹಾಗೂ ಅರಣ್ಯ ಆವಿಷ್ಕಾರ ಸೇರಿದಂತೆ ಸುಮಾರು 11 ಪ್ರಮುಖ ವಿಷಯಗಳನ್ನು ಬಿಂಬಿಸುವ ಸ್ತಬ್ಧಚಿತ್ರಗಳನ್ನು ವಿವಿಧ ಇಲಾಖೆಗಳು ಸಿದ್ಧಪಡಿಸಿ ಪ್ರದರ್ಶಿಸಬೇಕು. ಇದರ ಜತೆಗೆ ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸುವ ಕಾರ್ಯಕ್ರಮವನ್ನೂ ಆಯೋಜಿಸಬೇಕು ಎಂದು ನಿರ್ದೇಶನ ನೀಡಿದರು.

ಅಪ್ಪನ ಕೆರೆ, ಗಣಪತಿ ಕೆರೆ, ಕೋಟೆ ಹಾಗೂ ಜಾತ್ರಾ ಮೈದಾನ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು.

ಕಲೆ, ಸಾಹಿತ್ಯ, ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ರಾಜ್ಯ ಪ್ರಶಸ್ತಿ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದ ಸಾಧಕರನ್ನು ಉತ್ಸವದ ಸಂದರ್ಭದಲ್ಲಿ ಸನ್ಮಾನಿಸಲು ನಿರ್ಧರಿಸಲಾಯಿತು. ಈ ಹಿನ್ನೆಲೆಯಲ್ಲಿ ಅರ್ಹ ಸಾಧಕರ ಪಟ್ಟಿಯನ್ನು ಸಿದ್ಧಪಡಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಜಗದೀಶ್ವರಿ ನಾಶಿ ಅವರಿಗೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪ್ರವಾಸಿ ತಾಣಗಳನ್ನು ಪರಿಚಯಿಸುವ ಉದ್ದೇಶದಿಂದ ಎರಡು ದಿನಗಳ ಕಾಲ ಡಿಜಿಟಲ್ ಮಾಹಿತಿ ಮಳಿಗೆ ಹಾಗೂ ವಸ್ತು ಪ್ರದರ್ಶನ ಮಳಿಗೆಗಳನ್ನು ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಬೇಕು ಎಂದು ನಲಿನ್ ಅತುಲ್ ತಿಳಿಸಿದರು.

ಜಿಲ್ಲಾವಾರು ಪ್ರತ್ಯೇಕ ಮಳಿಗೆಗಳನ್ನು ಸ್ಥಾಪಿಸುವುದರ ಜತೆಗೆ, ಮಳಿಗೆಗಳಲ್ಲಿ ಪ್ರದರ್ಶಿಸಲಾಗುವ ವಿಷಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಧ್ವನಿವರ್ಧಕ ವ್ಯವಸ್ಥೆಯನ್ನೂ ಕಲ್ಪಿಸಬೇಕು ಎಂದು ಸೂಚಿಸಿದರು.

ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿರುವುದರಿಂದ ಕಾರ್ಯಕ್ರಮದ ಸ್ಥಳಗಳಲ್ಲಿ ಕುಡಿಯುವ ನೀರು, ಸ್ವಚ್ಛತೆ, ವಿದ್ಯುತ್, ಸಂಚಾರ, ಆರೋಗ್ಯ ಸೇವೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಡಾ. ಬಿ. ಸುಶೀಲಾ, ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಎಸ್. ಸಂಕನೂರ್, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಷ್ ರೆಡ್ಡಿ, ಡಿಸಿಪಿ ಶಾಲು, ಎಸಿಪಿ ಪ್ರವೀಣ ನಾಯಕ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸಮದ್ ಪಟೇಲ್, ಕೆಕೆಆರ್‌ಡಿಬಿ ಅಧೀನ ಕಾರ್ಯದರ್ಶಿ ಶಿವಪುತ್ರಪ್ಪ ಕಂಟಿ, ಆಪ್ತ ಕಾರ್ಯದರ್ಶಿ ಶರದಾ ಬಿರಾದರ್, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಬೇಬಿ ಮುಗೇರಾ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಶಂಕ್ರಮ್ಮ ಡವಳಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor