ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ: ಪ್ರಮಾಣ ವಚನ ಸ್ವೀಕಾರಕ್ಕೆ ಕಲಬುರಗಿ ಜಿಲ್ಲಾಧಿಕಾರಿ ಸೂಚನೆ
ಕಲಬುರಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜೂನ್ 12ರಂದು ಜಿಲ್ಲೆಯಾದ್ಯಂತ ಸರ್ಕಾರಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಆಯೋಜಿಸಲು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಸೂಚಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ ಜೂನ್ 12ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಇಲಾಖೆಗಳು, ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗಳಲ್ಲಿ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ”ದ ಅಂಗವಾಗಿ ಪ್ರಮಾಣ ವಚನ ಸ್ವೀಕರಿಸಬೇಕು ಎಂದು ತಿಳಿಸಿದ್ದಾರೆ.
ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಸೇರಿದಂತೆ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆ ಹಾಗೂ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.