ಯಡ್ರಾಮಿ | ಕುಮ್ಮನಸಿರಸಗಿ–ಮಂದೆವಾಲ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಕಷ್ಟ; ತಕ್ಷಣ ದುರಸ್ತಿಗೆ ಆಗ್ರಹ
ಯಡ್ರಾಮಿ: ತಾಲೂಕಿನ ಕುಮ್ಮನಸಿರಸಗಿ ಗ್ರಾಮದಿಂದ ಮಂದೆವಾಲ ಗ್ರಾಮಕ್ಕೆ ಸಂಪರ್ಕಿಸುವ ಸುಮಾರು 6 ಕಿ.ಮೀ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ನಿತ್ಯ ಪರದಾಡುವಂತಾಗಿದೆ.
ಮಂದೆವಾಲ ಗ್ರಾಮದ ಮೂಲಕ ಜೇವರ್ಗಿ–ಸಿಂದಗಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿರುವುದರಿಂದ ಪ್ರತಿದಿನ ನೂರಾರು ಜನರು, ರೈತರು, ವಿದ್ಯಾರ್ಥಿಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಈ ಮಾರ್ಗವನ್ನು ಅವಲಂಬಿಸಿದ್ದಾರೆ. ಆದರೆ ರಸ್ತೆಯುದ್ದಕ್ಕೂ ದೊಡ್ಡ ಗುಂಡಿಗಳು ಬಿದ್ದಿರುವುದರಿಂದ ವಾಹನ ಸಂಚಾರ ದುಸ್ತರವಾಗಿದೆ.
ಮಳೆ ಬಂದಾಗ ಗುಂಡಿಗಳಲ್ಲಿ ನೀರು ನಿಂತು ರಸ್ತೆ ಕಾಣದ ಸ್ಥಿತಿ ನಿರ್ಮಾಣವಾಗುತ್ತಿದೆ. ಇದರಿಂದ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗುವ ಆತಂಕ ಎದುರಿಸುತ್ತಿದ್ದಾರೆ. ರೈತರು ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ತೊಂದರೆ ಅನುಭವಿಸುತ್ತಿದ್ದು, ತುರ್ತು ಸಂದರ್ಭಗಳಲ್ಲಿ ಆಂಬುಲೆನ್ಸ್ ಸೇರಿದಂತೆ ಅಗತ್ಯ ಸೇವೆಗಳ ವಾಹನಗಳ ಸಂಚಾರಕ್ಕೂ ಅಡಚಣೆಯಾಗುತ್ತಿದೆ.
ರಸ್ತೆ ದುರಸ್ತಿಗೆ ಸಂಬಂಧಿಸಿದಂತೆ ಹಲವು ಬಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕುಮ್ಮನಸಿರಸಗಿ–ಮಂದೆವಾಲ ರಸ್ತೆಯನ್ನು ತಕ್ಷಣ ದುರಸ್ತಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಥರು ಲೋಕೋಪಯೋಗಿ ಇಲಾಖೆ ಹಾಗೂ ಜನಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.